ನವದೆಹಲಿ: ಕಾಂಗ್ರೆಸ್, ನೆರೆಯ ರಾಷ್ಟ್ರ ಪಾಕಿಸ್ತಾನವು ಒಂದೇ ಅಜೆಂಡಾವನ್ನು ಹೊಂದಿದ್ದು, ಉದ್ಧೇಶ ಮತ್ತು ಕಾರ್ಯಸೂಚಿ ಸ್ಪಷ್ಟವಾಗಿ ಗೋಚರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ವಾಗ್ದಾಳಿ ನಡೆಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿ ಮರುಸ್ಥಾಪನೆಗೆ ಸಂಬಂಧಿಸಿದಂತೆ ಕಾಂಗ್ರೆಸ್-ಎನ್‌ಸಿ ಮೈತ್ರಿ ಕುರಿತು ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅಮಿತ್ ಷಾ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಮೋದಿ ಸರ್ಕಾರ ಇರುವವರೆಗೂ ಇದು ಸಾಧ್ಯವಿಲ್ಲ ಎಂದು ವಾಗ್ದಾನ ಮಾಡಿದ್ದಾರೆ.
ಇದನ್ನೂ ಓದಿ: ಆತ ನನಗಾಗಿ ಒಂದು ತಿಂಗಳು… ಕ್ಯಾಪ್ಟನ್ ಕೂಲ್ ಕುರಿತು ಕೇಳದ ಕಥೆಯನ್ನು ಬಹಿರಂಗಪಡಿಸಿದ ಮಾಜಿ ಆಟಗಾರ
ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವಿದೆ ಎಂಬುದನ್ನು ಕಾಂಗ್ರೆಸ್ ಮತ್ತು ಪಾಕಿಸ್ತಾನ ಮರೆತಿದೆ. ಕೇಂದ್ರದಲ್ಲಿ ಮೋದಿ ಸರ್ಕಾರ ಇರುವವರೆಗೂ ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ಎಂದಿಗೂ ಮರುಸ್ಥಾಪಿಸುವುದಿಲ್ಲ. ವೈಮಾನಿಕ ದಾಳಿ ಮತ್ತು ಸರ್ಜಿಕಲ್ ಸ್ಟ್ರೈಕ್‌ಗಳ ಪುರಾವೆ ಕೇಳುವುದು ಅಥವಾ ಭಾರತೀಯ ಸೇನೆಯ ಬಗ್ಗೆ ಆಕ್ಷೇಪಾರ್ಹ ಮಾತುಗಳನ್ನು ಆಡುವುದು, ರಾಹುಲ್ ಗಾಂಧಿಯವರ ಕಾಂಗ್ರೆಸ್ ಪಕ್ಷ ಮತ್ತು ಪಾಕಿಸ್ತಾನದ ರಾಗ ಯಾವಾಗಲೂ ಒಂದೇ ಆಗಿರುತ್ತದೆ. ಕಾಂಗ್ರೆಸ್ ಯಾವಾಗಲೂ ದೇಶ ವಿರೋಧಿ ಶಕ್ತಿಗಳೊಂದಿಗೆ ಕೈಜೋಡಿಸುತ್ತದೆ. ಆದರೆ, ಕಾಶ್ಮೀರದಲ್ಲಿ 370ನೇ ವಿಧಿಯಾಗಲೀ ಅಥವಾ ಭಯೋತ್ಪಾದನೆಯಾಗಲೀ ಮರಳಲು ಅವಕಾಶ ನೀಡುವುದಿಲ್ಲ ಎಂದು ಅಮಿತ್ ಷಾ ವಾಗ್ದಾಳಿ ನಡೆಸಿದ್ದಾರೆ.
ಹಾಲಿ ನಡೆಯುತ್ತಿರುವ ಜಮ್ಮು-ಕಾಶ್ಮೀರ ಚುನಾವಣೆ ಕುರಿತು ಮಾತನಾಡಿದ್ದ ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಕಾಂಗ್ರೆಸ್-ಎನ್‌ಸಿ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ 370 ನೇ ವಿಧಿ ಮರಳಬಹುದು ಎಂದು ಹೇಳಿಕೆ ನೀಡಿದ್ದರು. ಖ್ವಾಜಾ ಆಸಿಫ್ ಹೇಳಿಕೆ ಎನ್ಡಿಎ ನಾಯಕರ ಕೆಂಗಣ್ಣಿಗೆ ಗುರಿಯಾಗಿತ್ತು. ಇದರ ಬೆನ್ನಲ್ಲೇ ಅವರು ಕಾಂಗ್ರೆಸ್ ವಿರುದ್ಧ ಸರಣಿ ವಾಗ್ದಾಳಿಗಳನ್ನು ನಡೆಸುತ್ತಿದ್ದಾರೆ.