‘ಆಪರೇಷನ್ ಕಮಲ’ದ ವಿರುದ್ಧ ಮೈತ್ರಿ ಪಕ್ಷಗಳ ಪ್ರತಿಭಟನೆ

ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಅಭದ್ರಗೊಳಿಸಲು ಬಿಜೆಪಿ ನಾಯಕರು ಕುದುರೆ ವ್ಯಾಪಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ನಗರದ ಚನ್ನಮ್ಮ ವೃತ್ತದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.

ಜನರಿಂದ ನೇರವಾಗಿ ಆಯ್ಕೆಯಾಗಿರುವ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು 6 ತಿಂಗಳಿಂದ ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ ನಾಯಕರು ಸ್ವಾರ್ಥ ಸಾಧನೆಗಾಗಿ ಆಪರೇಷನ್ ಕಮಲದ ಹೆಸರಿನಲ್ಲಿ ಆಡಳಿತರೂಢ ಶಾಸಕರಿಗೆ ಸಚಿವ ಸ್ಥಾನ, ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ಹಾಗೂ ಹಣದ ಆಮಿಷ ನೀಡುತ್ತಿದ್ದಾರೆ ಎಂದು ಕಾರ್ಯಕರ್ತರು ದೂರಿದರು.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ 6 ತಿಂಗಳ ಅವಧಿಯಲ್ಲಿ ರೈತರ ಬೆಳೆ ಸಾಲ ಮನ್ನಾ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಂಡಿದೆ. ಜತೆಗೆ ಹೊಸ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ಇದರಿಂದ ಬಿಜೆಪಿ ರಾಜ್ಯ ನಾಯಕರು ಹತಾಶರಾಗಿ ಮೈತ್ರಿ ಸರ್ಕಾರ ಅಸ್ಥಿರಗೊಳಿಸಲು ವಾಮ ಮಾರ್ಗ ಅನುಸರಿಸುತ್ತಿದ್ದಾರೆ. ಬಿಜೆಪಿ ಸಂವಿಧಾನದ ವಿರೋಧಿಯಾಗಿ ಕೆಲಸ ಮಾಡುತ್ತ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಜೆಡಿಎಸ್, ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ನಾಯರು ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದಲೇ ತನ್ನ 104 ಶಾಸಕರನ್ನು ಹರಿಯಾಣ ರಾಜ್ಯದ ಖಾಸಗಿ ಹೋಟೆಲ್‌ನಲ್ಲಿ ಕೂಡಿ ಹಾಕಿದೆ. ಮತ್ತೊಂದೆಡೆ ಮೈತ್ರಿ ಸರ್ಕಾರದ ಕೆಲ ಶಾಸಕರನ್ನು ಬೆದರಿಸಿ ಮುಂಬೈ ಹೋಟೆಲ್‌ನಲ್ಲಿ ಹಿಡಿದಿಟ್ಟುಕೊಂಡಿದೆ. ಕೀಳುಮಟ್ಟದ ರಾಜಕಾರಣ ಮಾಡುತ್ತಿರುವ ಬಿಜೆಪಿ ನಾಯಕರು ನೈತಿಕತೆ ಕಳೆದುಕೊಂಡಿದ್ದಾರೆ. ಮುಂಬರುವ ದಿನಗಳಲ್ಲಿ ಬಿಜೆಪಿಯ ಎಲ್ಲ ಶಾಸಕರ ಮನೆಯ ಮುಂದೆ ಧರಣಿ ಸತ್ಯಾಗ್ರಹ ನಡೆಸಬೇಕಾಗುತ್ತದೆ ಎಂದು ಕಾರ್ಯಕರ್ತರು ಎಚ್ಚರಿಕೆ ನೀಡಿದರು.

ಜೆಡಿಎಎಸ್ ಮುಖಂಡ ಭೀಮಪ್ಪ ಗಡಾದ, ಎಸ್‌ಸಿಎಸ್‌ಟಿ ಘಟಕದ ಉಪಾಧ್ಯಕ್ಷ ಶಿವಪ್ಪ ಶಮರಂತ, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಅಧಿಕಾರಕ್ಕಾಗಿ ಬಿಜೆಪಿ ನಾಯಕರು ಕಾನೂನು ಬಾಹಿರ ಚಟುವಟಿಕೆ ನಡೆಸುತ್ತ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಮೈತ್ರಿ ಸರ್ಕಾರದ ಅಭಿವೃದ್ಧಿ ಕೆಲಸಗಳನ್ನು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹಾಗಾಗಿಯೇ ಸರ್ಕಾರ ಅಸ್ಥಿರಗೊಳಿಸಲು ವಾಮಮಾರ್ಗ ತುಳಿದಿದ್ದಾರೆ. ಈಗಾಗಲೇ ಉಪ ಚುನಾವಣೆಗಳಲ್ಲಿ ಬಿಜೆಪಿಗೆ ಜನರು ತಕ್ಕ ಪಾಠ ಕಲಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಪಾಠ ಕಲಿಸಲಿದ್ದಾರೆ.

  |ವಿನಯ ನಾವಲಗಟ್ಟಿ, ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಅಭಿವೃದ್ಧಿಪರ ಆಡಳಿತ ಸಹಿಸಿಕೊಳ್ಳದೆ ಬಿಜೆಪಿ ನಾಯಕರು ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ ನಾಯಕರು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ.

  |ಶಂಕರ ಮಾಡಲಗಿ, ಜೆಡಿಎಸ್ ಜಿಲ್ಲಾಧ್ಯಕ್ಷ