

ಉತ್ತರ ಕನ್ನಡ: ಕಳೆದ ಹಲವು ದಿನಗಳಿಂದ ಉತ್ತರ ಕನ್ನಡ ಹಾಗೂ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗಿತ್ತಿದ್ದು, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು ಹಲವರು ಸಾವಿಗೀಡಾದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ, ರಕ್ಷಣಾ ಕಾರ್ಯಾಚರಣೆ ಪರಿಶೀಲನೆ ನಡೆಸಿ, ಅಧಿಕಾರಿಗಳಿಗೆ ಒಂದಷ್ಟು ಸಲಹೆ ನೀಡಿದರು.
ಇದನ್ನೂ ಓದಿ: ಸಂಪಾದನೆಗೆ ಒತ್ತು, ಮಾನವೀಯ ಮೌಲ್ಯಕ್ಕೆ ಕುತ್ತು
"ಮಣ್ಣಿನಡಿ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಅಪಾಯಕಾರಿ ಗುಡ್ಡವಿದೆ. ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ. ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಎಸ್.ಡಿ.ಆರ್.ಎಫ್ ಮತ್ತು ಎನ್.ಡಿ.ಆರ್.ಎಫ್ ಸಿಬ್ಬಂದಿಗಳ ಕಾರ್ಯಕ್ಷಮತೆಗೆ ನಿಜಕ್ಕೂ ಶ್ಲಾಘನೀಯ" ಎಂದು ಸಿಎಂ ಹೇಳಿದರು.
"ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ. ಹಲವು ದಿನಗಳಿಂದ ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಸ್ಥಳದಲ್ಲಿ ನಿಂತು ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಕಾರ್ಯಾಚರಣೆ ನಡೆಯುತ್ತಿರುವ ಜಾಗ ಮತ್ತು ಮಣ್ಣು ತುಂಬಿರುವ ರಸ್ತೆಯೂ ಕುಸಿಯುವ ಸಾಧ್ಯತೆ ಇದೆ. ಹೀಗಾಗಿ ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿಗಳು ಈ ಬಗ್ಗೆ ಹೆಚ್ಚು ಜಾಗರೂಕರಾಗಿರುವಂತೆ ಎಚ್ಚರಿಕೆ ನೀಡಿದ್ದೇನೆ" ಎಂದರು.
"ಗುಡ್ಡ ಕುಸಿತದ ಸ್ಥಳ ಒಂದು ರೀತಿ ದ್ವೀಪದಂತಾಗಿದೆ. ಸುತ್ತಲೂ ಕಾಳಿ ನದಿ ಭೋರ್ಗರೆದು ಹರಿಯುತ್ತಿದೆ. ನಡುವೆ ಅರ್ಧ ಕುಸಿದ ಗುಡ್ಡ ನಿಂತಿದೆ. ಹೀಗಾಗಿ ಕಾರ್ಯಾಚರಣೆ ವೇಳೆ ಎದುರಾಗಬಹುದಾದ ಅಪಾಯಗಳು ಮತ್ತು ಸವಾಲುಗಳ ಬಗ್ಗೆ ಉನ್ನತ ಮಟ್ಟದ ತಜ್ಞರಿಂದ ಮಾಹಿತಿ ಪಡೆದು, ಅಗತ್ಯ ತಂತ್ರಜ್ಞಾನದ ನೆರವು ಪಡೆಯುವಂತೆ ಸೂಚಿಸಿದ್ದೇನೆ. ಕಂದಾಯ ಸಚಿವ ಕೃಷ್ಣಬೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಶಾಸಕ ಸತೀಶ್ ಸೈಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್, ಶಾಲಿನಿ ರಜನೀಶ್ ಸೇರಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳದಲ್ಲಿದ್ದರು" ಎಂದು ಹೇಳಿದರು.
"ಜೀವದ ಹಂಗು ತೊರೆದು ಕಾರ್ಯಾಚರಣೆ ನಡೆಸುತ್ತಿರುವ ಸಿಬ್ಬಂದಿಯ ಕಾರ್ಯಕ್ಷಮತೆಗೆ ಶ್ಲಾಘನೆ ವ್ಯಕ್ತಪಡಿಸಿದ ಸಿಎಂ, ಪತ್ರಕರ್ತರಿಗೆ ರೇನ್ ಕೋಟ್ ಕೊಟ್ಟಿದ್ದೀರಾ? ಎಂದು ಕೇಳಿದರು. ಒಂದೇ ಸಮನೆ ಸುರಿಯುತ್ತಿದ್ದ ಭೀಕರ ಮಳೆ ನಡುವೆ ಕಾರ್ಯ ನಿರ್ವಹಿಸುತ್ತಿದ್ದ ಪತ್ರಕರ್ತರು ಮತ್ತು ಕ್ಯಾಮರಾಮನ್ಗಳನ್ನು ಗಮನಿಸಿದ ಮುಖ್ಯಮಂತ್ರಿಗಳು, ಪತ್ರಕರ್ತರಿಗೆಲ್ಲಾ ರೇನ್ ಕೋಟ್ ಮತ್ತು ರಬ್ಬರ್ ಶೂ ಕೊಟ್ಟಿದ್ದೀರಾ" ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.