More

    ಮುಂದುವರಿದ ರೈತಸಂಘ ಪ್ರತಿಭಟನೆ

    ಹನೂರು: ಕಾಡು ಪ್ರಾಣಿಗಳ ಹಾವಳಿಯನ್ನು ತಡೆಗಟ್ಟುವಂತೆ ಆಗ್ರಹಿಸಿ ಲೊಕ್ಕನಹಳ್ಳಿ ಗ್ರಾಮದಲ್ಲಿ ರೈತಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ರೈತರ ಜತೆಗೂಡಿ ನಡೆಸುತ್ತಿರುವ ಪ್ರತಿಭಟನೆ ಮಂಗಳವಾರ 2ನೇ ದಿನವೂ ಮುಂದುವರಿದಿದ್ದು, ಸ್ಥಳಕ್ಕೆ ಬಿಆರ್‌ಟಿ ಹಾಗೂ ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಡಿಸಿಎಫ್‌ಗಳು ಆಗಮಿಸುವಂತೆ ರೈತರು ಪಟ್ಟು ಹಿಡಿದಿದ್ದಾರೆ.

    ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಒಡೆಯರಪಾಳ್ಯ, ಪಿ.ಜಿ ಪಾಳ್ಯ, ಬೋರೆದೊಡ್ಡಿ, ಬೂದಿಪಡಗ, ಆಂಡಿಪಾಳ್ಯ ಹಾಗೂ ಈ ಭಾಗದ ಇನ್ನಿತರ ಗ್ರಾಮಗಳಲ್ಲಿ ಕಾಡು ಪ್ರಾಣಿಗಳು ಜಮೀನಿಗೆ ನುಗ್ಗಿ ಫಸಲನ್ನು ಹಾಳು ಮಾಡುತ್ತಿದ್ದು, ಇತ್ತೀಚೆಗೆ ಹೆಚ್ಚಾಗಿತ್ತು. ಆದರೆ ಕಾಡು ಪ್ರಾಣಿಗಳ ಹಾವಳಿಯನ್ನು ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ನಿರ್ಲಕ್ಷ್ಯ ವಹಿಸಿತ್ತು. ಪರಿಣಾಮ ಬೆಳೆ ನಾಶದಿಂದ ರೈತರು ನಷ್ಟ ಅನುಭವಿಸುವಂತಾಗಿತ್ತು. ಇತ್ತ ಸ್ಥಳೀಯ ಶಾಸಕರು ರೈತರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಸೋಮವಾರ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ನೂರಾರು ರೈತರ ಜತೆಗೂಡಿ ಗ್ರಾಮದ ಅರಣ್ಯ ಇಲಾಖೆಯ ಕಚೇರಿಯ ಮುಂಭಾಗದಲ್ಲಿ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು. ಈ ವೇಳೆ ಎರಡೂ ವಿಭಾಗದ ಎಸಿಎಫ್‌ಗಳು ಆಗಮಿಸಿದಾದರೂ ಸಮಸ್ಯೆ ಬಗೆಹರಿಯಲಿಲ್ಲ. ಇದರಿಂದ ರೊಚ್ಚಿಗೆದ್ದ ರೈತರು ಡಿಸಿಎಫ್‌ಗಳು ಸ್ಥಳಕ್ಕಾಗಮಿಸಿ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ ಕಚೇರಿ ಆವರಣದಲ್ಲೇ ಅಹೋರಾತ್ರಿ ಧರಣಿ ನಡೆಸಿ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಮಂಗಳವಾರವೂ ಪ್ರತಿಭಟನೆಯನ್ನು ಮುಂದುವರಿಸಿದ್ದರು. ಆದರೂ ಡಿಸಿಎಫ್‌ಗಳು ಆಗಮಿಸಲಿಲ್ಲ. ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ರೈತರು ಬುಧವಾರ ಉಗ್ರ ಪ್ರತಿಭಟನೆ ನಡೆಸಲು ಚಿಂತನೆ ನಡೆಸಿದ್ದಾರೆ.

    ಸಂಘದ ತಾಲೂಕು ಅಧ್ಯಕ್ಷ ಚಂಗಡಿ ಕರಿಯಪ್ಪ ಮಾತನಾಡಿ, ಸಮಸ್ಯೆಯನ್ನು ಬಗೆಹರಿಸುವ ಸಂಬಂಧ ಕಳೆದ 2 ದಿನದಿಂದಲೂ ಪ್ರತಿಭಟನೆ ನಡೆಸಲಾಗುತ್ತಿದ್ದು, ಡಿಸಿಎಫ್‌ಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಲಾಗಿದೆ. ಆದರೂ ಅವರು ಆಗಮಿಸದಿರುವುದು ರೈತರ ತಾಳ್ಮೆಯನ್ನು ಪರೀಕ್ಷಿಸುವಂತಿದೆ. ಇದರಿಂದ ರೈತರನ್ನು ಕಡೆಗಣಿಸುವಂತಾಗಿದೆ. ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ತಿಳಿಸಿದರು.

    ಶಾಂತಕುಮಾರ್, ನವೀನ್‌ಕುಮಾರ್, ಸೆಲ್ವ, ಕೃಷ್ಣ, ಷಣ್ಮುಗಂ, ವೇಲುಸ್ವಾಮಿ ಹಾಗೂ ಇನ್ನಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts