
ರೋಣ: ಅಧಿಕಾರಿಗಳು ಸಾರ್ವಜನಿಕರ ಕೆಲಸ ಮಾಡಿ ಕೊಡುವಲ್ಲಿ ವಿಳಂಬ ಅಥವಾ ಹಣಕ್ಕೆ ಬೇಡಿಕೆ ಇಟ್ಟರೆ ಕೂಡಲೇ ಲೋಕಾಯುಕ್ತ ಅಧಿಕಾರಿಗಳನ್ನು ಸಂಪರ್ಕಿಸಿ ಎಂದು ಲೋಕಾಯುಕ್ತ ಡಿವೈಎಸ್‌ಪಿ ವಿಜಯ ಬಿರಾದಾರ ಹೇಳಿದರು.
ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಪಟ್ಟಣದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ಸ್ವಚ್ಛತಾ ಕಾರ್ಯ ಮಾಡಲು ನಿರ್ದೇಶನ ನೀಡುವಂತೆ ಲೋಕಾಯುಕ್ತ ಅಧಿಕಾರಿಗಳಿಗೆ ಸಾರ್ವಜನಿಕರು ಒಟ್ಟು ಮೂರು ಅರ್ಜಿಗಳನ್ನು ಸಲ್ಲಿಸಿದರು.
ಇನ್ನು ಉಪನೋಂದಣಾಧಿಕಾರಿ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಕೂಡಲೇ ಅದಕ್ಕೆ ಕಡಿವಾಣ ಹಾಕಬೇಕು ಎಂದು ಮತ್ತೊಬ್ಬರು ಮನವಿ ಸಲ್ಲಿಸಿದರು. ಚಿಲ್‌ಝರಿ ಹಾಗೂ ಮ್ಯಾಕಲ್‌ಝರಿ ಗ್ರಾಮದ ಜಮೀನುಗಳಲ್ಲಿ ಹೈಟೆನ್ಷನ್ ವಿದ್ಯುತ್ ತಂತಿಯಿಂದ ತೊಂದರೆಯಾಗುತ್ತಿದೆ. ಕೂಡಲೇ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಮನವಿ ಸಲ್ಲಿಸಿದರು. ಒಟ್ಟು 8 ಅರ್ಜಿಗಳು ಸಲ್ಲಿಕೆಯಾದವು.
ಲೋಕಾಯುಕ್ತ ಡಿವೈಎಸ್‌ಪಿ ವಿಜಯ ಬಿರಾದಾರ, ಲೋಕಾಯುಕ್ತ ಇನ್‌ಸ್ಪೆಕ್ಟರ್ ಪರಮೇಶ್ವರ ಕವಟಗಿ, ಸಿಬ್ಬಂದಿ ಉಮೇಶ ಸಂಗನಾಳ, ನೀಲಕಂಠ ಅಂಬಿಗೇರ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರವೀಂದ್ರಗೌಡ ಪಾಟೀಲ, ಪುರಸಭೆ ಮುಖ್ಯಾಧಿಕಾರಿ ರಮೇಶ ಹೊಸಮನಿ, ಟಿಎಚ್‌ಒ ಡಾ. ಭಜಂತ್ರಿ, ಪ್ರಭಾರಿ ಬಿಇಒ ಎಂ.ಎ. ಫಣಿಬಂಧ, ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.