

ವಿದೇಶ ಪ್ರಯಾಣಕ್ಕೆ ಅನುಮತಿ ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ 57ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಆದೇಶವನ್ನು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ ಕೋರ್ಟ್, ಜುಲೈ 1 ರಿಂದ ಜುಲೈ 27 ರವರೆಗೆ ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶ ಪ್ರವಾಸ ಮಾಡಲು ಅನುಮತಿ ನೀಡಿದೆ.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ತೂಗುದೀಪ ಅವರು ಸಿನಿಮಾ ಶೂಟಿಂಗ್‌ಗಾಗಿ ವಿದೇಶಕ್ಕೆ ಹೋಗಲು ಇಂದು (30) ಕೋರ್ಟ್ ಅನುಮತಿ ನೀಡಿದೆ.
(ಏಜೆನ್ಸೀಸ್)
ನ್ಯಾಯಾಲಯದಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಮುಂದಿನ ವಿಚಾರಣೆಯ ದಿನಾಂಕದಲ್ಲಿ ದರ್ಶನ್ ಅವರು ತಪ್ಪದೇ ಹಾಜರಾಗಬೇಕು. ಈ ಷರತ್ತಿನ ಮೇರೆಗೆ ಅವರಿಗೆ ವಿದೇಶಕ್ಕೆ ಹೋಗಲು ನ್ಯಾಯಾಲಯ ಅನುಮತಿ ನೀಡಿದೆ.
ರೇಣುಕಾಸ್ವಾಮಿ ಕೇಸ್ನಲ್ಲಿ ದರ್ಶನ್ ಅವರು 2ನೇ ಪ್ರಮುಖ ಆರೋಪಿ ಆಗಿದ್ದಾರೆ. ಹಲವು ತಿಂಗಳ ಕಾಲ ಜೈಲು ವಾಸ ಅನುಭವಿಸಿ ಬಂದಿದ್ದಾರೆ. ಕರ್ನಾಟಕ ಹೈಕೋರ್ಟ್ ದರ್ಶನ್ಗೆ ಜಾಮೀನು ನೀಡಿದೆ. ಇದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ. ಸದ್ಯಕ್ಕೆ ಅರ್ಜಿ ವಿಚಾರಣೆ ದಿನಾಂಕ ಮುಂದೂಡಿಕೆ ಆಗಿದೆ. ಇದರ ಜೊತೆ ವಿದೇಶಕ್ಕೆ ಹೋಗಲು ಅನುಮತಿ ಸಿಕ್ಕಿದ್ದರಿಂದ ದರ್ಶನ್ಗೆ ರಿಲೀಫ್ ಸಿಕ್ಕಿದೆ.
ಪ್ರಸ್ತುತ ಷರತ್ತುಬದ್ಧ ಜಾಮೀನಿನ ಮೇಲೆ ಹೊರಗಿರುವ ದರ್ಶನ್, ದುಬೈ ಮತ್ತು ಯುರೋಪ್‌ಗೆ ಪ್ರಯಾಣಿಸಲು ಅನುಮತಿ ಕೋರಿ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 439(1)(ಬಿ) ಅಡಿಯಲ್ಲಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.