ಆದಾಯ ತೆರಿಗೆ ಪ್ರಕರಣ: ಸಚಿವ ಡಿಕೆಶಿಗೆ ಜಾಮೀನು ಮಂಜೂರು

ಬೆಂಗಳೂರು: ಆದಾಯ ತೆರಿಗೆ ಇಲಾಖೆಗೆ ಸುಳ್ಳು ಮಾಹಿತಿ ನೀಡಿದ ಆರೋಪ ಮೇಲೆ ದಾಖಲಾಗಿದ್ದ ಪ್ರಕರಣದಲ್ಲಿ ಸಚಿವ ಡಿ.ಕೆ. ಶಿವಕುಮಾರ್​ಗೆ ಆರ್ಥಿಕ ಅಪರಾಧಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

50 ಸಾವಿರ ರೂ. ಶ್ಯೂರಿಟಿ ಮೇಲೆ ಡಿಕೆಶಿಗೆ ಜಾಮೀನು ನೀಡಲಾಗಿದ್ದು, ಉಳಿದ ಆರೋಪಿಗಳಿಗೂ ಸಹ ಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಕೋರ್ಟ್​ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್​ 20 ಕ್ಕೆ ಮುಂದೂಡಿ ಆದೇಶಿಸಿದೆ.

ಆದಾಯ ತೆರಿಗೆ ಇಲಾಖೆ ಸಚಿವರ ವಿರುದ್ಧ ಐಟಿ ಕಾಯಿದೆ ಸೆಕ್ಷನ್ 277, 278, 193, 199, ಹಾಗೂ 120(ಬಿ) ಅಡಿ ದೂರು ದಾಖಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾ.ಎಂ.ಎಸ್. ಆಳ್ವಾ ಅವರು ಡಿ.ಕೆ.ಶಿವಕುಮಾರ್ ಗೆ ಇಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದರು.

ಶಿವಕುಮಾರ್ ಜತೆ ಸಚಿನ್ ನಾರಾಯಣ್, ಸುನಿಲ್ ಕುಮಾರ್ ಶರ್ಮಾ, ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರಗೂ ಸಮನ್ಸ್ ಜಾರಿಯಾಗಿತ್ತು. ಆದರೆ ಡಿ.ಕೆ.ಶಿವಕುಮಾರ್ ಆಪ್ತ ಸಚಿನ್ ನಾರಾಯಣ್ ವಿರುದ್ಧದ ಆರ್ಥಿಕ ಅಪರಾಧಗಳ ತಡೆ ವಿಶೇಷ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಹಿನ್ನಲೆಯಲ್ಲಿ ಸಚಿನ್ ನಾರಾಯಣ್ ಹೊರತುಪಡಿಸಿ ಉಳಿದ ಆರೋಪಿಗಳು ಇಂದು ಆರ್ಥಿಕ ಅಪರಾಧಗಳ ತಡೆ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದರು.