ದೆಹಲಿಯಲ್ಲಿ ‘ಕೈ’ ಟಿಕೆಟ್ ಆಕಾಂಕ್ಷಿಗಳು

ಮಂಗಳೂರು: ದ.ಕ ಲೋಕಸಭಾ ಕ್ಷೇತ್ರಕ್ಕೆ ಗುರುವಾರ ಬಿಜೆಪಿ ಅಭ್ಯರ್ಥಿ ಹೆಸರು ಘೋಷಣೆಯಾಗಿದೆ. ಆದರೆ, ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ ಯಾರೆಂಬುದು ಇನ್ನೂ ನಿರ್ಧಾರವಾಗಿಲ್ಲ. ಸದ್ಯ ಕೈ ಟಿಕೆಟ್ ಆಕಾಂಕ್ಷಿಗಳು ಮತ್ತು ಅವರ ಬೆಂಬಲಿಗರು ದಿಲ್ಲಿಯಲ್ಲಿ ಬೀಡು ಬಿಟ್ಟಿದ್ದಾರೆ.

ರಾಜ್ಯ ಕಾಂಗ್ರೆಸ್‌ನ ಉಸ್ತುವಾರಿ ವೇಣುಗೋಪಾಲ್ ಅವರ ಬುಲಾವ್ ಮೇರೆಗೆ ಮಂಗಳವಾರ ರಾತ್ರಿಯೇ ಜಿಲ್ಲೆಯ ಕಾಂಗ್ರೆಸ್ ನಾಯಕರು ದಿಲ್ಲಿಗೆ ದೌಡಾಯಿಸಿದ್ದಾರೆ. ಟಿಕೆಟ್ ಆಕಾಂಕ್ಷಿಗಳಾದ ಮಾಜಿ ಸಚಿವ ಬಿ.ರಮಾನಾಥ ರೈ, ವಿನಯಕುಮಾರ್ ಸೊರಕೆ, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಕಣಚೂರು ಮೋನು, ಮೊದೀನ್ ಬಾವಾ ದಿಲ್ಲಿಯಲ್ಲಿದ್ದಾರೆ. ಜತೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಸಚಿವ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕ ಜೆ.ಆರ್.ಲೋಬೊ, ಯು. ಆರ್.ಸಭಾಪತಿ ಮುಂತಾದವರು ಕೂಡ ರಾಜಧಾನಿಯಲ್ಲಿದ್ದಾರೆ.

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿಗೆ ಮಾ.22ರಂದು ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಟಿಕೆಟ್ ಅಕಾಂಕ್ಷಿಯಾಗಿರುವ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ದೆಹಲಿಗೆ ತೆರಳಿಲ್ಲ. ಅವರು ಈ ಬಗ್ಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಮೂಲಕ ವೇಣುಗೋಪಾಲ್‌ಗೆ ಪತ್ರ ಕಳುಹಿಸಿದ್ದಾರೆ ಎನ್ನುವ ಮಾಹಿತಿ ಇದೆ. ವೇಣುಗೋಪಾಲ್ ನಿವಾಸದಲ್ಲಿ ಟಿಕೆಟ್ ಆಕಾಂಕ್ಷಿಗಳ ಹಾಗೂ ಜಿಲ್ಲಾ ಕಾಂಗ್ರೆಸ್ ನಾಯಕರ ಸಭೆ ಬಳಿಕ ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿ ಅಭ್ಯರ್ಥಿ ಆಯ್ಕೆ ಅಂತಿಮಗೊಳಿಸಲಿದೆ.

Leave a Reply

Your email address will not be published. Required fields are marked *