ಇಂದಿನಿಂದ ಮೂರು ದಿನ ಕೈ ನಾಯಕರ ಸರಣಿ ಸಭೆ

ಬೆಂಗಳೂರು: ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ. ವೇಣುಗೋಪಾಲ್​ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಅವರು ಇಂದಿನಿಂದ ಮೂರು ದಿನಗಳ ಕಾಲ ರಾಜ್ಯ ನಾಯಕರ ಸಭೆ ಕರೆದಿದ್ದು, 2019ರ ಲೋಕಸಭೆ ಚುನಾವಣೆಯ ಸಿದ್ಧತೆಯ ಕುರಿತು ಚರ್ಚೆ ನಡೆಸಲಿದ್ದಾರೆ.

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್​ ಪಕ್ಷದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ. ಈ ಹಿನ್ನೆಲೆಯಲ್ಲಿ ಉಭಯ ನಾಯಕರು ಚುನಾವಣಾ ತಯಾರಿ ಸಭೆ ಕರೆದಿದ್ದು ಚುನಾವಣಾ ತಂತ್ರಗಾರಿಕೆ ಸಂಬಂಧ ಚರ್ಚೆ ನಡೆಸಲಿದ್ದಾರೆ.

ಹಳೆ ಮೈಸೂರು ಭಾಗಕ್ಕೆ ಮೊದಲ ದಿನ ಮೀಸಲು

ಮೊದಲ ದಿನದ ಸಭೆಯಲ್ಲಿ ಹಳೆ ಮೈಸೂರು ಭಾಗ ಮತ್ತು ಕರಾವಳಿ ಜಿಲ್ಲೆಗಳಾದ ಉಡುಪಿ, ಹಾಸನ​, ದಕ್ಷಿಣ ಕನ್ನಡ, ಶಿವಮೊಗ್ಗ, ಮೈಸೂರು, ಮಂಡ್ಯ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಗಳ ಸಂಸದರು, ಮಾಜಿ ಸಂಸದರು, ಶಾಸರಕು, ವಿಧಾನ ಪರಿಷತ್​ ಸದಸ್ಯರು, ಜಿಲ್ಲಾಧ್ಯಕ್ಷರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಸಭೆಯಲ್ಲಿ ಹಳೆ ಮೈಸೂರು ಭಾಗದಲ್ಲಿ ಮೈತ್ರಿ ಬೇಡ ಅನ್ನೋ ವಾದವನ್ನ ಕೆಲ ಮುಖಂಡರು ಪ್ರಸ್ತಾಪಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಆದರೆ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್​ ಜತೆ ಹೊಂದಾಣಿಕೆ ಮಾಡಿಕೊಳ್ಳುವ ನಿರ್ಧಾರಕ್ಕೆ ಪಕ್ಷ ಬಂದಿರುವುದರಿಂದ ಹಳೆ ಮೈಸೂರು ಭಾಗದ ನಾಯಕ ಮನವೊಲಿಸಲು ನಾಯಕರು ಕಸರತ್ತು ನಡೆಸಲಿದ್ದಾರೆ. ಜತೆಗೆ ಇದೇ ತಿಂಗಳು ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಕುರಿತೂ ಸಹ ನಾಯಕರು ಚರ್ಚೆ ನಡೆಸಲಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್​ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಲು ತೆರಳುತ್ತಿದ್ಧಾರೆ. ಹಾಗಾಗಿ ನಾಳೆ ಮತ್ತು ನಾಡಿದ್ದು ನಡೆಯಲಿರುವ ಉತ್ತರ ಕರ್ನಾಟಕ ಮತ್ತು ಮಧ್ಯ ಕರ್ನಾಟಕ ಲೋಕಸಭಾ ಕ್ಷೇತ್ರಗಳ ಮುಖಂಡರ ಜತೆಗಿನ ಸಭೆ ಮುಂದೂಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *