

ಮಡಿಕೇರಿ: ಸೌಜನ್ಯ ಹತ್ಯಾ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಒತ್ತಾಯಿಸಿ ಕೊಡಗು ಜಿಲ್ಲಾ ಯುವ ಕಾಂಗ್ರೆಸ್, ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ಮತ್ತು ಮಡಿಕೇರಿ ನಗರ ಯುವ ಕಾಂಗ್ರೆಸ್ ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಮಡಿಕೇರಿ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಮಡ್ಲಂಡ ದರ್ಶನ್ ಮಾತನಾಡಿ, ಸೌಜನ್ಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಿಯಾದ ರೀತಿಯಲ್ಲಿ ತನಿಖೆ ನಡೆದಿಲ್ಲ. ಆರೋಪಿಗಳಿಗೆ ಶಿಕ್ಷೆಯಾಗಿಲ್ಲ. ಆಕೆಯ ಕುಟುಂಬಕ್ಕೆ ಅನ್ಯಾಯವಾಗಿದೆ. ಈ ಹಿನ್ನೆಲೆ ಪ್ರಕರಣದ ನೈಜ ಆರೋಪಿಗಳನ್ನು ಕಂಡು ಹಿಡಿಯಲು ಮರುತನಿಖೆ ನಡೆಸಬೇಕೆಂದು ಆಗ್ರಹಿಸಿದರು.
ಪ್ರತಿಭಟನಾ ನಿರತರು ಸರ್ಕಾರಕ್ಕೆ ಜಿಲ್ಲಾಡಳಿತ ಮೂಲಕ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಪಕ್ಷದ ನಗರಾಧ್ಯಕ್ಷ ರಾಜೇಶ್ ಯಲ್ಲಪ್ಪ, ಉಪಾಧ್ಯಕ್ಷ ಸದಾ ಮುದ್ದಪ್ಪ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್, ಪಕ್ಷದ ಮುಖಂಡ ತೆನ್ನೀರ ಮೈನಾ ಸೇರಿದಂತೆ ಮತ್ತಿತರರು ಇದ್ದರು.