More

    ಶೇ.50 ಬೆಡ್ ಕೋವಿಡ್ ಚಿಕಿತ್ಸೆಗೆ: ಖಾಸಗಿ ಆಸ್ಪತ್ರೆಗಳಿಗೆ ಉಡುಪಿ ಡಿಸಿ ಸೂಚನೆ

    ಉಡುಪಿ: ಜಿಲ್ಲೆಯಲ್ಲಿ ಕೋವಿಡ್ -19 ಎರಡನೇ ಅಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಶಿಫಾರಸು ಮಾಡುವ ರೋಗಿಗಳಿಗೆ ಚಿಕಿತ್ಸೆ ನೀಡಲು ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಬೆಡ್ ಮೀಸಲಿಡಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.
    ಕೆಪಿಎಂಇಯಡಿ ನೋಂದಣಿಯಾಗಿರುವ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಸಭೆ ನಡೆಸಿದ ಅವರು, ಎಲ್ಲ ಖಾಸಗಿ ಆಸ್ಪತ್ರೆಗಳು ಐಸಿಯು, ಆಕ್ಸಿಜನ್, ಐಎಫ್‌ಎನ್ ಸಹಿತ ಎಲ್ಲ ವರ್ಗದ ಬೆಡ್‌ಗಳಲ್ಲಿ ಶೇ.50ರಷ್ಟನ್ನು ಕೋವಿಡ್ ಚಿಕಿತ್ಸೆಗೆ ಮೀಸಲಿಡಬೇಕು. ರೋಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದಲ್ಲಿ ಅಥವಾ ಹೊಸ ರೋಗಿ ದಾಖಲಾದಲ್ಲಿ ತಕ್ಷಣ ಸಾಫ್ಟ್‌ವೇರ್‌ನಲ್ಲಿ ದಾಖಲಿಸಬೇಕು ಎಂದರು.
    ರೆಮಿಡಿಸಿವರ್ ಮತ್ತು ಆಕ್ಸಿಜನ್ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ವೈದ್ಯಕೀಯ ತರಗತಿ ಹೊರತುಪಡಿಸಿ ಉಳಿದೆಲ್ಲ ತರಗತಿಗಳಿಗೆ ಸರ್ಕಾರ ನಿರ್ಬಂಧ ವಿಧಿಸಿದ್ದು, ಯಾವುದೇ ಆಸ್ಪತ್ರೆಗಳು ಪ್ಯಾರಾ ಮೆಡಿಕಲ್ ಮತ್ತು ನರ್ಸಿಂಗ್ ತರಗತಿ ನಡೆಸುವಂತಿಲ್ಲ ಎಂದರು.

    ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿಗೆ ಬರುವ ಐಎಲ್‌ಐ ಮತ್ತು ಸಾರಿ ಪ್ರಕರಣದ ರೋಗಿಗಳ ಸ್ವಾಬ್ ಸಂಗ್ರಹಿಸಿ, ಜಿಲ್ಲಾಸ್ಪತ್ರೆಯ ಲ್ಯಾಬ್‌ಗೆ ಕಳುಹಿಸಬೇಕು. ಆಸ್ಪತ್ರೆಗಳ ನಿರ್ಲಕ್ಷೃ ಸಹಿಸುವುದಿಲ್ಲ. ಪ್ರಕರಣಗಳ ಕುರಿತು ವರದಿ ನೀಡದ ಆಸ್ಪತ್ರೆಗಳ ಪರವಾನಗಿ ರದ್ದು ಮತ್ತು ಆಸ್ಪತ್ರೆಗಳ ಅಧಿಕಾರಿಗಳ ವಿರುದ್ಧ ಎಪಿಡಮಿಕ್ ಕಾಯ್ದೆಯನ್ವಯ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಜಿಪಂ ಸಿಇಒ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಎಚ್‌ಒ ಡಾ.ಸುಧೀರ್‌ಚಂದ್ರ ಸೂಡಾ, ಜಿಲ್ಲಾ ಕೋವಿಡ್ ನೋಡೆಲ್ ಅಧಿಕಾರಿ ಡಾ.ಪ್ರಶಾಂತ ಭಟ್ ಉಪಸ್ಥಿತರಿದ್ದರು.

    ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಕರೊನಾ ನೆಗೆಟಿವ್ ಪ್ರಮಾಣಪತ್ರ ಕಡ್ಡಾಯ. ಅದೇ ರೀತಿ ಬೆಂಗಳೂರಿನಲ್ಲೂ ಸೋಂಕು ಹೆಚ್ಚಿರುವುದರಿಂದ ಅಲ್ಲಿಂದ ಬಂದವರೂ ತಮ್ಮ ಮನೆಯವರು ಮತ್ತು ಸಂಬಂಧಿಕರ ಹಿತದೃಷ್ಟಿಯಿಂದ ಇಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಅವರು ಕರೆ ಮಾಡಿದರೆ ಜಿಲ್ಲಾಡಳಿತವೇ ಅವರ ಮನೆಗೆ ತೆರಳಿ ಪರೀಕ್ಷೆ ಮಾಡಿಸುವ ವ್ಯವಸ್ಥೆ ಮಾಡಲಾಗಿದೆ.
    ಜಿ.ಜಗದೀಶ್, ಉಡುಪಿ ಜಿಲ್ಲಾಧಿಕಾರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts