

ಉಡುಪಿ: ಬಾಲ್ಯವಿವಾಹ, ಬಾಲಕಾರ್ಮಿಕ, ದೌರ್ಜನ್ಯ ಮೊದಲಾದ ಸಾಮಾಜಿಕ ಪಿಡುಗುಗಳನ್ನು ತಡೆಯುವ ನಿಟ್ಟಿನಲ್ಲಿ ಯುವಜನತೆ ಶ್ರಮಿಸಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣವರ್ ಹೇಳಿದರು.
ಗುರುವಾರ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರಕ್ಷಕ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ನ್ಯಾಯಾಲಯ ಹಾಗೂ ಪೊಲೀಸ್ ಠಾಣೆ ಕಾರ್ಯವೈಖರಿ ವೀಕ್ಷಣೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಠಾಣೆ ಹಾಗೂ ನ್ಯಾಯಾಲಯ ಮೊದಲಾದ ಆಡಳಿತ ವ್ಯವಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಕುಕೃತ್ಯಗಳನ್ನು ವಿರೋಧಿಸುವುದರೊಂದಿಗೆ ಅದನ್ನು ಸಂಪೂರ್ಣ ತೊಡೆದುಹಾಕಲು ಪ್ರತಿಯೊಬ್ಬರೂ ಸಹಕಾರ ನೀಡಬೇಕು. ದೂರುಗಳು ಬಂದಾಗ ಮಾತ್ರ ತನಿಖೆ ನಡೆದು, ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ಆಗುವವರೆಗೆ ನ್ಯಾಯಿಕ ಪ್ರಕ್ರಿಯೆಗಳಿರುತ್ತವೆ. ಸಮಾಜದಲ್ಲಿ ನಡೆದ ಎಲ್ಲಾ ಅಪರಾಧಗಳು ಬೆಳಕಿಗೆ ಬರುವುದಿಲ್ಲ ಎಂದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಮಾತನಾಡಿ, ವಿದ್ಯಾರ್ಥಿಗಳಿಗೆ ನ್ಯಾಯಾಲಯ ಹಾಗೂ ಪೊಲೀಸ್ ಠಾಣೆ ಕಾರ್ಯವೈಖರಿ ತಿಳಿಸುವ ಮೂಲಕ ಆಂತರಿಕ ಭಯವನ್ನು ಹೋಗಲಾಡಿಸಿ ಸ್ನೇಹಮಯ ಪರಿಸರ ಒದಗಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಹೆಣ್ಣುಮಗು ಹುಟ್ಟಿದಾಗಿನಿಂದಲೂ ವಿವಾಹದವರೆಗೆ ಪೋಷಕರಲ್ಲಿ ಆತಂಕ ಇರುವುದು ಸರ್ವೇ ಸಾಮಾನ್ಯ. ಹೆಣ್ಣು ಮತ್ತು ಗಂಡು ಮಕ್ಕಳನ್ನು ಬೆಳೆಸುವ ರೀತಿಯಲ್ಲಿ ಗಮನಹರಿಸಬೇಕು. ಅನೇಕ ಸಂದರ್ಭಗಳಲ್ಲಿ ಹೆಣ್ಣು ಮಕ್ಕಳೂ ಸಹ ಭವಿಷ್ಯದ ಅರಿವಿಲ್ಲದೇ ಆಕರ್ಷಣೆಗೆ ಒಳಗಾಗಿ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಇಂತಹ ಆತುರದ ನಿರ್ಧಾರಗಳಿಗೆ ಬಲಿಯಾಗದೇ ಹೆಣ್ಣು ಮಕ್ಕಳು ಮೊದಲು ಶಿಕ್ಷಣದ ಕಡೆಗೆ ಗಮನಹರಿಸಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಪುರುಷೋತ್ತಮ, ಜಿಲ್ಲೆಯ ಉಪ ಪೊಲೀಸ್ ಅಧೀಕ್ಷಕ ಡಿ.ಟಿ. ಪ್ರಭು, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಲೀಲಾಬಾಯಿ (ಪ್ರಭಾರ) ಮತ್ತಿತರರು ಉಪಸ್ಥಿತರಿದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ದೀಪಾ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮಕ್ಕೂ ಮುನ್ನ ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನದ ಅಂಗವಾಗಿ ವಿದ್ಯಾರ್ಥಿನಿಯರಿಂದ ಜಾಥಾ ನಡೆಯಿತು.