

ಬೆಂಗಳೂರು: ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ, ಪ್ರಾದೇಶಿಕ ಅಸಮತೋಲನ, ಅಸಮಾನತೆ ತೊಡೆಯಲು ನಿಮ್ಮ ಸಹಕಾರ ಹೆಚ್ಚು ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ IAS-IPS ಅಧಿಕಾರಿಗಳಿಗೆ ಕರೆ ನೀಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಹೊಸವರ್ಷದ ಶುಭಾಶಯಗಳನ್ನು ಕೋರಿ ಮಾತನಾಡಿದರು.
ಬದುಕಿನಲ್ಲಿ ಏಳು ಬೀಳು ಸಹಜ ಮತ್ತು ನಿರಂತರ. ಪರಿಸ್ಥಿತಿಗಳು ಸದಾ ನಮ್ಮ ಪರವಾಗಿ ಇರುವುದಿಲ್ಲ. ಆದರೆ ಆತ್ಮವಿಶ್ವಾಸ ಕಳೆದುಕೊಳ್ಳದೆ ಧೈರ್ಯದಿಂದ ಸಮಸ್ಯೆಗಳನ್ನು, ಸಂದರ್ಭಗಳನ್ನು ನಿರ್ವಹಿಸಿ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ. ಆಡಳಿತಾಂಗದಲ್ಲಿ IAS-IPS-IRS-IFS ಅಧಿಕಾರಿಗಳ ಜವಾಬ್ದಾರಿ ಹೆಚ್ಚು. ನಾವು ಕಾನೂನುಗಳನ್ನು ರಚಿಸಿ, ಜಾರಿ ಆಗುವ ದಿಕ್ಕಿನಲ್ಲಿ ನಿರಂತರ ನಿಗಾ ವಹಿಸುತ್ತೇವೆ. ಅಧಿಕಾರಿ ವರ್ಗ ಸಮಾಜಕ್ಕೆ ಪೂರಕವಾಗಿ ಕ್ರಿಯಾಶೀಲತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.
ಸಂವಿಧಾನ ಜಾರಿ ಸಂದರ್ಭದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಆಡಿದ ಮಾತುಗಳನ್ನು ಉಲ್ಲೇಖಿಸಿದ ಸಿಎಂ, ಸಮಾಜದ ಎಲ್ಲಾ ವರ್ಗಗಳಿಗೆ ಸಾಮಾಜಿಕ-ಆರ್ಥಿಕ ಸ್ವಾತಂತ್ರ್ಯ ಒದಗಿಸಬೇಕು. ಇಲ್ಲದಿದ್ದರೆ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುವುದಿಲ್ಲ ಎಂದರು.
ಯುವ ಜನತೆ ನಮ್ಮ ಆಸ್ತಿ
ಯುವ ಜನತೆ ನಮ್ಮ ಸಮಾಜದ ಆಸ್ತಿ. ಇವರ ಭವಿಷ್ಯ ಹಾಳಾಗದಂತೆ ಎಚ್ಚರ ವಹಿಸುವ ಸವಾಲನ್ನು IPS ಅಧಿಕಾರಿಗಳು ಸ್ವೀಕರಿಸಬೇಕು. ಡ್ರಗ್ಸ್ ಹಾವಳಿ, ಅಪರಾಧಿಕ ಜಗತ್ತಿನ ಕಡೆಗೆ ಯುವ ಜನತೆ ಆಕರ್ಷಿತರಾಗದಂತೆ ಎಚ್ಚರ ವಹಿಸಿ. ತಂತ್ರಜ್ಞಾನ ಮತ್ತು ವಿಜ್ಞಾನದ ಪ್ರಗತಿ ಆಗುತ್ತಿದೆ. ಈ ಪ್ರಗತಿ ಅಪರಾಧಗಳಿಗೆ ಬಳಕೆ ಆಗದೆ ಯುವ ಜನರ ಭವಿಷ್ಯ ರೂಪಿಸಲು ಸಹಕಾರಿ ಆಗುವಂತೆ ಕರ್ತವ್ಯ ನಿರ್ವಹಿಸಿ ಎಂದು ಸಲಹೆ ನೀಡಿದರು.
ನೀವು ಅಧಿಕಾರಿ ವರ್ಗ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದರೆ ರಾಜ್ಯದಲ್ಲಿ ಅದ್ಭುತ ಬದಲಾವಣೆ, ಸುಧಾರಣೆಗಳನ್ನು ತರಲು ಸಾಧ್ಯವಿದೆ. ಇದಕ್ಕಾಗಿ ನಿಮ್ಮ ಕಾರ್ಯಕ್ಷಮತೆ ಬಳಕೆಯಾಗಲಿ ಎಂದರು.
ಅಧಿಕಾರಿ ವರ್ಗಕ್ಕೆ ನಮ್ಮ ಸಲಹೆಯ ಅಗತ್ಯ ಇಲ್ಲ. ನೀವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಂಡರೆ ಸಾಕು. ಭ್ರಷ್ಟಾಚಾರ ವ್ಯವಸ್ಥೆ ಕಡಿಮೆ ಆಗುವ ಬದಲಿಗೆ ಹೆಚ್ಚಾಗುತ್ತಿರುವುದು ದುರಂತ. ಆದ್ದರಿಂದ ನಾವೆಲ್ಲರೂ ನಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಪ್ರಾಮಾಣಿಕವಾಗಿ ನಡೆದುಕೊಳ್ಳೋಣ ಎಂದು ಕರೆ ನೀಡಿದರು. ನಮ್ಮ-ನಿಮ್ಮ ಉದ್ದೇಶ ಒಂದೇ. ಸಮಾಜದ ಪ್ರಗತಿ ಮತ್ತು ಆರೋಗ್ಯಕರ ಬದಲಾವಣೆ. ಇದಕ್ಕಾಗಿ ನಮ್ಮ ನಮ್ಮ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳೋಣ ಎಂದು ಕರೆ ನೀಡಿದರು.