ಸಿನಿಮಾ

ಪ್ರವೇಶ ಪರೀಕ್ಷೆ ಸುಸೂತ್ರವಾಗಿ ನಡೆಸಿ

ವಿಜಯಪುರ: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಮೇ 20 ರಿಂದ ಮೇ 22 ರವರೆಗೆ ಜಿಲ್ಲೆಯ 24 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ ಅತ್ಯಂತ ಸುವ್ಯವಸ್ಥಿತ ಹಾಗೂ ಸುಸೂತ್ರವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಪರೀಕ್ಷೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ವೃತ್ತಿಪರ ಕೋರ್ಸ್ ಪ್ರವೇಶಾತಿಗಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಪೂರ್ವಭಾವಿ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮೇ 20ರ ಜೀವಶಾಸ್ತ್ರ, ಗಣಿತ, ಮೇ 21 ರಂದು ಭೌತಶಾಸ್ತ್ರ ಹಾಗೂ ರಸಾಯನ ಶಾಸ್ತ್ರ ಮತ್ತು ಮೇ 22 ರಂದು ಕನ್ನಡ ವಿಷಯ ಕುರಿತು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗಳು ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಪರೀಕ್ಷೆ ಸಂದರ್ಭದಲ್ಲಿ ಪರೀಕ್ಷೆಗೆ ನಿಯೋಜಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ನೋಂದಣಿಯಾದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಇತರರಿಗೆ ಪರೀಕ್ಷಾ ಕೊಠಡಿಗಳಿಗೆ ಪ್ರವೇಶ ಇರುವುದಿಲ್ಲ. ಪರೀಕ್ಷೆಯ ಪಾವಿತ್ರ್ಯತೆ ಕಾಪಾಡಿಕೊಳ್ಳಬೇಕು. ಪರೀಕ್ಷೆ ಸಂದರ್ಭದಲ್ಲಿ ಯಾವುದೇ ಲೋಪ ಆಗಬಾರದು. ನಿಯಮದಂತೆ ಮಾರ್ಗಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತೆ ವಹಿಸಬೇಕು. ಅದರಂತೆ, ಪರೀಕ್ಷಾ ಕೇಂದ್ರದ ಉಪ ಮುಖ್ಯ ಅಧೀಕ್ಷಕರು, ಕಸ್ಟೋಡಿಯನ್‌ಗಳು, ವೀಕ್ಷಕರು, ಜಾಗೃತ ದಳದ ಸದಸ್ಯರು ಅವಶ್ಯಕ ಪೂರ್ವ ಸಿದ್ಧತೆ ಕೈಗೊಳ್ಳುವಂತೆ ಸೂಚನೆ ನೀಡಿದ ಅವರು, ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ,ಯಾವುದೇ ರೀತಿಯ ಲೋಪವಾಗದಂತೆ ಪರೀಕ್ಷೆ ನಡೆಸುವಂತೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಖಜಾನೆ ಇಲಾಖೆ ಉಪನಿರ್ದೇಶಕ ರಾಜಗೋಪಾಲ, ಡಿಡಿಪಿಯು ಡಾ.ಸಿ.ಕೆ.ಹೊಸಮನಿ, ಪ್ರಶ್ನೆ ಪತ್ರಿಕೆ ವಿತರಣಾ ತಂಡದ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಹಾಗೂ ಎಲ್ಲಾ ಪರೀಕ್ಷಾ ಕೇಂದ್ರದ ಉಪ ಅಧೀಕ್ಷಕರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

24 ಕೇಂದ್ರಗಳಲ್ಲಿ ಪರೀಕ್ಷೆ

ಜಿಲ್ಲೆಯ 24 ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, 10,510 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ವಿಜಯಪುರ ನಗರದಲ್ಲಿ 19, ಬಬಲೇಶ್ವರ-1, ತಿಕೋಟಾ-2,ಬಸವನ ಬಾಗೇವಾಡಿಯಲ್ಲಿ-2 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪರೀಕ್ಷಾ ವೇಳಾಪಟ್ಟಿ

ಮೇ 20 ರಂದು ಬೆಳಗ್ಗೆ 10-30 ರಿಂದ 11-50 ರವರೆಗೆ ಜೀವಶಾಸ್ತ್ರ ಮಧ್ಯಾಹ್ನ 2-30 ರಿಂದ 3-50 ರ ವರೆಗೆ ಗಣಿತ ವಿಷಯದ ಪರೀಕ್ಷೆ ನಡೆಯಲಿದೆ. ಮೇ 22 ರಂದು ಬೆಳಗ್ಗೆ 10-30 ರಿಂದ 11-50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2-30 ರಿಂದ 3-50ರ ವರೆಗೆ ರಸಾಯನಶಾಸ್ತ್ರ ಹಾಗೂ ಮೇ 22 ರಂದು ಬೆಳಗ್ಗೆ 11-30 ರಿಂದ 12-30 ರವರೆಗೆ ಕನ್ನಡ ವಿಷಯದ ಪರೀಕ್ಷೆ ನಡೆಯಲಿವೆ.


Latest Posts

ಲೈಫ್‌ಸ್ಟೈಲ್