

ಬೆಂಗಳೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದು, ಕೈ ಪಾಳಯದಲ್ಲಿ ತಲ್ಲಣವನ್ನುಂಟು ಮಾಡಿದೆ. ಇತ್ತ ರಾಜ್ಯಪಾಲರ ನಡೆಗೆ ಕಾಂಗ್ರೆಸ್ ನಾಯಕರು ಕೌಂಟರ್ ಕೊಡಲು ಸಜ್ಜಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ನಾನು ನಿರೀಕ್ಷೆ ಮಾಡಿದ್ದೆ. ಯಾವಾಗ ರಾಜ್ಯಪಾಲರು 29 ರಂದು ನೋಟಿಸ್ ಕೊಟ್ಟಿದ್ದರೋ ಅಂದೇ ಅಂದಾಜಿಸಿದ್ದೆ. ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಜನಾರ್ದನ ರೆಡ್ಡಿ ಮೇಲೆ ಪಿಟಿಷನ್ ಇದೆ. ಆದರೆ ನನಗೆ ಮಾತ್ರ ಶೋಕಾಸ್ ನೋಟಿಸ್ ಕಳುಹಿಸಿದ್ದಾರೆ. ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ.
ಕರ್ನಾಟಕ ರಾಜ್ಯದ ಚುನಾಯಿತ ಸರ್ಕಾರವನ್ನು ಅಭ್ರಗೊಳಿಸುವ ದೊಡ್ಡ ಷಡ್ಯಂತ್ರವನ್ನು ಮಾಡಲಾಗಿದೆ. ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯದ ಕೆಲ ಮುಖಂಡರು ಈ ಷಡ್ಯಂತ್ರ ಕೈಗೊಂಡಿದ್ದಾರೆ.ಉತ್ತರಾಖಂಡ, ಜಾರ್ಖಂಡ್, ನವದೆಹಲಿಯಲ್ಲಿ ಮಾಡಿದಂತೆ ಕರ್ನಾಟಕದಲ್ಲಿಯೂ ಷಡ್ಯಂತ್ರ ಮಾಡಿದ್ದಾರೆ. ಮೇಲ್ನೋಟಕ್ಕೆ ನನ್ನ ಮೇಲೆ ಯಾವುದೇ ಪ್ರಕರಣವಿಲ್ಲ ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದ್ದು, ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕಾನೂನು ಹೋರಾಟ ಮಾಡಲಾಗುವುದು.
ನನ್ನ ವಿರುದ್ಧ ದೂರು ಬಂದ ದಿನವೇ ಶೋಕಾಸ್ ನೋಟಿಸ್ ನೀಡಲಾಗಿತ್ತು. ರಾಜ್ಯಪಾಲರ ಈ ನಡೆಯನ್ನು ನಿರೀಕ್ಷಿಸಲಾಗಿತ್ತು. ಶಾಸಕರು, ಸಂಪುಟ ಸಚಿವರು, ಪಕ್ಷದ ವರಿಷ್ಠರೆಲ್ಲರೂ ನನ್ನ ಪರವಾಗಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಇದು ರಾಜಕೀಯ ಪಿತೂರಿಯಾಗಿದ್ದು, ನಾನು ರಾಜಿನಾಮೆ ನೀಡುವ ಪ್ರಶ್ನೆಯಿಲ್ಲ. ರಾಜ್ಯಪಾಲರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರಿಗೆ ನನ್ನ ರಾಜಿನಾಮೆ ಕೇಳಲು ಯಾವುದೇ ನೈತಿಕತೆ ಇಲ್ಲ. ಕಾಂಗ್ರೆಸ್ ಸರ್ಕಾರ ಹಾಗೂ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಅವರಿಗೆ ಸಹಿಸಲಾಗುತ್ತಿಲ್ಲ .ಕೇಂದ್ರ ಸರ್ಕಾರ ಸಾಮಾಜಿಕ ನ್ಯಾಯ ಹಾಗೂ ಗ್ಯಾರಂಟಿ ಯೋಜನೆಗಳ ವಿರುದ್ಧವಾಗಿದೆ . ಬಿಜೆಪಿಯವರ ಈ ನಿಲುವಿಗ ಈಗ ಜೆಡಿಎಸ್ ನವರೂ ಬೆಂಬಲ ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ , ಜನಾರ್ಧನ ರೆಡ್ಡಿ ಯವರ ವಿರುದ್ಧ ದೂರು ನೀಡಲಾಗಿದ್ದರೂ, ಇದುವರೆಗೆ ಯಾವುದೇ ಕ್ರಮವಾಗಿಲ್ಲ. ನವೆಂಬರ್ ತಿಂಗಳಲ್ಲಿ ಹೆಚ್.ಡಿ. ಕುಮಾರಸ್ವಾಮಿಯವರ ಮೇಲೆ ಅನಧಿಕೃತ ಗಣಿಗಾರಿಕೆ ಪರವಾನಗಿ ನೀಡಿರುವ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೋರಿದ್ದರೂ ಯಾವುದೇ ಕ್ರಮವಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.