

ವಿಜಯವಾಣಿ ಸುದ್ದಿಜಾಲ ಉಡುಪಿ
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಇಲಾಖೆಯ ಸಂಪೂರ್ಣ ವೈಫಲ್ಯದಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗದೆ ಹತಾಶಗೊಂಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಕರಾವಳಿ ಭಾಗದ ಹಿಂದು ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ದಮನಿಸಲು ಯತ್ನಿಸುತ್ತಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಂದು ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಅರುಣ ಪುತ್ತಿಲ ಅವರನ್ನು ಗಡಿಪಾರು ಮಾಡಲು ನೋಟಿಸ್ ಜಾರಿ ಮಾಡಿದ್ದಾರೆ. ಹಿಂದು ಕಾರ್ಯಕರ್ತರ ಮನೆಗೆ ರಾತೋರಾತ್ರಿ ಪೊಲೀಸರು ತೆರಳಿ, ಜಿಪಿಎಸ್ ಫೋಟೋ ತೆಗೆದು, ಅವರನ್ನು ರೌಡಿಗಳಂತೆ ಬಿಂಬಿಸಿ ಮಾನಸಿಕ ಸ್ಥೈರ್ಯ ಕುಗ್ಗಿಸಲು ಪೊಲೀಸ್ ಇಲಾಖೆ ಮುಂದಾಗಿದೆ. ಇದು ಖಂಡನೀಯ.
ಮತಾಂಧ ಶಕ್ತಿಗಳ ಓಲೈಕೆಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರ, ಜಿಲ್ಲೆಯ ಪೊಲೀಸ್ ವ್ಯವಸ್ಥೆಯನ್ನೂ ತನ್ನ ಕೈಗೊಂಬೆಯನ್ನಾಗಿಸಿಕೊಂಡಿದೆ. ಜಿಲ್ಲೆಯಲ್ಲಿ ಅವ್ಯಾಹತವಾಗಿರುವ ಡ್ರಗ್ಸ್ ದಂಧೆ, ಲವ್ ಜಿಹಾದ್, ಅಕ್ರಮವಾಗಿ ಗೋ ಸಾಗಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ವಿಫಲವಾಗಿದೆ. ಕಾಂಗ್ರೆಸ್ ಹಾಗೂ ಎಸ್ಡಿಪಿಐ ಮುಖಂಡರ ಅಣತಿಯಂತೆ ಸುಳ್ಳು ಕೇಸ್ ದಾಖಲಿಸಿ ಹಿಂದು ಕಾರ್ಯಕರ್ತರನ್ನು ಜೈಲುಪಾಲು ಮಾಡಲು ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಕರಾವಳಿ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಮುಂದಾಗಬೇಕು. ಅದನ್ನು ಬಿಟ್ಟು ಹಿಂದು ವಿರೋಧಿ ನಿಲುವು ಹಾಗೂ ಹಿಂದು ಕಾರ್ಯಕರ್ತರನ್ನು ದಮನಿಸುವ ಪ್ರಯತ್ನ ಮುಂದುವರಿಸಿದರೆ ಬೀದಿಗಿಳಿದು ಹೋರಾಟ ಮಾಡುವ ಸನ್ನಿವೇಶ ನಿಮಾರ್ಣವಾಗಲಿದೆ ಎಂದು ಜೂನ್ 2ರಂದು ಪ್ರಕಟಣೆಯಲ್ಲಿ ಯಶ್ಪಾಲ್ ಎಚ್ಚರಿಕೆ ನೀಡಿದ್ದಾರೆ.