More

    150ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು

    ಶಿವಮೊಗ್ಗ: ಭವ್ಯ ಸಂಸ್ಕೃತಿ, ಪರಂಪರೆ ಹೊಂದಿರುವ ಕರ್ನಾಟಕದಲ್ಲಿ ಭ್ರಷ್ಟಾಚಾರದ ಸರ್ಕಾರದಿಂದ ಜನರು ಬೇಸತ್ತು ಹೋಗಿದ್ದಾರೆ. ಹೀಗಾಗಿ ಸರ್ವರ ಏಳಿಗೆಗಾಗಿ ಜನ ಕಾಂಗ್ರೆಸ್ ಬೆಂಬಲಿಸುತ್ತಿದ್ದು, ಈ ಬಾರಿ ಕಾಂಗ್ರೆಸ್ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಎಐಸಿಸಿ ರಾಷ್ಟ್ರೀಯ ವಕ್ತಾರೆ, ಎನ್‌ಎಸ್‌ಯುಐ ಮಾಜಿ ಅಧ್ಯಕ್ಷೆ ಆಲ್ಕಾಲಾಂಭಾ ವಿಶ್ವಾಸ ವ್ಯಕ್ತಪಡಿಸಿದರು.

    ರಾಜ್ಯದಲ್ಲಿ ಜನರು ಕಾಂಗ್ರೆಸ್ ಬಗ್ಗೆ ಒಲವನ್ನು ತೋರಿಸುತ್ತಿರುವುದರಿಂದ ಈ ಬಾರಿ 150ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸವಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ದಕ್ಷಿಣ ಭಾರತವನ್ನು ಬಿಜೆಪಿ ಮುಕ್ತಗೊಳಿಸಲು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ. ಜಾತಿ ಮತ್ತು ಧರ್ಮದ ಆಧಾರದ ಮೇಲೆ ಬಿಜೆಪಿ ಚುನಾವಣೆ ಎದುರಿಸುತ್ತಿದ್ದು, ಇದು ಕರ್ನಾಟಕದಲ್ಲಿ ಸಾಧ್ಯವಿಲ್ಲ. ಮತದಾರರು ಬುದ್ಧಿವಂತರು. ಕಾಂಗ್ರೆಸ್‌ನಿಂದ ಮಹಿಳೆಯರಿಗೆ ಸುರಕ್ಷತೆ ಇದೆ. ಆ ನಿಟ್ಟಿನಲ್ಲಿ ಈ ಬಾರಿ ಕಾಂಗ್ರೆಸ್ ಸಂಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ ಎಂದರು.
    ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ, 200 ಯೂನಿಟ್ ಉಚಿತ ವಿದ್ಯುತ್, ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂ., ನಿರುದ್ಯೋಗಿ ಪದವೀಧರರಿಗೆ 3 ಸಾವಿರ ರೂ. ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ 1500 ರೂ., ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಗ್ಯಾರಂಟಿ ನೀಡಿದೆ. ಆದರೆ ಇದುವರೆಗೂ ಬಿಜೆಪಿ ಯಾವುದೇ ಗ್ಯಾರಂಟಿ ಪ್ರಕಟಿಸಿಲ್ಲ ಎಂದರು.
    ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರಿಗೆ 15 ಸಾವಿರ ರೂ. ಹಾಗೂ ಸಹಾಯಕಿಯರಿಗೆ 10 ಸಾವಿರ ರೂ.ವರೆಗೆ ವೇತನ ಹೆಚ್ಚಳ, ಆಶಾ ಕಾರ್ಯಕರ್ತೆಯರಿಗೆ 8 ಸಾವಿರ ರೂ. ಮತ್ತು ಅಡುಗೆ ಸಹಾಯಕರು ಹಾಗೂ ಬಿಸಿಯೂಟ ನೌಕರರಿಗೆ 5 ಸಾವಿರ ರೂ. ವೇತನ, ಇವರು ಸೇವೆಯಿಂದ ನಿವೃತ್ತಿ ಹೊಂದಿದರೆ ಅಥವಾ ನಿಧನರಾದರೆ 3 ಲಕ್ಷ ರೂ. ಹಾಗೂ ಸಹಾಯಕ ಅಂಗನವಾಡಿ ಕಾರ್ಯಕರ್ತೆಯರಿಗೆ 2 ಲಕ್ಷ ರೂ. ನೀಡುವುದಾಗಿ ಕಾಂಗ್ರೆಸ್ ಗ್ಯಾರಂಟಿ ನೀಡುತ್ತಿದೆ ಎಂದರು.
    ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಅಭ್ಯರ್ಥಿ ಎಚ್.ಸಿ.ಯೋಗೇಶ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆಗಾ ಸುಲ್ತಾನ್, ರಾಷ್ಟ್ರೀಯ ಮುಖಂಡರಾದ ಉಡಾನ್ ರಾಣಾ, ಅನಿತಾ ಮೀನಾ, ಮಾಧ್ಯಮ ರಾಜ್ಯ ಉಪಾಧ್ಯಕ್ಷೆ ಸೌಗಂಧಿಕಾ ರಘುನಾಥ್, ಪ್ರಮುಖರಾದ ವಿಜಯಲಕ್ಷ್ಮೀ ಪಾಟೀಲ್, ಚಂದ್ರಶೇಖರ್, ಚಂದನ್, ಸಿ.ಎಸ್.ಚಂದ್ರಭೂಪಾಲ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts