ಉತ್ತರ ಪ್ರದೇಶದ ಎಲ್ಲ 80 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್‌ ಸ್ಪರ್ಧೆ: ಗುಲಾಂ ನಬಿ ಆಜಾದ್​

ಲಖನೌ: ಬದ್ಧ ವೈರಿಗಳೆಂದೇ ಬಿಂಬಿತವಾಗಿದ್ದ ಅಖಿಲೇಶ್‌ ಯಾದವ್‌ ನೇತೃತ್ವದ ಎಸ್‌ಪಿ ಮತ್ತು ಮಾಯಾವತಿ ನೇತೃತ್ವದ ಬಿಎಸ್‌ಪಿ ಮುಂಬರುವ ಲೋಕಸಭಾ ಚುನಾವಣೆಗೆ ಉತ್ತರಪ್ರದೇಶದಲ್ಲಿ ಮೈತ್ರಿ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿಯೇ ಕಾಂಗ್ರೆಸ್‌ ಉತ್ತರಪ್ರದೇಶದ ಎಲ್ಲ 80 ಕ್ಷೇತ್ರಗಳಲ್ಲಿಯೂ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಉತ್ತರ ಪ್ರದೇಶದ ಉಸ್ತುವಾರಿ ಮತ್ತು ರಾಜ್ಯಸಭಾ ಸಂಸದ ಗುಲಾಂ ನಬಿ ಆಜಾದ್​ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ಉತ್ತರ ಪ್ರದೇಶದ 80 ಕ್ಷೇತ್ರಗಳಲ್ಲಿಯೂ ತನ್ನ ಅಭ್ಯರ್ಥಿಗಳನ್ನು ಸ್ವತಂತ್ರವಾಗಿ ನಿಲ್ಲಿಸಲಿದೆ ಎಂದು ಘೋಷಿಸಿದ್ದಾರೆ.

ನಾವು ಈ ಮೈತ್ರಿಯನ್ನು ಮುರಿಯಲಿಲ್ಲ ಎನ್ನುವುದನ್ನು ಜನರು ತಿಳಿದುಕೊಳ್ಳಬೇಕು. ಬಿಜೆಪಿಯನ್ನು ಸೋಲಿಸಲು ಯಾವುದೇ ಪಕ್ಷವಾದರೂ ಅದರೊಂದಿಗೆ ನಡೆಯಲು ಸಿದ್ಧವಿರುವುದಾಗಿ ಮೊದಲೇ ಹೇಳಿದ್ದೆವು. ಆದರೆ, ನಾವು ಯಾರನ್ನು ಬಲವಂತಪಡಿಸುವುದಿಲ್ಲ. ನಾವು ಒಂಬ್ಬಂಟಿಯಾಗಿಯೇ ಬಿಜೆಪಿಯನ್ನು ಸೋಲಿಸಲು ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.

80 ಕ್ಷೇತ್ರಗಳಲ್ಲಿಯೂ ನಾವು ಸ್ಪರ್ಧಿಸಲಿದ್ದು, ಬಿಜೆಪಿಯೊಂದಿಗೆ ಸೆಣಸಾಡಲು ನಾವು ಈಗಾಗಲೇ ಸಿದ್ಧತೆ ಮಾಡಿಕೊಂಡಿದ್ದೇವೆ. 2009ರ ಲೋಕಸಭಾ ಚುನಾವಣೆಯಲ್ಲಿ ಗೆದ್ದಿದ್ದಕ್ಕಿಂತ ಎರಡುಪಟ್ಟು ಜಾಸ್ತಿ ಸೀಟುಗಳನ್ನು ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಎಸ್‌ಪಿ ಮತ್ತು ಬಿಎಸ್‌ಪಿ ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ತಲಾ 38 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವುದಾಗಿ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್‌ ಕೂಡ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ.

2009ರಲ್ಲಿ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 21 ಸ್ಥಾನಗಳಲ್ಲಿ ಜಯಗಳಿಸಿತ್ತು. (ಏಜೆನ್ಸೀಸ್)