ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ! ಜನರ ಆಶೀರ್ವಾದವೇ ನನಗೆ ಶ್ರೀರಕ್ಷೆ: ಸಿಎಂ

ವಿಜಯವಾಣಿ - 2024-09-24T143648.088
Published on

ಬೆಂಗಳೂರು: ಇಂದು ಮುಡಾ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್, ಮುಖ್ಯಮಂತ್ರಿಗಳಿಗೆ ಬಿಗ್ ಶಾಕ್ ನೀಡಿತು. ಇನ್ನು ಪ್ರಕರಣದ ತೀರ್ಪು ಹೊರಬಿದ್ದ ನಂತರ ಮೊದಲ ಪ್ರತಿಕ್ರಿಯೆ ನೀಡಿದ ಸಿಎಂ, ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ‌ ಮಾತನಾಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ ಎಂದು ಹೇಳಿದರು.

ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17ಎಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ. ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರೊಂದಿಗೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ. ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ ಎಸ್ ಎಸ್, 17ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್​ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು ಎಂದರು.

ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ಎಸ್ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ. ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ. ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ. ಇದು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ದದ ಹೋರಾಟ ಎಂದು ಹೇಳಿದರು.

ಬಿಜೆಪಿ, ಜೆಡಿಎಸ್​ನ ಈ ಸೇಡಿನ ರಾಜಕೀಯದ ವಿರುದ್ದ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ. ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು, ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ. ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ ಎಂದರು.

ನನ್ನ ೪೦ ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸವಿದೆ. ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ. ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮ್ಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕೆಂದು ನಾನು ಮನವಿ ಮಾಡುತ್ತೇನೆ ಎಂದು ತಿಳಿಸಿದರು.

ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ. ಇದೇ ಬಿಜೆಪಿ, ಜೆಡಿಎಸ್ ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರ ಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ವಿರೋಧಿಸಿದ್ದಾರೆ. ಇಂದು ನನ್ನ ವಿರುದ್ದ ರಾಜಕೀಯ ಸಂಚು ನಡೆಸುತ್ತಿರುವ ಇದೇ ನಾಯಕರು ಎಸ್ಸಿ ಎಸ್ಪಿ/ಟಿಎಸ್‌ಪಿ ಕಾಯ್ದೆಯನ್ನು ವಿರೋಧಿಸಿದ್ದಾರೆ.

ಕರ್ನಾಟಕದ ಜನತೆ ಇಲ್ಲಿಯವರೆಗೆ ಭಾರತೀಯ ಜನತಾ ಪಕ್ಷಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವಷ್ಟು ಬಹುಮತ ನೀಡಿಲ್ಲ. ಇಲ್ಲಿಯ ವರೆಗೆ ಬಿಜೆಪಿ ಅನೈತಿಕವಾಗಿ, ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದದ್ದು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ ೧೩೬ ಸದಸ್ಯರ ಬಲ ನೀಡಿ ಗೆಲ್ಲಿಸಿದರು. ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು, ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ನನ್ನ ವಿರುದ್ದ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರವನ್ನು ಡಿಸ್ಟರ್ಬ್ ಮಾಡುವ ಹುನ್ನಾರ ನಡೆಸಿದೆ ಎಂದರು.

ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರಮೋದಿ ನೇತೃತ್ವದ ಬಿಜೆಪಿ ದೇಶಾದ್ಯಂತ ನಡೆಸುತ್ತಿದೆ. ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ ಎಂದು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net