More

    ಕರೊನಾ ಲಸಿಕೆ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಿ

    ಬೆಳಗಾವಿ: ಕರೊನಾ ಲಸಿಕೆ ಬಂದ ನಂತರ ಜಿಲ್ಲೆಯಲ್ಲಿ ಮಾರ್ಗಸೂಚಿ ಪ್ರಕಾರ ವಿತರಿಸಲು ಆರೋಗ್ಯಾಧಿಕಾರಿಗಳು ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳ ಪ್ರಯತ್ನ ಸಮರ್ಪಕವಾಗಿರಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚನೆ ನೀಡಿದರು.
    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರೊನಾ ಲಸಿಕೆ ತಲುಪಿಸಲು ಎಲ್ಲ ರೀತಿಯ ಮುನ್ನೆಚ್ಚರಿಕೆ ಕೈಗೊಳ್ಳುವ ಜತೆಗೆ ಸಮರ್ಪಕ ದತ್ತಾಂಶವನ್ನು ಜಿಲ್ಲಾಡಳಿತಕ್ಕೆ ಸಮಗ್ರವಾಗಿ ಒದಗಿಸಬೇಕು ಎಂದು ತಿಳಿಸಿದರು.

    ಜಿಲ್ಲೆಯು ಜನರಿಗೆ ಆರೋಗ್ಯ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಉತ್ತಮ ಸ್ಥಾನ ಹೊಂದಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಬಾಣಂತಿಯರು ಆಸ್ಪತ್ರೆಗಳಿಗೆ ತೆರಳಲು ಹಿಂದೇಟು ಹಾಕುತ್ತಿರುವುದರಿಂದ ಬಾಣಂತಿಯರು ಹಾಗೂ ಮಗುವಿನ ಆರೋಗ್ಯದ ದೃಷ್ಟಿಕೋನದಿಂದ ಬಿಸಿಜಿ ಹಾಗೂ ಪೋಲಿಯೋ ಲಸಿಕೆಯನ್ನು ಆಶಾ ಕಾರ್ಯಕರ್ತೆಯರ ಮೂಲಕ ಮನೆಗೆ ತಲುಪಿಸುವ ಕೆಲಸ ಮಾಡಬೇಕು ಎಂದರು. ಜಿಲ್ಲಾ ಕುಟುಂಬ ಮತ್ತು ಆರೋಗ್ಯಾಧಿಕಾರಿ ಡಾ. ಐ.ಪಿ. ಗಡಾದ ಮಾತನಾಡಿ, ಕೋವಿಡ್-19 ವ್ಯಾಕ್ಸಿನ್ ಸಂಗ್ರಹಿಸಿಡಲು ಈಗಾಗಲೇ ಬೆಳಗಾವಿ ನಗರದ ವ್ಯಾಕ್ಸಿನ್ ಡಿಪೋದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿದ ಸ್ಟೋರೇಜ್ ಸಿದ್ಧವಿದೆ. 2021ರ ಮಾರ್ಚ್ ಅಂತ್ಯದೊಳಗೆ ದೊಡ್ಡ ಪ್ರಮಾಣದಲ್ಲಿ ವ್ಯಾಕ್ಸಿನ್ ಸಂಗ್ರಹ ಘಟಕ ಸಿದ್ಧ ಮಾಡಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು. ಯುಎನ್‌ಡಿಪಿ ಅಧಿಕಾರಿ ಪ್ರವೀಣ ಸ್ವಾಮಿ ಮಾತನಾಡಿ, ಮಾರ್ಗಸೂಚಿ ಪ್ರಕಾರ ವ್ಯಾಕ್ಸಿನ್ ತಲುಪಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರಥಮ ಹಂತದಲ್ಲಿ ಇಲಾಖೆ ಸಿಬ್ಬಂದಿಗೆ ಲಸಿಕೆ ನೀಡಲು ಯೋಜನೆ ರೂಪಿಸಲಾಗಿದೆ ಎಂದು ಮಾಹಿತಿ ನೀಡಿದರು.

    ವಿಶ್ವ ಆರೋಗ್ಯ ಸಂಸ್ಥೆಯ ಎಸ್‌ಎಂಒ ಡಾ.ಸಿದ್ದಲಿಂಗಯ್ಯ ಮಾತನಾಡಿ, ಶಾಲಾ ಮಕ್ಕಳ ಆರೋಗ್ಯ ದೃಷ್ಟಿಯಿಂದ ಮಕ್ಕಳಿಗೆ ಕೂಡ ಲಸಿಕೆ ತಲುಪಿಸುವ ಯೋಜನೆ ರೂಪಿಸಲಾಗಿದೆ. ಪ್ರತಿ ಶಾಲಾ ಮಕ್ಕಳಿಗೂ ಲಸಿಕೆ ತಲುಪಿಸುವ ಗುರಿ ಹೊಂದಲಾಗಿದೆ ಎಂದರು. ಜಿಲ್ಲಾ ಆರೋಗ್ಯಧಿಕಾರಿ ಡಾ. ಎಸ್.ವಿ. ಮುನ್ಯಾಳ, ಜಿಲ್ಲಾ ಸರ್ಜನ್ ಡಾ.ಎಸ್.ಎಂ. ಖಾಜಿ, ತಾಲೂಕುಮಟ್ಟದ ಆರೋಗ್ಯ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts