ತಿ.ನರಸೀಪುರ: ಜನಸಂಖ್ಯೆ ಏರಿಕೆಗನುಗುಣವಾಗಿ ಪರಿಸರ ಸಂಪತ್ತು ಏರಿಕೆಯಾಗುತ್ತಿಲ್ಲವಾದ್ದರಿಂದ ಹವಾಮಾನ ವೈಪರೀತ್ಯಗಳು ಸಂಭವಿಸುತ್ತಿವೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಅಭಿಪ್ರಾಯಪಟ್ಟರು.
ತಾಲೂಕಿನ ಬನ್ನೂರು ಪಟ್ಟಣದ ಸಂತೇಮಾಳದ ಬಳಿಯ ಎಪಿಎಂಸಿ ಆವರಣದಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಆಶ್ರಯದಲ್ಲಿ ಗುರುವಾರ ನಡೆದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ರೈತರಿಗೆ ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಹಾಗೂ ಸಸಿ ವಿತರಣೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪರಿಸರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಗೋಮಾಳ, ಕೆರೆಕಟ್ಟೆಗಳು, ಮೀಸಲು ಅರಣ್ಯಗಳು ಬಲಾಢ್ಯರ ಪಾಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬನ್ನೂರು ರಾಜು ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ನಾವು ಪರಿಸರ ಸಂರಕ್ಷಣೆ ಮರೆತ್ತಿದ್ದೇವೆ. ಪ್ರತಿಯೊಬ್ಬರೂ ಪ್ರರಿಸರ ಉಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದರು.
ತಾಲೂಕು ಸಾಮಾಜಿಕ ವಲಯ ಉಪ ಅರಣ್ಯಾಧಿಕಾರಿ ಆಂತೋನಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ತಿಳಿಸಿಕೊಟ್ಟರು. ಸರ್ಕಾರಿ ಕಾಲೇಜು ಹಾಗು ಪ್ರೌಢಶಾಲೆಯಲ್ಲಿ ಅತಿ ಹೆಚ್ಚು ಅಂಕ ಪಡೆದ 13 ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ರೈತ ಮುಖಂಡ ಕಿರಗಸೂರು ಶಂಕರ್, ಸರ್ಕಾರಿ ಪದವಿ ಪೂರ್ವ ಕಾಲೇಜು ಶಿಕ್ಷಕ ಗೂಳಿಗೌಡ, ಅತ್ತಹಳ್ಳಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಚಿನ್ನಸ್ವಾಮಿ, ರವೀಂದ್ರ, ರವೀಶ್, ತಿಬ್ಬೇಗೌಡ, ಕುಮಾರ್, ಅತ್ತಹಳ್ಳಿ ಲಿಂಗಣ್ಣ, ಸೂರಿ, ಇತರರು ಇದ್ದರು.