

ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕಿತರಿಗೆ ಆಯುರ್ವೆದ ಚಿಕಿತ್ಸೆ ಕಲ್ಪಿಸುವ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸುವಂತೆ ಅರ್ಜಿದಾರರಿಗೆ ಹೈಕೋರ್ಟ್ ಸೂಚಿಸಿದೆ. ಬೆಂಗಳೂರಿನ ಎ. ವರ್ಗೀಸ್ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಿಜೆ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಕರೊನಾ ಸೋಂಕಿತರಿಗೆ ಕೇವಲ ಅಲೋಪಥಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಯುರ್ವೆದ ಚಿಕಿತ್ಸೆಗೆ ಸರ್ಕಾರಗಳು ಅವಕಾಶ ಕಲ್ಪಿಸಿಲ್ಲ. ಚಿಕಿತ್ಸೆ ವಿಧಾನದ ಆಯ್ಕೆಯು ರೋಗಿಯ ಹಕ್ಕು ಆಗಿರುತ್ತದೆ. ಇದಕ್ಕೆ ಸರ್ಕಾರ ಅಥವಾ ಯಾವುದೇ ಪ್ರಾಧಿಕಾರ ನಿರ್ಬಂಧ ವಿಧಿಸಲು ಸಾಧ್ಯವಿಲ್ಲ. ಆದ್ದರಿಂದ, ಕರೊನಾ ಸೋಂಕಿತರಿಗೆ ಆಯುರ್ವೆದ ಚಿಕಿತ್ಸೆಗೆ ಅವಕಾಶ ಕಲ್ಪಿಸುವಂತೆ ಸರ್ಕಾರಗಳಿಗೆ ನಿರ್ದೇಶಿಸಬೇಕು ಎಂದು ಕೋರಿದರು.
ಅದಕ್ಕೆ ಪ್ರತಿಕ್ರಿಯಿಸಿದ ಪೀಠ, ಕರೊನಾ ಚಿಕಿತ್ಸೆಗೆ ಯಾವುದು ಸೂಕ್ತ ಎಂಬುದನ್ನು ಕೋರ್ಟ್ ನಿರ್ಧರಿಸಲು ಸಾಧ್ಯವಿಲ್ಲ. ಈ ಸಂಬಂಧ ಸರ್ಕಾರಗಳಿಗೆ ಮನವಿ ಸಲ್ಲಿಸಿ ಎಂದು ಅರ್ಜಿದಾರರಿಗೆ ಸೂಚಿಸಿ ಪಿಐಎಲ್ ಇತ್ಯರ್ಥಪಡಿಸಿತು.