More

    ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಕೇಸ್: ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ

    ಬೆಂಗಳೂರು: ಹಿಂದು ಪದದ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ವಿಚಾರಣೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಆದೇಶ ಹೊರಡಿಸಿದೆ.

    ವಿಧಾನಸಭಾ ಚುನಾವಣೆಗೂ ಮುನ್ನ 2022ರ ನ.6ರಂದು ಬೆಳಗಾವಿಯಲ್ಲಿ ನಡೆದಿದ್ದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸತೀಶ್ ಜಾರಕಿಹೊಳಿ ಅವರು ಹಿಂದು ಹಾಗೂ ಹಿಂದುತ್ವದ ಪದದ ಬಗ್ಗೆ ಮಾತನಾಡಿದ್ದರು. ಹಿಂದು ಎಂಬ ಪದ ಆಶ್ಲೀಲ, ಕೊಳಕು ಎಂಬ ಅರ್ಥ ನೀಡುತ್ತದೆ. ಹಿಂದುತ್ವ ಎಂಬುದು ಪರ್ಷಿಯನ್ ಪದವಾಗಿದ್ದು, ಅದಕ್ಕೂ ಭಾರತಕ್ಕೂ ಏನು ಸಂಬಂಧ? ನಾವು ಹಿಂದುಗಳೆಂದು ಬೀಗುವ ಯುವಕರು ಗೂಗಲ್, ವಿಕಿಪೀಡಿಯಾದಲ್ಲಿ ಹಿಂದು ಎಂಬ ಪದದ ಅರ್ಥ ತಿಳಿದುಕೊಳ್ಳಲು ಪ್ರಯತ್ನಿಸಬೇಕು. ಆ ಪದದ ನೈಜ ಅರ್ಥ ಗೊತ್ತಾದಾಗ, ಅವರಿಗೆ ಹಿಂದುತ್ವ ನಮ್ಮದಲ್ಲ ಎಂದು ತಿಳಿಯುತ್ತದೆ. ಆಗ ಅದನ್ನು ಪೂಜನೀಯ ಭಾವದಿಂದ ನೋಡುವುದನ್ನು ಬಿಡುತ್ತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

    ಇದಾಗಿ 3-4 ದಿನಗಳ ನಂತರ ಕಾಂಗ್ರೆಸ್ ಹೈಕಮಾಂಡ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯದ ಮೇರೆಗೆ ತಮ್ಮ ಹೇಳಿಕೆಯನ್ನು ವಾಪಸ್ ಪಡೆದು, ಸತೀಶ್ ಜಾರಕಿಹೊಳಿ ವಿಷಾದ ವ್ಯಕ್ತಪಡಿಸಿದ್ದರು. ನಂತರ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕರು, ಹಿಂದು ಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ವಕೀಲ ದಿಲೀಪ್ ಕುಮಾರ್ ದೂರು ದಾಖಲಿಸಿ ಅವಹೇಳನಕಾರಿ ಹೇಳಿಕೆ ನೀಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.

    ಇನ್ನು, ಹಿಂದೂ ಪದದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸತೀಶ್ ಜಾರಕಿಹೊಳಿ ಅವರು ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ಗೆಲವು ದಾಖಲಿಸಿ ಈಗ ಲೋಕೋಪಯೋಗಿ ಸಚಿವರೂ ಆಗಿದ್ದಾರೆ. ಆದ್ದರಿಂದ ವಕೀಲ ದಿಲೀಪ್ ಕುಮಾರ್ ಎಂಬುವವರು ನೀಡಿದ್ದ ಖಾಸಗಿ ದೂರಿನ ಪ್ರಕರಣದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಚಿವರ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿಸಲು ಆದೇಶವನ್ನು ನೀಡಿದೆ.

    ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ಐಪಿಸಿ ಸೆಕ್ಷನ್ 153, 500 ಅಡಿಯಲ್ಲಿ ಪ್ರಕರಣ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶಿಸಿದೆ. ಸತೀಶ್ ಜಾರಕಿಹೊಳಿ ವಿರುದ್ಧ ವಕೀಲ ದಿಲೀಪ್ ಕುಮಾರ್ ಖಾಸಗಿ ದೂರು ದಾಖಲಿಸಿದ್ದರು. ಆದರೆ, ಮ್ಯಾಜಿಸ್ಟ್ರೇಟ್ ಕೋರ್ಟ್ ಖಾಸಗಿ ದೂರು ವಜಾ ಮಾಡಿತ್ತು. ನಂತರ, ಈ ಕುರಿತು ವಕೀಲರು ಸೆಷನ್ಸ್ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts