More

    ಕರೊನಾ ಹರಡದಂತೆ ಕಟ್ಟೆಚ್ಚರ ವಹಿಸಿ

    ಬೆಳಗಾವಿ : ನೆರೆಯ ಮಹಾರಾಷ್ಟ್ರದಲ್ಲಿ ಕೋವಿಡ್-19 ರೂಪಾಂತರಿ ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸೋಂಕು ಹರಡದಂತೆ ಕಟ್ಟೆಚ್ಚರ ವಹಿಸಬೇಕು. ಗಡಿಭಾಗಗಳಲ್ಲಿ ತೀವ್ರ ನಿಗಾವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸೂಚನೆ ನೀಡಿದರು.

    ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಕೋವಿಡ್-19ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಕೈಗೊಂಡಿರುವ ತುರ್ತು ಕ್ರಮಗಳ ಕುರಿತು ಹಮ್ಮಿಕೊಂಡಿದ್ದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್-19 ರೂಪಾಂತರಿ ಸೋಂಕಿನ ಕುರಿತು ವೈದ್ಯಾಧಿಕಾರಿಗಳು, ಸಂಬಂಧಿಸಿದ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ನಿರ್ಲಕ್ಷೃ ವಹಿಸಬಾರದು. ಸೋಂಕಿನ ಲಕ್ಷಣಗಳು ಕಂಡು ಬಂದರೆ ತಕ್ಷಣವೇ ಕ್ವಾರಂಟೈನ್ ಮಾಡಬೇಕು ಎಂದರು.

    ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಪ್ರಕರಣಗಳು ಹೆಚ್ಚಾಗಿವೆ. ಜಿಲ್ಲೆಯಲ್ಲಿ ಕರೊನಾ ವೈರಸ್ ಹರಡದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ವಹಿಸಬೇಕು. ಈ ನಿಟ್ಟಿನಲ್ಲಿ ಜನಜಾಗೃತಿ ಮತ್ತು ಲಸಿಕೆಯ ಕುರಿತು ಜನರಲ್ಲಿ ಅರಿವು ಮೂಡಿಸಬೇಕು. ಆರೋಗ್ಯ ಇಲಾಖೆಗೆ, ಸಂಬಂಧಪಟ್ಟ ಇತರ ಎಲ್ಲ ಇಲಾಖೆಗಳು ಸಹಕಾರ ನೀಡಬೇಕು ಎಂದು ತಿಳಿಸಿದರು.

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ ಮಾತನಾಡಿ, ಫೆ.22ರಿಂದ ಮಾರ್ಚ್ 15ರವರೆಗೆ 2 ನೆಯ ಅಲೆಯ ಹರಡುವಿಕೆಯ ಪ್ರಮಾಣ ಹೆಚ್ಚಾಗಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಜಿಲ್ಲೆಯಲ್ಲಿ ಇದುವರೆಗೂ 5 ಲಕ್ಷಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಪ್ರಸ್ತುತ 107 ಪ್ರಕರಣಗಳು ಸಕ್ರಿಯವಾಗಿವೆ. ಈಗಾಗಲೇ ಮುಂಜಾಗ್ರತಾ ಕ್ರಮವಾಗಿ 14 ಚೆಕ್‌ಪೋಸ್ಟ್‌ಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮತ್ತು ಹೊರ ರಾಜ್ಯಗಳಿಂದ ಆಗಮಿಸುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ. ಜಿಲ್ಲೆಯಲ್ಲಿ ಮಾ.1ರಿಂದ 3ನೆಯ ಹಂತದ ಲಸಿಕೆಯ ವಿತರಣೆ ಆರಂಭವಾಗಿದೆ. 60 ವರ್ಷ ಮೇಲ್ಪಟ್ಟ ವಯೋಮಾನದವರಿಗೆ ಲಸಿಕೆ ಲಭ್ಯವಾಗಲಿದೆ ಎಂದು ಮಾಹಿತಿ ನೀಡಿದರು.

    ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಪೊಲೀಸ್ ಆಯುಕ್ತ ಡಾ.ತ್ಯಾಗರಾಜನ್, ಜಿಲ್ಲಾ ಪಂಚಾಯಿತಿ ಸಿಇಒ ದರ್ಶನ್ ಎಚ್.ವಿ., ಎಸ್‌ಪಿ ಲಕ್ಷ್ಮಣ ನಿಂಬರಗಿ ಸೇರಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಇದ್ದರು.

    ಮಹದಾಯಿ ವಿಚಾರದಲ್ಲಿ ರಾಜ್ಯಕ್ಕೆ ನ್ಯಾಯ: ಮಹದಾಯಿ ವಿಷಯದಲ್ಲಿ ಕರ್ನಾಟಕ ಯಾವುದೇ ಕಾನೂನು ಉಲ್ಲಂಘನೆ ಮಾಡಿಲ್ಲ. ಮಹದಾಯಿ ವಿಚಾರ ಬಂದರೆ ರಾಜ್ಯದ ಎಲ್ಲ ಪಕ್ಷಗಳು ಒಂದಾಗುತ್ತವೆ. ಗೋವಾ ಆರೋಪ ಮಾಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಲು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಕರ್ನಾಟಕ ಯಾವುದೇ ಕಾನೂನು ನಿಯಮ ಉಲ್ಲಂಘನೆ ಮಾಡಿಲ್ಲ. ಈ ಯೋಜನೆ ಬಗ್ಗೆ ಈಗಾಗಲೇ ಡಿಪಿಆರ್ ಮಾಡಲಾಗಿದೆ. ಈ ವಿಚಾರದಲ್ಲಿ ಜನರಿಗೆ ಯಾವುದೇ ಆತಂಕ ಬೇಡ. ಮೂರು ಜನ ಸದಸ್ಯ ತಂಡ ಸುಪ್ರೀಂ ಕೋರ್ಟ್‌ಗೆ ವರದಿ ಸಲ್ಲಿಕೆ ಮಾಡಲಿದೆ. ಈ ವರದಿಯಲ್ಲಿ ರಾಜ್ಯಕ್ಕೆ ನ್ಯಾಯ ಸಿಗಲಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.

    ಮುಂಬರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 5 ಲಕ್ಷ ಮತಗಳ ಅಂತರದಿಂದ ಗೆಲವು ಸಾಧಿಸಲಿದ್ದಾರೆ. ಕಾಂಗ್ರೆಸ್ ನಾಯಕರ ಹೇಳಿಕೆಗಳಿಗೆ ಉತ್ತರ ನೀಡುವ ಅವಶ್ಯಕತೆ ಇಲ್ಲ. ಪ್ರಚಾರಕ್ಕಾಗಿ ಹೇಳಿಕೆ ನೀಡುವವರಿಗೆ ಹೆಚ್ಚಿನ ಆದ್ಯತೆ ಕೊಡಲ್ಲ.
    | ರಮೇಶ ಜಾರಕಿಹೊಳಿ ಜಿಲ್ಲಾ ಉಸ್ತುವಾರಿ ಸಚಿವ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts