

ಬೆಂಗಳೂರು: ಬರ ಪರಿಹಾರದ ಮೊದಲ ಕಂತಿನ ಹಣವನ್ನು ಶೀಘ್ರವೇ ರೈತರಿಗೆ ತಲುಪಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿರುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ವಿಕಾಸಸೌಧದಲ್ಲಿ ಶುಕ್ರವಾರ ಜರುಗಿದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಉಪ ವಿಭಾಗಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು.
್ರೂಟ್ಸ್‌ನಲ್ಲಿ ಶೇ.75 ರಷ್ಟು ರೈತರ ಸಂಪೂರ್ಣ ಜಮೀನಿನ ಮಾಹಿತಿಯನ್ನು ನವೀಕರಿಸಿದ್ದು ಮುಂದಿನ ಒಂದು ವಾರದಲ್ಲಿ 30 ಲಕ್ಷ ರೈತರಿಗೆ ಮೊದಲ ಕಂತಿನ ಬರ ಪರಿಹಾರದ ಹಣ ಬ್ಯಾಂಕ್ ಖಾತೆಗೆ ತಲುಪಲಿದೆ ಎಂದು ತಿಳಿಸಿದರು. ರೈತರಿಗೆ ಬರ ಹಾಗೂ ಮಳೆಹಾನಿ ಪರಿಹಾರ ತಲುಪಿಸುವ ವಿಚಾರದಲ್ಲೂ ಈ ಹಿಂದೆ ಭಾರೀ ಅವ್ಯವಹಾರಗಳು ನಡೆದಿವೆ. ಜಮೀನು ಯಾರದ್ದೋ ಇದೆ, ಪರಿಹಾರ ಇನ್ಯಾರಿಗೋ ಹೋಗಿರುವ ಹಲವು ಪ್ರಕ್ರರಣಗಳು ನನ್ನ ಗಮನಕ್ಕೆ ಬಂದಿದೆ. ಕಡೂರು ಒಂದೇ ತಾಲೂಕಿನಲ್ಲಿ 6 ಕೋಟಿ ರೂ. ಪರಿಹಾರದ ಹಣ ಅಕ್ರಮ ಎಸಲಾಗಿದೆ. ಹಣ ದುರ್ಬಳಕೆಯಾದವರ ಪಟ್ಟಿ ನನ್ನ ಬಳಿ ಇದೆ. ಹಾನಗಲ್, ಶಿಗ್ಗಾಂವ್‌ನಲ್ಲೂ ಇಂತಹ ಪ್ರಕರಣಗಳು ಕಂಡುಬಂದಿದೆ.
ಗರಿಷ್ಠ 5 ಎಕರೆ ವರೆಗೆ ಪರಿಹಾರ ಕೊಡಬಹುದು. ಆದರೆ 5 ಎಕರೆ ಮೀರಿ ಪರಿಹಾರ ವಿತರಿಸಿದ್ದಾರೆ. ರೈತರಲ್ಲದವರ ಖಾತೆಗೆ 49,999 ಜಮೆ ಆಗಿದೆ. ಅಸಲಿ ರೈತರ ಖಾತೆಗೆ ಅಲ್ಪ ಪ್ರಮಾಣದ ಮೊತ್ತ ಮಾತ್ರ ಜಮೆ ಆಗಿದೆ. ಇದೇ ಕಾರಣಕ್ಕೆ ಈ ಬಾರಿ ರೈತರಿಗೆ ಬರ ಪರಿಹಾರ ನೀಡಲು ಫ್ರೂಟ್ಸ್ ದಾಖಲಾತಿ ಖಡ್ಡಾಯಗೊಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಮಳೆ ಆಶ್ರಿತ ಬೆಳೆ ಬೆಳೆದ ಜಮೀನಿನ ಬದಲು ನೀರಾವರಿ ಎಂದು ತೋರಿಸಿ ಹೆಚ್ಚು ಪರಿಹಾರ ಪಡೆದಿರುವ ಪ್ರಕರಣಗಳೂ ಬೆಳಕಿಗೆ ಬಂದಿವೆ. ಒಂದು ಹೆಸರಿನ ಜಮೀನಿಗೆ ಅದೇ ಹೆಸರಿನ ಇನ್ನೊಬ್ಬರು ಪರಿಹಾರ ಗಿಟ್ಟಿಸಿಕೊಂಡಿದ್ದಾರೆ. ಇವೆಲ್ಲವನ್ನೂ ತನಿಖೆ ಮಾಡಿಸುತ್ತಿರುವುದಾಗಿ ಹೇಳಿದರು.
ಈ ಹಿಂದೆ ಫ್ರೂಟ್ಸ್ ಡಾಟಾಬೇಸ್‌ನಲ್ಲಿ 7.7 ಲಕ್ಷ ರೈತರ ಮಾಹಿತಿಯೇ ಇರಲಿಲ್ಲ. ಇದೀಗ ಹೊಸದಾಗಿ ಸೇರಿಸಲಾಗಿದೆ. 34 ಲಕ್ಷ ರೈತರ ಜಮೀನ ಮಾಹಿತಿಯನ್ನು ಈ ತಂತ್ರಾಂಶದಲ್ಲಿ ದಾಖಲು ಮಾಡಲಾಗಿದೆ. ಬಿಟ್ಟುಹೋಗಿರುವ ಅರ್ಹ ರೈತರ ಮಾಹಿತಿಯನ್ನು ಮತ್ತೆ ದಾಖಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಳೆದ 15 ದಿನಗಳಿಂದ ನಮ್ಮ ಅಧಿಕಾರಿಗಳು ರಜೆ ತೆಗೆದುಕೊಳ್ಳದೆ ಕೆಲಸ ಮಾಡಿದ್ದು, ರೈತರ ಹಣ ದುರುಪಯೋಗವಾಗದಂತೆ ಅವರಿಗೆ ತಲುಪಿಸಲಾಗುವುದು. ಈಗಾಗಲೇ ಈ ಪ್ರಕ್ರಿಯೆ ಆರಂಭವಾಗಿದ್ದು, 15 ಲಕ್ಷಕ್ಕೂ ಅಧಿಕ ರೈತರಿಗೆ ಈಗಾಗಲೇ ಹಣ ತಲುಪಿಸಲಾಗಿದೆ. ಮುಂದಿನ ವಾರದೊಳಗೆ 30 ಲಕ್ಷ ರೈತರಿಗೆ ಪರಿಹಾರದ ಹಣ ತಲುಪಲಿದೆ ಎಂದರು.
ಬರ ಘೋಷಿಸಿ ನಾಲ್ಕು ತಿಂಗಳಾದರೂ ಕೇಂದ್ರ ಸರ್ಕಾರದಿಂದ ಬರ ಪರಿಹಾರದ ಹಣ ಇನ್ನೂ ಬಂದಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಬೇಸರ ವ್ಯಕ್ತಪಡಿಸಿದರು.
ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಎನ್‌ಡಿಆರ್‌ಎ್ ಮಾರ್ಗಸೂಚಿ ಅನ್ವಯ 18,177.44 ಕೋಟಿ ರೂ. ಪರಿಹಾರ ನೀಡುವಂತೆ ಸೆಪ್ಟೆಂಬರ್ 22 ರಂದೇ ಕೇಂದ್ರ ಕೃಷಿ ಸಚಿವಾಲಯಕ್ಕೆ ಮನವಿ ಸಲ್ಲಿಸಲಾಗಿದೆ. ಭಾರತ ಸರ್ಕಾರದ ಬರ ಅಧ್ಯಯನ ತಂಡ ಅಕ್ಟೋಬರ್ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನೂ ಸಲ್ಲಿಸಿದೆ. ಆದರೂ ಕೇಂದ್ರ ಸರ್ಕಾರ ಈ ವರೆಗೆ ನಮ್ಮ ಮನವಿಯ ಮೇಲೆ ಸಭೆ ನಡೆಸಿ ತೀರ್ಮಾನ ತೆಗೆದುಕೊಂಡಿಲ್ಲ. ಸಭೆ ನಡೆಸುವುದಾಗಿ ಅಮಿತ್ ಶಾ ಹೇಳಿದ್ದರೂ ಉಪಯೋಗವಾಗಿಲ್ಲ. ಹೀಗಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪರಿಣಾಮ ರಾಜ್ಯ ಸರ್ಕಾರವೇ ಮೊದಲ ಕಂತಿನಲ್ಲಿ 2,000 ರೂ. ನೀಡಲು ಮುಂದಾಗಿದೆ ಎಂದು ತಿಳಿಸಿದರು.
ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
ಪ್ರಸ್ತುತ 36 ಗ್ರಾಮಗಳಲ್ಲಿ ಮಾತ್ರ ನೀರಿನ ಕೊರತೆ ಇದೆ. ಈ ಎಲ್ಲ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. 139 ಗ್ರಾಮಗಳಿಗೆ ಬೋರ್‌ವೆಲ್ ಮೂಲಕ ನೀರು ಪೂರೈಸಲಾಗುತ್ತಿದೆ. ನೀರಿನ ಸಮಸ್ಯೆ ಕಂಡುಬಂದಲ್ಲಿ ಖಾಸಗಿ ಬೋರ್‌ವೆಲ್ ಮೂಲಕ ನೀರು ಪೂರೈಸಲು ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ 1186 ವಾರ್ಡ್‌ಗಳಲ್ಲಿ ನೀರಿನ ಸಮಸ್ಯೆ ಉಲ್ಬವಣಿಸುವ ಸಾಧ್ಯತೆ ಇದೆ. ಹೀಗಾಗಿ 2404 ಖಾಸಗಿ ಬೋರ್‌ವೆಲ್ ಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ಚಿತ್ರದುರ್ಗದ ಕೆಲವು ಭಾಗಗಳನ್ನು ಹೊರತುಪಡಿಸಿ ರಾಜ್ಯದ ಬೇರೆಲ್ಲೂ ಮೇವಿನ ಕೊರತೆ ಇಲ್ಲ. ಈಗಾಗಲೇ 7 ಲಕ್ಷ ಮೇವಿನ ಬಿತ್ತನೆ ಬೀಜದ ಕಿಟ್ ಉಚಿತವಾಗಿ ವಿತರಿಸಲಾಗಿದೆ. ಫೆಬ್ರವರಿಯಲ್ಲಿ ಮತ್ತೊಮ್ಮೆ ಕಿಟ್ ನೀಡಲಿದ್ದೇವೆ. 16 ಜಿಲ್ಲೆಗಳಲ್ಲಿ ಮೇವು ಖರೀದಿಗೆ ಟೆಂಡರ್ ನಡೆದಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.
ಎಸಿ-ತಹಸೀಲ್ದಾರ್ ನ್ಯಾಯಾಲಯಗಳ ಪ್ರಗತಿ
ಮೂರು ತಿಂಗಳಲ್ಲಿ ತಕರಾರು ಪ್ರಕರಣಗಳ ಇತ್ಯರ್ಥ ವೇಗ ಪಡೆದುಕೊಂಡಿದೆ ಉಪ ವಿಭಾಗಾಧಿಕಾರಿ (ಎಸಿ) ನ್ಯಾಯಾಲಯ ಗಳಲ್ಲಿ ಐದು ವರ್ಷಕ್ಕೆ ಮೇಲ್ಪಟ್ಟ 59,800 ಪ್ರಕರಣಗಳು ಇದ್ದವು. ಆದರೆ, ಕಳೆದ ಮೂರೇ ತಿಂಗಳಲ್ಲಿ 33,000 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ತಹಸೀಲ್ದಾರ್ ನ್ಯಾಯಾಲಯದಲ್ಲಿ 2215 ಪ್ರಕರಣಗಳಿದ್ದು, ಈ ಸಂಖ್ಯೆಯನ್ನು ಇದೀಗ ಕೇವಲ 170ಕ್ಕೆ ಇಳಿಸಲಾಗಿದೆ. ರೈತರು ತಕರಾರು ಅರ್ಜಿಗಳ ಇತ್ಯರ್ಥಕ್ಕಾಗಿ ದಿನಂಪ್ರತಿ ಸರ್ಕಾರಿ ಕಚೇರಿಗಳಿಗೆ ಅಲೆಯುವುದಕ್ಕೆ ಬ್ರೇಕ್ ಹಾಕಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.