More

    ಕಾರ್ಮಿಕ ಪರ ಕಾನೂನು ಜಾರಿಗೆ ಒತ್ತಾಯ: ನಗರದಲ್ಲಿ ಸಿಐಟಿಯು ಕಾರ್ಯಕರ್ತರ ಪ್ರತಿಭಟನೆ

    ಮಂಡ್ಯ: ಮುಂಬರುವ ರಾಜ್ಯ ಬಜೆಟ್‌ನಲ್ಲಿ ಕಾರ್ಮಿಕರ ಪರವಾದ ಕಾನೂನುಗಳನ್ನು ಘೋಷಣೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಗರದಲ್ಲಿ ಸಿಐಟಿಯು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
    ಸರ್‌ಎಂವಿ ಪ್ರತಿಮೆ ಎದುರು ಜಮಾವಣೆಗೊಂಡ ಕಾರ್ಯಕರ್ತರು ಬೇಡಿಕೆ ಈಡೇರಿಸಬೇಕೆಂದು ಘೋಷಣೆ ಕೂಗಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ರವಾನಿಸಿದರು.
    ರಾಜ್ಯದಲ್ಲಿ ವಿವಿಧ ರೀತಿಯ ಕೈಗಾರಿಕೆಯಲ್ಲಿ ದುಡಿಯುತ್ತಿರುವ ಲಕ್ಷಾಂತರ ಸಂಘಟಿತ ಕಾರ್ಮಿಕರು ಹಾಗೂ ಅಸಂಘಟಿತ ವಲಯದಲ್ಲಿರುವ ಕಟ್ಟಡ ನಿರ್ಮಾಣ, ಆಟೋ, ಟ್ಯಾಕ್ಸಿ, ಮನೆಗೆಲಸ ಸೇರಿದಂತೆ ಉದ್ಯೋಗ ಖಾತ್ರಿಯಲ್ಲಿ ಕೆಲಸ ಮಾಡುತ್ತಿರುವ ಶ್ರಮಜೀವಿ ಮತ್ತು ವಿವಿಧ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಅನುಕೂಲವಾಗುವಂತಹ ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಣೆ ಮಾಡಬೇಕೆಂದು ಆಗ್ರಹಿಸಿದರು.
    29 ಕಾನೂನುಗಳನ್ನು 4 ಸಂಹಿತೆಗಳನ್ನಾಗಿ ಮಾಡಿರುವ ಕೇಂದ್ರದ ಶಾಸನಗಳ ನಿಯಮಾವಳಿಯನ್ನು ರಾಜ್ಯ ಸರ್ಕಾರ ಜಾರಿ ಮಾಡಬಾರದು. ವಿದ್ಯುತ್ ಖಾಸಗೀಕರಣ ಮಾಡಬಾರದು. ವಿದ್ಯುತ್ ತಿದ್ದುಪಡಿ ಕಾಯ್ದೆಯನ್ನು ತಿರಸ್ಕರಿಸಬೇಕು. ಎಲ್ಲ ವಿಭಾಗಗಳ ಕಾರ್ಮಿಕರಿಗೂ ಕನಿಷ್ಠ 31 ಸಾವಿರ ರೂ. ಮಾಸಿಕ ವೇತನ ನೀಡಬೇಕು. ತ್ರಿಪಕ್ಷೀಯ ಸಮಿತಿಯಲ್ಲಿ ಸಿಐಟಿಯು ಪ್ರತಿನಿಧಿಗಳನ್ನು ಸೇರ್ಪಡೆ ಮಾಡಬೇಕು. ಕಾರ್ಮಿಕ ವಿರೋಧಿ ತಿದ್ದುಪಡಿಗಳನ್ನು ವಾಪಸ್ ಪಡೆಯಬೇಕು. ಮಹಿಳೆಯರನ್ನು ರಾತ್ರಿ ಪಾಳಿಯಲ್ಲಿ ಮತ್ತು ಅಪಾಯಕಾರಿ ಕೆಲಸಗಳಲ್ಲಿ ದುಡಿಸಿಕೊಳ್ಳಲು ನೀಡಿರುವ ರಿಯಾಯಿತಿಯನ್ನು ರದ್ದು ಮಾಡಬೇಕು ಎಂಬುದು ಸೇರಿದಂತೆ 30 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
    ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಎಂ.ಎಂ.ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ, ಚೇತನ್, ಶ್ರೀನಿವಾಸ್, ಶಶಿಕಲಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts