

ಜೈಪುರ: ಪ್ರಧಾನಿ ನರೇಂದ್ರ ಮೋದಿ ದೇಶದ ಘನತೆ ಮತ್ತು ಪ್ರಜಾಪ್ರಭುತ್ವವನ್ನು ಹಾಳು ಮಾಡುತ್ತಿದ್ದಾರೆ. ಬಲವಂತವಾಗಿ ವಿರೋಧ ಪಕ್ಷದ ನಾಯಕರನ್ನು ಬಿಜೆಪಿಗೆ ಸೇರುವಂತೆ ಮಾಡಲಾಗುತ್ತಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.
ಜೈಪುರದಲ್ಲಿ ಕಾಂಗ್ರೆಸ್ ಸಮಾವೇಶವನ್ನು ಉದ್ಧೇಶಿಸಿ ಮಾತನಾಡಿದ ಸೋನಿಯಾ ಕಳೆದ 10 ವರ್ಷಗಳಿಂದ ದೇಶವು ನಿರುದ್ಯೋಗ, ಹಣದುಬ್ಬರ, ಆರ್ಥಿಕ ಬಿಕ್ಕಟ್ಟು ಮತ್ತು ಅಸಮಾನತೆಯನ್ನು ಹೋಗಲಾಡಿಸಲು ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಕಿಡಿಕಾರಿದ್ದಾರೆ.
ಇಂದು ನಮ್ಮ ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ, ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶಪಡಿಸಲಾಗುತ್ತಿದೆ. ನಮ್ಮ ಸಂವಿಧಾನವನ್ನು ಬದಲಾಯಿಸಲು ಪಿತೂರಿ ನಡೆಸಲಾಗುತ್ತಿದೆ. ಇದು ಸರ್ವಾಧಿಕಾರವಾಗಿದ್ದು ಇದಕ್ಕೆ ನಾವೆಲ್ಲರೂ ಉತ್ತರವನ್ನು ನೀಡುತ್ತೇವೆ ಎಂದು ಹೇಳಿದ್ದಾರೆ.
ತಮ್ಮನ್ನು ತಾವು ಶ್ರೇಷ್ಠ ಎಂದು ಪರಿಗಣಿಸಿರುವ ಮೋದಿ ಅವರು ದೇಶದ ಘನತೆ ಮತ್ತು ಪ್ರಜಾಪ್ರಭುತ್ವದ ಘನತೆಯನ್ನು ಹಾಳು ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನ ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.