

ಹೈದರಾಬಾದ್ : ತೆಲಂಗಾಣದಲ್ಲಿ ಕರೊನಾ ಲಾಕ್ಡೌನನ್ನು ಸಂಪೂರ್ಣವಾಗಿ ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಕರೊನಾ ಪಾಸಿಟಿವಿ ರೇಟ್ನಲ್ಲಿ ಮಹತ್ವದ ಇಳಿಕೆ ಕಂಡುಬಂದ ಹಿನ್ನೆಲೆಯಲ್ಲಿ ವೈದ್ಯಕೀಯ ತಜ್ನರು ನೀಡಿದ ಸಲಹೆಗಳ ಮೇಲೆ ಸಂಪುಟ ಸಭೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.
ರಾಜ್ಯದಲ್ಲಿ ಕರೊನಾ ಸೋಂಕು ಹರಡುವಿಕೆಯನ್ನು ಬೇರೆ ರಾಜ್ಯಗಳಿಗಿಂತ ತ್ವರಿತವಾಗಿ ನಿಯಂತ್ರಿಸಲು ಸಾಧ್ಯವಾಗಿದೆ. ದೇಶಾದ್ಯಂತ ಮತ್ತು ನೆರೆಹೊರೆಯ ರಾಜ್ಯಗಳಲ್ಲೂ ಕರೊನಾ ಪ್ರಕರಣಗಳು ಕಡಿಮೆಯಾಗುತ್ತಿರುವುದರಿಂದ ಲಾಕ್ಡೌನ್ ಅಂತ್ಯಗೊಳಿಸಲಾಗುತ್ತಿದೆ ಎಂದು ಸರ್ಕಾರದ ಹೇಳಿಕೆ ತಿಳಿಸಿದೆ.
ರಾಜ್ಯದ ಎಲ್ಲಾ ಇಲಾಖೆಗಳಿಗೆ ನಿರ್ಬಂಧಗಳನ್ನು ತೆರವುಗೊಳಿಸಲು ಸರ್ಕಾರ ಆದೇಶಿಸಿದೆ. ಅಷ್ಟೇ ಅಲ್ಲ, ಸಾರ್ವಜನಿಕ ಶಿಕ್ಷಣ ಇಲಾಖೆಗೆ ಎಲ್ಲ ಬಗೆಯ ಶೈಕ್ಷಣಿಕ ಸಂಸ್ಥೆಗಳನ್ನು ಜುಲೈ 1 ರಿಂದ ಪುನರಾಂಭಿಸಲು ನಿರ್ದೇಶನ ನೀಡಿದೆ. ವಿದ್ಯಾರ್ಥಿಗಳು ಶಾಲೆಗೆ ಹೋಗಿ ಕಲಿಯುವ ಅವಕಾಶ ಕಲ್ಪಿಸಲಾಗಿದೆ. ಶಾಲಾ ಕಾಲೇಜುಗಳ ಹಾಜರಾತಿ, ಆನ್ಲೈನ್ ತರಗತಿಗಳು ಮತ್ತು ಇತರ ವಿಚಾರಗಳ ಬಗ್ಗೆ ಶೀಘ್ರದಲ್ಲೇ ಮಾರ್ಗಸೂಚಿಗಳನ್ನು ಇಲಾಖೆ ಪ್ರಕಟಿಸಲಿದೆ ಎನ್ನಲಾಗಿದೆ.
ಮತ್ತೆ ಸೋಂಕು ಹೆಚ್ಚಾಗದಂತೆ ಜನರು ಸಹಕಾರ ನೀಡಬೇಕೆಂದು ಮನವಿ ಮಾಡಿರುವ ಸರ್ಕಾರ, ಮಾಸ್ಕ್ ತೊಡುವ ಮತ್ತು ಸಾಮಾಜಿಕ ಅಂತರ ಪಾಲಿಸುವ ಕೋವಿಡ್ ಪ್ರೊಟೊಕಾಲ್ಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕೋರಿದೆ. (ಏಜೆನ್ಸೀಸ್)