More

    ಭ್ರಷ್ಟಾಚಾರ ನಾಗರಿಕ ಸಮಾಜಕ್ಕೆ ಅಂಟಿದ ಕಳಂಕ: ನ್ಯಾಯಾಧೀಶ ಮಲ್ಲಿಕಾರ್ಜುನಗೌಡ

    ಶಿವಮೊಗ್ಗ: ಲಂಚ ಪಡೆಯುವುದು ಮತ್ತು ಕೊಡುವುದು ಸಾಮಾಜಿಕ ಪಿಡುಗು. ಭ್ರಷ್ಟಾಚಾರ ನಾಗರಿಕ ಸಮಾಜಕ್ಕೆ ಅಂಟಿದ ಕಳಂಕ ಹಾಗೂ ಶಾಪವಾಗಿದ್ದು ಸಂಪೂರ್ಣವಾಗಿ ತೊಡೆದು ಹಾಕುವ ಅನಿವಾರ್ಯತೆ ಎದುರಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಹೇಳಿದರು.
    ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ಲೋಕಾಯುಕ್ತ, ಜಿಲ್ಲಾಡಳಿತ, ಜಿಪಂ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಶ್ರಯದಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ಉದ್ಘಾಟಿಸಿ ಅವರು ಮಾತನಾಡಿದರು.
    ತಮ್ಮ ಮಕ್ಕಳು, ಕುಟುಂಬ ಚೆನ್ನಾಗಿರಲೆಂದು ಅಧಿಕಾರಿಗಳು ವಾಮ ಮಾರ್ಗದಲ್ಲಿ ಹಣ ಸಂಪಾದನೆ ಮಾಡುವುದು ಒಳ್ಳೆಯದಲ್ಲ. ಅದರ ಬದಲು ಶಿಕ್ಷಣ ಕೊಡಿಸುವ ಮೂಲಕ ಸಮಾಜಕ್ಕೆ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಬೇಕು. ಮಕ್ಕಳಿಗಾಗಿ ನಾವು ಹಣ, ಐಶ್ವರ್ಯ ಸಂಪಾದಿಸುವ ಬದಲು ಒಳ್ಳೆಯ ಶಿಕ್ಷಣ ಕೊಡಿಸಿ ಸಂಸ್ಕಾರವಂತರನ್ನಾಗಿಸಬೇಕು. ಆಗ ಮಾತ್ರ ಮಕ್ಕಳ ಭವಿಷ್ಯ ಉಜ್ವಲಗೊಳ್ಳಲು ಸಾಧ್ಯ ಎಂದರು.
    ಸಾರ್ವಜನಿಕ ವಲಯದಲ್ಲಿ ಅದರಲ್ಲೂ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಷಾರ ಹಂತ ಹಂತವಾಗಿ ಆವರಿಸಿದೆ. ಗುಮಾಸ್ತನಿಂದ ಅಧಿಕಾರಿಗಳವರೆಗೂ ಲಂಚ ಇಲ್ಲದೆ ಯಾವುದೇ ಕೆಲಸ ಆಗುವುದಿಲ್ಲ ಎಂಬ ಸ್ಥಿತಿಗೆ ತಲುಪಿದೆ. ತನಿಖೆ ನಡೆಸಿ ಶಿಕ್ಷೆ ಕೊಡಿಸಬೇಕಾದ ಪೊಲೀಸ್ ಇಲಾಖೆಯಲ್ಲೂ ಭ್ರಷ್ಟಾಚಾರ ಇದೆ ಎಂಬ ಆರೋಪಗಳೂ ಕೇಳಿಬರುತ್ತವೆ. ಬಹಳಷ್ಟು ಅಧಿಕಾರಿ, ಸಿಬ್ಬಂದಿಗೆ ಲಂಚ ಪಡೆಯುವಾಗ ಖುಷಿ ಎನ್ನಿಸುತ್ತದೆ ಎಂದು ಹೇಳಿದರು.
    ಎಡಿಸಿ ಡಾ. ನಾಗೇಂದ್ರ ಎಫ್.ಹೊನ್ನಳ್ಳಿ ಮಾತನಾಡಿದರು. ಚಿತ್ರದುರ್ಗ ವಿಭಾಗದ ಲೋಕಾಯುಕ್ತ ಎಸ್ಪಿ ಎನ್.ವಾಸುದೇವರಾಮ, ಜಿಪಂ ಸಿಇಒ ಎನ್.ಡಿ.ಪ್ರಕಾಶ್, 1ನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶ ಕೆ.ಎಸ್.ಮಾನು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ದರ್ಶಿ ರಾಜಣ್ಣ ಸಂಕಣ್ಣನವರ್, ಶಿವಮೊಗ್ಗ ಲೋಕಾಯುಕ್ತ ಎಸ್ಪಿ ಎನ್.ಮೃತ್ಯುಂಜಯ, ಜಿಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ್ ತೊದಲಬಾಗಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts