More

    ಕಾಂಗ್ರೆಸ್‌ಗೂ ತಟ್ಟಿದ ಗೋಬ್ಯಾಕ್ ಬಿಸಿ!

    ನಿತ್ಯಾನಂದ ಶಿವಗಂಗೆ ಚಿಕ್ಕಮಗಳೂರು
    ಬಿಜೆಪಿಯಿಂದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಬಾರದು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರೇ ಗೋ ಬ್ಯಾಕ್ ಶೋಭಾ ಅಭಿಯಾನ ನಡೆಸಿದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿಯೂ ಗೋ ಬ್ಯಾಕ್ ಅಭಿಯಾನ ಆರಂಭಗೊಂಡಿದೆ. ಯಾವ ಕಾರಣಕ್ಕೂ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬಾರದೆಂಬ ಅಭಿಯಾನ ಸದ್ದಿಲ್ಲದೆ ಆರಂಭಗೊಂಡಿದೆ.

    ಸೋಷಿಯಲ್ ಮೀಡಿಯಾದಲ್ಲಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ಪೋಸ್ಟರ್‌ಗಳನ್ನು ಹಾಕುತ್ತಿರುವ ಕೆಲ ಕಾರ್ಯಕರ್ತರು ಕಷ್ಟ ಕಾಲದಲ್ಲಿ ಕೈಕೊಟ್ಟವರು ಈಗ ನಮಗೆ ಬೇಡ ಎಂದು ಒತ್ತಾಯಿಸಲಾರಂಭಿಸಿದ್ದಾರೆ. ಜಯಪ್ರಕಾಶ್ ಹೆಗ್ಡೆ ಅವರು ಕಾಂಗ್ರೆಸ್ ಟಿಕೆಟ್‌ನ ಪ್ರಬಲ ಆಕಾಂಕ್ಷಿಯಾಗಿದ್ದು, ಅವರು ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುವ ಮುನ್ನವೇ ಗೋ ಬ್ಯಾಕ್ ಬಿಸಿ ತಟ್ಟಿದೆ.
    2017ರ ಮಾರ್ಚ್ ತಿಂಗಳಿನಲ್ಲಿ ಜಯಪ್ರಕಾಶ್ ಹೆಗ್ಡೆ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದರು. ಆದರೆ ಅವರ ನಿರೀಕ್ಷೆಯಂತೆ ಬಿಜೆಪಿಯಲ್ಲಿಯೂ ಅವರಿಗೆ ಎಂಪಿ ಟಿಕೆಟ್ ಸಿಕ್ಕಿರಲಿಲ್ಲ. ಇದೀಗ ಬಿಜೆಪಿಯಿಂದಲೂ ಮಾನಸಿಕವಾಗಿ ದೂರವಾಗಿರುವ ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆಗೆ ಉತ್ಸುಕರಾಗಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಇದೆ. ಜತೆಗೆ ಕಾಂಗ್ರೆಸ್ ನಾಯಕರೊಂದಿಗೆ ಉತ್ತಮ ಸಂಬಂಧ ಹೊಂದಿರುವ ಹಾಗೂ ಕ್ಷೇತ್ರದಲ್ಲಿ ಜನರ ವಿಶ್ವಾಸವನ್ನೂ ಗಳಿಸಿರುವ ಜಯಪ್ರಕಾಶ್ ಹೆಗ್ಡೆ ಅವರಿಗೆ ಈ ಬಾರಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಎನ್ನಲಾಗಿತ್ತು. ಆದರೆ ಇದೀಗ ಗೋ ಬ್ಯಾಕ್ ಅಭಿಯಾನ ಆರಂಭಗೊಂಡಿರುವುದು ಎಲ್ಲ ರಾಜಕೀಯ ಲೆಕ್ಕಾಚಾರಗಳನ್ನು ತಲೆಕೆಳಗೆ ಮಾಡಿದೆ.
    ಕೈ ಪಾಳಯದಲ್ಲಿ ಭಾರಿ ಫೈಪೋಟಿ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಳೆದ ಚುನಾವಣೆಗೆ ಹೋಲಿಸಿದರೆ ಕಾಂಗ್ರೆಸ್ ಸ್ವಲ್ಪ ಬಲಿಷ್ಠವಾಗಿದೆ. ಅದರಲ್ಲೂ ಚಿಕ್ಕಮಗಳೂರಿನ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಕೈ ಶಾಸಕರೇ ಇದ್ದಾರೆ. ಜತೆಗೆ ಕಾರ್ಯಕರ್ತರ ಪಡೆಯೂ ಕಳೆದ ಚುನಾವಣೆಗೆ ಹೋಲಿಸಿದಲ್ಲಿ ಈ ಬಾರಿ ದೊಡ್ಡ ಪ್ರಮಾಣದಲ್ಲಿದೆ. ಹೀಗಾಗಿ ಎಂಪಿ ಚುನಾವಣೆಗೆ ಸ್ಪರ್ಧಿಸಲು ಆಕಾಂಕ್ಷಿಗಳ ಪಟ್ಟಿಯೂ ದೊಡ್ಡದಿದೆ.
    ಪ್ರಮುಖವಾಗಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಕೆ.ಪಿ.ಅಂಶುಮಂತ್, ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಆರತಿ ಕೃಷ್ಣ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಎಂ.ಸಂದೀಪ್, ಕಾಂಗ್ರೆಸ್ ಮುಖಂಡ ಸುಧೀರ್‌ಕುಮಾರ್ ಮುರೊಳ್ಳಿ ಆಕಾಂಕ್ಷಿಗಳಾಗಿದ್ದಾರೆ.
    ಅದರಲ್ಲಿ ಆರತಿ ಕೃಷ್ಣ, ಬಿ.ಎಂ.ಸಂದೀಪ್, ಜಯಪ್ರಕಾಶ್ ಹೆಗ್ಡೆ ಎಐಸಿಸಿ ಹಾಗೂ ಕೆಪಿಸಿಸಿ ಎರಡೂ ಮಟ್ಟದಲ್ಲೂ ಟಿಕೆಟ್‌ಗಾಗಿ ಪ್ರಯತ್ನಿಸುತ್ತಿದ್ದಾರೆ. ಇನ್ನು ಡಾ. ಅಂಶುಮಂತ್ ಹಾಗೂ ಸುಧೀರ್‌ಕುಮಾರ್ ಮುರೊಳ್ಳಿ ಕೆಪಿಸಿಸಿ ಮಟ್ಟದಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ. ಒಟ್ಟಾರೆಯಾಗಿ ಈ ಹಿಂದಿನ ಚುನಾವಣೆಗಳಿಗಿಂತ ಈ ಚುನಾವಣೆಯಲ್ಲಿ ಹೆಚ್ಚಿನ ಆಕಾಂಕ್ಷಿಗಳಿರುವುದು ವಿಶೇಷ.
    ಬೆಂಗಳೂರಿಗೆ ನಿಯೋಗ: ಉಡುಪಿ-ಚಿಕ್ಕಮಗಳೂರು ಹಾಗೂ ಶಿವಮೊಗ್ಗದ ಕಾಂಗ್ರೆಸ್ ನಾಯಕರೊಂದಿಗೆ ಬೆಂಗಳೂರಿಗೆ ನಿಯೋಗ ತೆರಳಿದ್ದ ಸುಧೀರ್ ಕುಮಾರ್ ಮುರೊಳ್ಳಿ ತಮಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ ಕ್ಷೇತ್ರದಲ್ಲಿ ಗೆದ್ದು ತೋರಿಸುತ್ತೇನೆ. ಈ ಮೂಲಕ ಕೈ ಜಾರಿರುವ ಕ್ಷೇತ್ರವನ್ನು ಮರಳಿ ಕೈವಶ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ ಎನ್ನಲಾಗಿದೆ. ಸಿಎಂ, ಡಿಸಿಎಂ ಸೇರಿದಂತೆ ಪ್ರಮುಖ ಸಚಿವರು ಹಾಗೂ ಪಕ್ಷದ ಮುಖಂಡರನ್ನು ಭೇಟಿ ಮಾಡಿ ಟಿಕೆಟ್‌ಗಾಗಿ ಒತ್ತಾಯ ಮಾಡಿದ್ದಾರೆ. ಶಾಸಕ ಟಿ.ಡಿ.ರಾಜೇಗೌಡ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಕಾರ್ಕಳದ ಉದಯ್‌ಕುಮಾರ್ ಶೆಟ್ಟಿ, ಕುಂದಾಪುರದ ದಿನೇಶ್ ಹೆಗ್ಡೆ, ಉಡುಪಿಯ ರಮೇಶ್ ಕಾಂಚನ್, ಉಡುಪಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸೌರವ್ ಬಲ್ಲಾಳ್, ಮುಖಂಡ ದೀಪಕ್ ಕೋಟ್ಯಾನ್ ಸೇರಿದಂತೆ 50ಕ್ಕೂ ಹೆಚ್ಚು ಮುಖಂಡರೊಂದಿಗೆ ಬೆಂಗಳೂರಿಗೆ ತೆರಳಿ ಕಾಂಗ್ರೆಸ್ ನಾಯಕರಿಗೆ ಟಿಕೆಟ್‌ಗಾಗಿ ಒತ್ತಡ ಹಾಕಿದ್ದಾರೆ.
    ಜಿಲ್ಲಾಧ್ಯಕ್ಷರಿಂದಲೂ ಪಟ್ಟು: ಪ್ರಸ್ತುತ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಅಂಶುಮಂತ್ ಅವರೂ ತಮಗೇ ಈ ಬಾರಿ ಲೋಕಸಭಾ ಟಿಕೆಟ್ ನೀಡುವಂತೆ ಪಕ್ಷದ ಮುಖಂಡರ ಮೇಲೆ ಒತ್ತಡ ಹೇರಲಾರಂಭಿಸಿದ್ದಾರೆ. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ತಳಮಟ್ಟದಿಂದಲೂ ಪಕ್ಷ ಕಟ್ಟಿದ್ದೇನೆ ಎಂದು ಪ್ರತಿಪಾದಿಸಿದ್ದಾರೆ. ಆದರೆ ಅಂಶುಮಂತ್ ಅವರಿಗೆ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಈ ಮೂಲಕ ಅಂಶುಮಂತ್ ಅವರನ್ನು ಸುಮ್ಮನಿರಿಸುವ ಕೆಲಸವನ್ನು ಕಾಂಗ್ರೆಸ್ ನಾಯಕರು ಮಾಡಿದ್ದಾರೆ ಎನ್ನಲಾಗುತ್ತಿದೆ. ಆದರೂ ಪಟ್ಟುಬಿಡದ ಅಂಶುಮಂತ್ ತಮಗೇ ಟಿಕೆಟ್ ನೀಡುವಂತೆ ಒತ್ತಾಯಿಸುತ್ತಿದ್ದಾರೆ.

    ಚುನಾವಣೆಗೆ ಸ್ಪರ್ಧಿಸಲು ತಮಗೇ ಟಿಕೆಟ್ ನೀಡಿ ಎಂದು ಕೇಳಲು ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರಿಗೂ ಅವಕಾಶವಿದೆ. ನಾನೂ ಸಹ ಸಿಎಂ ಬಳಿ ಕೆಲ ನಾಯಕರೊಂದಿಗೆ ತೆರಳಿ ಟಿಕೆಟ್ ಕೇಳಿದ್ದೇನೆ. ಅದರಂತೆ ಸುಧೀರ್‌ಕುಮಾರ್ ಕೂಡ ಟಿಕೆಟ್ ಕೇಳಿರಬಹುದು. ಜಯಪ್ರಕಾಶ್ ಹೆಗ್ಡೆ ವಿರುದ್ಧ ಗೋ ಬ್ಯಾಕ್ ಅಭಿಯಾನ ಆರಂಭಿಸಿರುವುದು ಸರಿಯಲ್ಲ. ನಮಗೆ ಚುನಾವಣೆಯಲ್ಲಿ ಗೆಲುವು ಮುಖ್ಯವಾಗಬೇಕು.
    ಡಾ. ಅಂಶುಮಂತ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts