

ಬೆಂಗಳೂರು: ಟಾಕ್ಸಿಕ್ ಸಿನಿಮಾ ಚಿತ್ರೀಕರಣದ ವೇಳೆ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾಕಿರುವ ಕೃತ್ಯವು ಸ್ಯಾಟೆಲೈಟ್ ಚಿತ್ರಗಳಿಂದ ಬಯಲಾಗಿದೆ. ಈ ಬಗ್ಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಅರಣ್ಯ ಇಲಾಖೆ ಮುಂದಾಗಿದೆ.
ಒಂದು ತಿಂಗಳ ಹಿಂದಷ್ಟೆ ಈ ಬಗ್ಗೆ ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು. " ಎಚ್ ಎಂ ಟಿ ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ " ಎಂದಿದ್ದರು.
ನ್ಯಾಯಾಲಯದ ಆದೇಶ ಪಡೆದು ಅರಣ್ಯ ಇಲಾಖೆ ಎಫ್‍ಐಆರ್ ದಾಖಲಿಸಿದೆ. ಈ ಸಂಬಂಧ ಕೆವಿನ್ ಸಂಸ್ಥೆ, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್, ಹೆಚ್‍ಎಂಟಿ ಜನರಲ್ ಮ್ಯಾನೇಜರ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ಮರಗಳ ಮಾರಣಹೋಮದ ಆರೋಪ ಕೇಳಿ ಬಂದಿದ್ದ ಬೆನ್ನಲ್ಲೇ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಥಳ ಪರಿಶೀಲನೆ ನಡೆಸಿದ್ದರು. ಆರೋಪ ಸಾಬೀತಾದಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮದ ಎಚ್ಚರಿಕೆ ನೀಡಿದ್ದರು.
ಸ್ಯಾಟ್‌ಲೈಟ್ ಚಿತ್ರಗಳಿಂದ ಈ ಕೃತ್ಯ ಸ್ಪಷ್ಟವಾಗಿ ಕಾಣುತ್ತಿದೆ. ಈ ಅಕ್ರಮ ಕೃತ್ಯಕ್ಕೆ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದರು.