More

    ಕರೊನಾ ತಡೆಗೆ ಬಿಗಿ ಕ್ರಮ ಕೈಗೊಳ್ಳಿ

    ಬೆಳಗಾವಿ: ಜಿಲ್ಲೆಯಲ್ಲಿ ಸೋಮವಾರ ಮತ್ತೆ 3 ಕರೊನಾ ಪ್ರಕರಣಗಳು ದೃಢಪಟ್ಟಿರುವುದರಿಂದ ರಾಯಬಾಗ ತಾಲೂಕಿನ ಕುಡಚಿ ಸೇರಿ ಎಲ್ಲ ಕಂಟೋನ್ಮೆಂಟ್ ಪ್ರದೇಶಗಳಲ್ಲಿ ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

    ಕರೊನಾ ವೈರಸ್ ನಿಯಂತ್ರಣ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಆಯೋಜಿಸಿದ್ದ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕುಡಚಿಯ ಪ್ರತಿಯೊಬ್ಬರನ್ನೂ ವೈಯಕ್ತಿಕವಾಗಿ ವೈದ್ಯಕೀಯ ತಪಾಸಣೆ ನಡೆಸಬೇಕು. ತಬ್ಲಿಘಿ ಜತೆ ಸಂಪರ್ಕ ಹೊಂದಿರುವವರನ್ನು ತಕ್ಷಣವೇ ಗುರುತಿಸುವ ಕೆಲಸವಾಗಬೇಕು. ಒಂದು ವೇಳೆ ಸ್ವಯಂ ಪ್ರೇರಣೆಯಿಂದ ಅವರು ಮುಂದೆ ಬರದಿದ್ದರೆ ಕಾನೂನು ಪ್ರಕಾರ ಬಲ ಪ್ರಯೋಗಿಸಿ ಅವರನ್ನು ತಕ್ಷಣವೇ ಕ್ವಾರಂಟೈನ್‌ನಲ್ಲಿ ಇರಿಸುವ ಕೆಲಸವಾಗಬೇಕು ಎಂದರು.

    ಮದ್ಯ ಮಾರಾಟಕ್ಕೆ ಅವಕಾಶ ನೀಡದಂತೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಮನವರಿಕೆ ಮಾಡಲಾಗುವುದು ಎಂದರು. ಈಗಾಗಲೇ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಜತೆ ಚರ್ಚೆ ನಡೆಸಲಾಗಿದ್ದು, ಬೆಳಗಾವಿಯಲ್ಲಿ ಇನ್ನೆರಡು ದಿನಗಳಲ್ಲಿ ಪ್ರಯೋಗಾಲಯ ಆರಂಭಗೊಳ್ಳುವ ಸಾಧ್ಯತೆ ಇದೆ ಎಂದರು.

    ಸೋಂಕು ಹರಡದಂತೆ ಕ್ರಮಕ್ಕೆ ಸೂಚನೆ: ನಿಷೇಧಿತ ಹಿರೇಬಾಗೇವಾಡಿ, ಕುಡಚಿ, ಬೆಳಗುಂದಿ ಹಾಗೂ ಬೆಳಗಾವಿ ಕ್ಯಾಂಪ್ ಪ್ರದೇಶಗಳಲ್ಲಿ ಅಗತ್ಯ ವಸ್ತುಗಳು, ವೈದ್ಯಕೀಯ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಸೋಂಕು ದೃಢಪಟ್ಟಿರುವ 17 ಜನರ ಜತೆ ಪ್ರಾಥಮಿಕ ಸಂಪರ್ಕ ಹೊಂದಿರುವವರ ಬಗ್ಗೆ ಹೆಚ್ಚಿನ ನಿಗಾ ವಹಿಸುವ ಮೂಲಕ ಸೋಂಕು ಹರಡದಂತೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗೆ ಸೂಚಿಸಿದರು.

    ಮದ್ಯ ಮಾರಾಟಕ್ಕೆ ಅವಕಾಶ ಬೇಡ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮಾತನಾಡಿ, ಎಂ.ಎಸ್.ಐ.ಎಲ್. ಸೇರಿ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ಅವರಿಗೆ ಮನವರಿಕೆ ಮಾಡಲಾಗುವುದು ಎಂದರು. ದೆಹಲಿಯ ತಬ್ಲಿಘಿ ಧಾರ್ಮಿಕ ಸಭೆಗೆ ಹೋಗಿ ಬಂದಿರುವವರು ತಮ್ಮ ಸಂಬಂಧಿಕರನ್ನು ಭೇಟಿ ಮಾಡಲು ಹೋಗುವುದು ರೂಢಿ. ಆದ್ದರಿಂದ ಅಂಥವರನ್ನು ಪತ್ತೆ ಹಚ್ಚುವ ಕೆಲಸ ತುರ್ತಾಗಿ ನಡೆಸಬೇಕು. ಇಲ್ಲದಿದ್ದರೆ ಸೋಂಕು ಇನ್ನಷ್ಟು ಹರಡುತ್ತದೆ.

    ಯಾವುದೇ ಕಾರಣಕ್ಕೂ ಇಂತಹ ಸ್ಥಿತಿ ಉದ್ಭವಿಸಬಾರದು ಎಂದರು. ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹಾಗೂ ವಿಧಾನಸಭೆ ಉಪ ಸಭಾಪತಿ ಆನಂದ ಮಾಮನಿ ಮಾತನಾಡಿ, ಸೋಂಕು ತಡೆಗಟ್ಟಲು ಸಾಧ್ಯವಾದಷ್ಟು ಬಿಗಿ ಕ್ರಮಕ್ಕೆ ಸಲಹೆ ನೀಡಿದರು. ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಮಾತನಾಡಿ, ಕುಡಚಿಯ ಪ್ರತಿಯೊಬ್ಬರನ್ನೂ ಕಡ್ಡಾಯವಾಗಿ ಕ್ವಾರಂಟೈನ್ ಮಾಡದಿದ್ದರೆ ವೈರಸ್ ಸಮಾಜಕ್ಕೆ ಕಂಟಕವಾಗುವ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದರು.

    ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆ, ತುರ್ತು ಚಿಕಿತ್ಸೆಗೆ ಅಗತ್ಯವಿರುವ ರೋಗಿಗಳನ್ನು ಸಾಗಿಸುವ ವಾಹನಗಳಿಗೆ ಅಂತರ್ ಜಿಲ್ಲಾ ಗಡಿಯಲ್ಲಿ ಯಾವುದೇ ಕಾರಣಕ್ಕೂ ತಡೆಯೊಡ್ಡಬಾರದು ಎಂದು ತಿಳಿಸಿದರು. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದರು.
    ಆಸ್ಪತ್ರೆಗೆ ಸ್ಥಳಾಂತರ: ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಈಗಾಗಲೇ ಸೋಂಕು ದೃಢಪಟ್ಟಿರುವವರಿಗೆ ಚಿಕಿತ್ಸೆ ಮುಂದುವರಿದಿದೆ.

    ಸೋಮವಾರ ಹೊಸದಾಗಿ ಸೋಂಕು ದೃಢಪಟ್ಟಿರುವ ರಾಯಬಾಗ ತಾಲೂಕಿನ ಮೂವರನ್ನೂ ಪ್ರಾಥಮಿಕ ವರದಿಯ ಪ್ರಕಾರ ಭಾನುವಾರ ರಾತ್ರಿಯೇ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈಗಾಗಲೇ ಕ್ವಾರಂಟೈನ್‌ನಲ್ಲಿ ಇರುವ ಎಲ್ಲರ ಗಂಟಲು ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳಿಸಲಾಗುತ್ತಿದೆ ಎಂದು ತಿಳಿಸಿದರು. ಕುಡಚಿಯಲ್ಲಿ ಈಗಾಗಲೇ ಶೇ.80ರಷ್ಟು ಸಮೀಕ್ಷೆ ಪೂರ್ಣಗೊಂಡಿದ್ದು, ಮನೆ ಮನೆಗೆ ತೆರಳಿ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ ಎಂದು ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ ವಿವರಿಸಿದರು.

    ಬೆಳಗುಂದಿ ಮತ್ತು ಹಿರೇಬಾಗೇವಾಡಿ ಕಂಟೋನ್ಮೆಂಟ್ ಝೋನ್‌ಗಳಲ್ಲಿ ನಿರಂತರ ಪರಿಶೀಲನೆ ನಡೆದಿದೆ. ಸಿಸಿಟಿವಿ ಅಳವಡಿಸಿ ಜನ ಸಂಚಾರದ ಮೇಲೆ ನಿಗಾ ವಹಿಸಲಾಗಿದೆ ಎಂದು ಉಪ ವಿಭಾಗಾಧಿಕಾರಿ ಅಶೋಕ ತೇಲಿ ತಿಳಿಸಿದರು. ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕ ಅನಿಲ ಬೆನಕೆ, ಮಹಾನಗರ ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್‌ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ
    | ಡಾ. ಎಸ್.ವಿ. ಮುನ್ಯಾಳ, ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts