ಮೈತ್ರಿ ಸರ್ಕಾರದ ಪತನ ಭೀತಿ: ರಾಜ್ಯಕ್ಕೆ ವೇಣುಗೋಪಾಲ್​ ದೌಡು

ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗುವ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ. ವೇಣುಗೋಪಾಲ್​ ಅವರು ಶನಿವಾರ ಸಂಜೆ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.

ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಅವರ ಸೂಚನೆ ಮೇರೆಗೆ ವೇಣುಗೋಪಾಲ್ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ಮೊದಲು ರಾಜ್ಯದ ರಾಜಕೀಯ ವಿದ್ಯಮಾನಗಳ ಕುರಿತು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್​ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ.

ನಂತರ ಶನಿವಾರ ತಡರಾತ್ರಿ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಮತ್ತು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್​ ಅವರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಯೂರೋಪ್​ ಪ್ರವಾಸ ಮುಗಿಸಿ ಇಂದು ವಾಪಸಾಗಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವೇಣುಗೋಪಾಲ್​ ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯ ಕಾಂಗ್ರೆಸ್​ನಲ್ಲಿ ಭುಗಿಲೆದ್ದಿರುವ ಭಿನ್ನಮತ ಶಮನಗೊಳಿಸುವ ಕುರಿತು ಮತ್ತು ಸಂಪುಟ ವಿಸ್ತರಣೆ ಬಗ್ಗೆ ವೇಣುಗೋಪಾಲ್​ ಕೈ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.