ದೀಪಿಕಾ ವಿದ್ಯಾರ್ಥಿ ವೇತನ ಯೋಜನೆಗೆ ಸಿಎಂ ಚಾಲನೆ; 37 ಸಾವಿರ ವಿದ್ಯಾರ್ಥಿನಿಯರಿಗೆ ಪ್ರಯೋಜನ

depika
Published on

ಬೆಂಗಳೂರು: ಸರ್ಕಾರಿ ಶಾಲಾಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ವಾರ್ಷಿಕ 30 ಸಾವಿರ ರೂ. ನೀಡುವ ದೀಪಿಕಾ ವಿದ್ಯಾರ್ಥಿ ವೇತನ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಚಾಲನೆ ನೀಡಿದರು. ಹೆಬ್ಬಾಳದ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಡಾ.ಬಾಬು ರಾಜೇಂದ್ರ ಪ್ರಸಾದ್ ಅಂತರಾಷ್ಟ್ರೀಯ ಸಮಾವೇಶ ಭವನದಲ್ಲಿ ಆಯೋಜಿಸಲಾಗಿದ್ದ ಉನ್ನತ ಶಿಕ್ಷಣ ಇಲಾಖೆ ಮತ್ತು ಅಜಿಂ ಪ್ರೇಮ್ ಜಿ ಫೌಂಡೇಶನ್ ಸಹಯೋಗದೊಂದಿಗೆ ರೂಪಿಸಿರುವ ದೀಪಿಕಾ ಯೋಜನೆಗೆ ಚಾಲನೆ ನೀಡಿದ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯೋಜನೆಯಿಂದ ರಾಜ್ಯದ 37 ಸಾವಿರ ವಿದ್ಯಾರ್ಥಿನಿಯರಿಗೆ ಪ್ರಯೋಜನವಾಗಲಿದೆ ಎಂದರು. ರಾಜ್ಯದ ಪ್ರತಿಷ್ಠಿತ ಐಟಿ ದಿಗ್ಗಜರಾದ ಅಜೀಂ ಪ್ರೇಂಜಿಯವರು ತಮ್ಮ ಫೌಂಡೇಶನ್ ಮೂಲಕ ಅನೇಕ ಜನಪರ ಕಾರ್ಯಗಳನ್ನು ಕೈಗೊಂಡಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ ಪೂರೈಸುತ್ತಿದ್ದಾರೆ. ಅಲ್ಲದೇ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಉನ್ನತಶಿಕ್ಷಣದಲ್ಲಿ ತೊಡಗಿಸಿಕೊಳ್ಳುವುದಕ್ಕೆ ಪ್ರೇರಣೆಯಾಗಿ ದೀಪಿಕಾ ವಿದ್ಯಾರ್ಥಿ ವೇತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ನಮ್ಮ ದೇಶದಲ್ಲಿ ಹಿಂದಿನಿಂದಲೂ ಶೂದ್ರರಂತೆ, ಹೆಣ್ಣುಮಕ್ಕಳೂ ಸಹ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಶಿಕ್ಷಣ ಪಡೆದ ಹೆಣ್ಣುಮಕ್ಕಳ ಸರಾಸರಿ, ರಾಷ್ಟ್ರೀಯ ಸರಾಸರಿಗಿಂತ ಕಡಿಮೆಯಿದೆ. ಹೆಣ್ಣುಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಿತರಾಗಬೇಕೆಂಬ ಸರ್ಕಾರದ ಉದ್ದೇಶದಲ್ಲಿ ಕೈಜೋಡಿಸಿರುವ ಅಜೀಂ ಪ್ರೇಮ್ ಜೀ ಅವರಿಗೆ ಸಿಎಂ ಅಭಿನಂದನೆ ಸಲ್ಲಿಸಿದರು. ಸಮಾರಂಭದಲ್ಲಿ ಅಜೀಂ ಪ್ರೇಮ್‌ಜಿ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಪ್ಪ ಮತ್ತಿತರರು ಉಪಸ್ಥಿತರಿದ್ದರು.

ಯೋಜನೆಗೆ ಯಾರು ಅರ್ಹರು ?

10 ಮತ್ತು 12 ನೇ ತರಗತಿಯನ್ನು ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರು ಈ ಯೋಜನೆಗೆ ಅರ್ಹರಾಗಿದ್ದು, ಪದವಿ ಕೋರ್ಸ್ ಪೂರ್ಣಗೊಳಿಸುವವರೆಗೆ ವಿದ್ಯಾರ್ಥಿನಿಯರಿಗೆ ಪ್ರತಿವರ್ಷ 30 ಸಾವಿರ ರೂ. ಗಳನ್ನು ವಿದ್ಯಾರ್ಥಿ ವೇತನವಾಗಿ ನೀಡಲಾಗುತ್ತದೆ. ಈ ಯೋಜನೆಯ ಲಾನುಭವಿಗಳಾಗಲು ವಿದ್ಯಾರ್ಥಿನಿಯರು ಪ್ರತಿ ವರ್ಷ ತಪ್ಪದೇ ಉತೀರ್ಣರಾಗಬೇಕು. ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ಗ್ರಾಮೀಣ ಭಾಗದ ಮಕ್ಕಳಾಗಿದ್ದು, ಇಂತಹ ವಿದ್ಯಾರ್ಥಿನಿಯರಿಗೆ ಅನುಕೂಲವಾಗಲೆಂಬ ಸದುದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ.

"ಸಮಾಜದಲ್ಲಿನ ಅಸಮಾನತೆಯನ್ನು ನಿವಾರಿಸದ ಹೊರತು ಸಮಸಮಾಜದ ನಿರ್ಮಾಣ ಸಾಧ್ಯವಿಲ್ಲ. ಸಮಾಜದಲ್ಲಿ ಮೂಢನಂಬಿಕೆ ಹಾಗೂ ಮೌಢ್ಯಗಳ ನಿವಾರಣೆಯಾಗಲು ವೈಚಾರಿಕತೆ ಹಾಗೂ ವೈಜ್ಞಾನಿಕ ಶಿಕ್ಷಣ ಅಗತ್ಯ. ಇಂತಹ ಅಜ್ಞಾನದ ಲಾಭವನ್ನು ಪಟ್ಟಭದ್ರಹಿತಾಸಕ್ತಿಗಳು ಪಡೆಯುತ್ತಿದ್ದು, ಇದರಿಂದ ಪಾರಾಗಲು ಶಿಕ್ಷಣವಿರಬೇಕು.”  -ಸಿದ್ದರಾಮಯ್ಯ, ಮುಖ್ಯಮಂತ್ರಿ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net