More

    ಅಗತ್ಯ ವಸ್ತುಗಳ ಬೆಲೆ ಏರಿಕೆ ಕ್ರಮಕ್ಕೆ ಖಂಡನೆ: ತಾಲೂಕು ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ

    ಮದ್ದೂರು: ಕೇಂದ್ರ ಸರ್ಕಾರದ ಅಗತ್ಯ ವಸ್ತುಗಳ ಬೆಲೆ ಏರಿಕೆ ಕ್ರಮ ಖಂಡಿಸಿ ಕೆಪಿಸಿಸಿ ಸದಸ್ಯ ಎಸ್.ಗುರುಚರಣ್ ನೇತೃತ್ವದಲ್ಲಿ ಪಟ್ಟಣದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
    ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಕೆಪಿಸಿಸಿ ಸದಸ್ಯ ಎಸ್.ಗುರುಚರಣ್ ಮಾತನಾಡಿ, ಕೇಂದ್ರ ಸರ್ಕಾರವು ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಾ ಜನ ಸಾಮಾನ್ಯರನ್ನು ಕಂಗಾಲಾಗಿಸಿದೆ. ಈಗ ಮತ್ತೆ ಜನರಿಗೆ ಅತ್ಯವಶ್ಯಕ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಮತ್ತೊಮ್ಮೆ ಏರಿಸುವುದರ ಮೂಲಕ ಬಡವರು ಹಾಗೂ ಜನಸಾಮಾನ್ಯರ ಬದುಕಿಗೆ ಬರೆ ಎಳೆದಿದೆ ಎಂದರು.
    ರಾಜ್ಯ ಸರ್ಕಾರವು ಬರೀ ಭ್ರಷ್ಟಾಚಾರದಲ್ಲಿ ತೊಡಗಿದೆ. ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯು ಅವೈಜ್ಞಾನಿಕವಾಗಿದ್ದರೂ, ಚುನಾವಣೆ ಹಿನ್ನೆಲೆಯಲ್ಲಿ ಹೆದ್ದಾರಿಯ ಉದ್ಘಾಟನೆಗೆ ಪ್ರಧಾನಿ ಮೋದಿ ಅವರನ್ನು ರಾಜ್ಯದ ಬಿಜೆಪಿ ನಾಯಕರು ಕರೆಸುತ್ತಿದ್ದಾರೆ. ಈ ಎಲ್ಲ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವೈಫಲ್ಯದ ವಿರುದ್ಧ ಮೋದಿ ಸಭೆ ನಡೆಸುವ ದಿನ ಕಪ್ಪು ಬಾವುಟ ಪ್ರದರ್ಶನ ಮಾಡಲಾಗುವುದು ಎಂದರು.
    ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಡುಗೆ ಎಣ್ಣೆ, ದಿನಸಿ ಸೇರಿದಂತೆ ಎಲ್ಲ ಪದಾರ್ಥಗಳು ಗಗನಕ್ಕೇರಿವೆ. ಬಡ ಹಾಗೂ ಮಾಧ್ಯಮ ವರ್ಗದ ಜನರು ಇದರಿಂದ ರೋಸಿ ಹೋಗಿದ್ದಾರೆ. ಕೇಂದ್ರ ಸರ್ಕಾರವು ಕೇವಲ ಅಂಬಾನಿ, ಅದಾನಿ ಸೇರಿದಂತೆ ಭ್ರಷ್ಟರನ್ನು ಮಾತ್ರ ಬೆಳೆಸುತ್ತಾ ಇದ್ದಾರೆ. ಮುಂದಿನ ಚುನಾವಣೆಯಲ್ಲಿ ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಗೌಡ, ಚಿಂತಕ ಸಂತೋಷ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ಮುಖಂಡರಾದ ಕದಲೂರು ರಾಮಕೃಷ್ಣ, ದೇಶಹಳ್ಳಿ ಮೋಹನ್‌ಕುಮಾರ್, ಎಂ.ಪಿ.ಅಮರ್‌ಬಾಬು, ಅಜ್ಜಹಳ್ಳಿ ರಾಮಕೃಷ್ಣ, ರಾಘವ, ಸುರೇಶ್ ಕಂಠಿ, ನಾಗಭೂಷಣ್, ಕಬ್ಬಾಳಯ್ಯ, ಮನು, ರಾಘು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts