More

    ನಾಳೆಯಿಂದ ಕೊಬ್ಬರಿ ಖರೀದಿ

    ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಗುಣಮಟ್ಟದ ಉಂಡೆ ಕೊಬ್ಬರಿ ಖರೀದಿಗಾಗಿ ಜ.20ರಿಂದ ಜಿಲ್ಲೆಯ ಚಿಕ್ಕಮಗಳೂರು, ಕಡೂರು, ತರೀಕೆರೆಗಳಲ್ಲಿ ಖರೀದಿ ಕೇಂದ್ರ ತೆರೆದು ಖರೀದಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೂಚಿಸಿದರು.

    ಡಿಸಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಖರೀದಿ ಕೇಂದ್ರಗಳಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದವಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದರು.
    ಪ್ರತಿದಿನ ಅಧಿಕಾರಿಗಳು ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಖರೀದಿ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ರೈತರಿಗೆ ಯಾವುದೇ ತೊಂದರೆ ಆಗದಂತೆ ನಿಗಾವಹಿಸಬೇಕು. ಸರ್ಕಾರದ ನಿರ್ದೇಶನದ ಅನ್ವಯ ಪ್ರತಿ ಕ್ವಿಂಟಾಲ್ ಗುಣಮಟ್ಟದ ಉಂಡೆ ಕೊಬ್ಬರಿಗೆ 12 ಸಾವಿರ ರೂ. ನಿಗದಿಪಡಿಸಲಾಗಿದೆ. ಕೊಬ್ಬರಿ ಖರೀದಿಸಲು ಕೇಂದ್ರ ಸರ್ಕಾರದ ಖರೀದಿ ಸಂಸ್ಥೆಯನ್ನಾಗಿ ನಫೆಡ್ ಹಾಗೂ ರಾಜ್ಯ ಸರ್ಕಾರದ ಖರೀದಿ ಸಂಸ್ಥೆಯನ್ನಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನೇಮಿಸಲಾಗಿದೆ ಎಂದರು.
    ಸಂಸ್ಥೆಗಳು ಖರೀದಿಗೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಜ.20ರಿಂದ ಅನ್ವಯ ಆಗುವಂತೆ 45 ದಿನಗಳವರೆಗೆ ರೈತರ ನೋಂದಣಿ ಕಾರ್ಯವನ್ನು ಬಯೋಮೆಟ್ರಿಕ್ ಮೂಲಕ ಮಾಡಬೇಕು. ಖರೀದಿ ಸಂಸ್ಥೆಗಳು ಕೊಬ್ಬರಿ ಖರೀದಿ ಪ್ರಕ್ರಿಯೆಯಲ್ಲಿ ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವಂತೆ ನಫೆಡ್ ಮಾರ್ಗಸೂಚಿ ಅನುಸರಿಸಬೇಕು. ಖರೀದಿಸಿದ ಕೊಬ್ಬರಿಯನ್ನು ತಾಂತ್ರಿಕ ಮತ್ತು ವೈಜ್ಞಾನಿಕ ಸೌಲಭ್ಯದಿಂದ ಕೂಡಿರುವ ಗೋದಾಮುಗಳಲ್ಲಿ ದಾಸ್ತಾನು ಮಾಡಬೇಕು. ಕೊಬ್ಬರಿ ಖರೀದಿಸುವಾಗ ಪ್ರತಿ ಎಕರೆಗೆ ಗರಿಷ್ಠ 6 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಮಾತ್ರ ಖರೀದಿಸಬೇಕು ಎಂದು ಸೂಚಿಸಿದರು.
    ಕೃಷಿ ಉತ್ಪನ್ನ ಮಾರುಕಟ್ಟೆ ಮಂಡಳಿ ಉಪನಿರ್ದೇಶಕ ಶ್ರೀಹರಿ, ಆಹಾರ ಇಲಾಖೆ ಉಪನಿರ್ದೇಶಕ ಸಂಜಯ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸುಜಾತಾ, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಪೂರ್ಣಿಮಾ, ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ಜಿಲ್ಲಾ ವ್ಯವಸ್ಥಾಪಕ ಉದಯ್ ಇತರರಿದ್ದರು.
    ರೈತರ ಹೆಸರಿನಲ್ಲಿ ವರ್ತಕರು ತರುವ ಕೊಬ್ಬರಿಯನ್ನು ಖರೀದಿಸಬಾರದು. ಯಾವುದೇ ಲೋಪವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡಿರುವ ರೈತರು ತಮ್ಮ ಮೊಬೈಲ್ ಸಂಖ್ಯೆ, ಆಧಾರ್ ಸಂಖ್ಯೆ ಸರಿಯಿರುವ ಬಗ್ಗೆ ಪರಿಶೀಲಿಸಿಕೊಳ್ಳಬೇಕು. ರೈತರ ಆಧಾರ್ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ ಉತ್ಪನ್ನದ ಹಣ ಡಿಬಿಟಿ ಮೂಲಕ ಜಮೆಯಾಗುವಂತೆ ಪಾವತಿ ಮಾಡಬೇಕು ಎಂದು ಡಿಸಿ ಮೀನಾ ನಾಗರಾಜ್ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts