

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎದುರಿಸುತ್ತಿರುವ ಕಾನೂನು ಸಂಕಷ್ಟದಿಂದ ಸದ್ಯಕ್ಕೆ ನಿರಾಳರಾಗಿದ್ದಾರೆ. ಹೈಕೋರ್ಟ್ನಲ್ಲಿ ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಸಿಬಿಐ ತನಿಖೆಗೆ ಅನುಮತಿ ನೀಡಿತ್ತು. ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಏಕಸದಸ್ಯ ಪೀಠವು ಡಿ.ಕೆ.ಶಿವಕುಮಾರ್ ಅರ್ಜಿಯನ್ನು ವಜಾಗೊಳಿಸಿತ್ತು.
ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಮೇಲ್ಮನವಿ ಸಲ್ಲಿಸಿದ್ದರು. ಈ ಸಂಬಂಧ ಇಂದು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆದಿತ್ತು. ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ತಡೆ ನೀಡಿದ ವಿಭಾಗೀಯ ಪೀಠವು ಸಿಬಿಐಗೆ ನೋಟಿಸ್ ಜಾರಿಗೊಳಿಸಿದ್ದು, ವಿಚಾರಣೆಯನ್ನು ಜುಲೈ 17ಕ್ಕೆ ಮುಂದೂಡಿದೆ. ಹೀಗಾಗಿ ಡಿ.ಕೆ.ಶಿವಕುಮಾರ್ ಈ ಪ್ರಕರಣದಲ್ಲಿ ಸದ್ಯಕ್ಕೆ ನಿರಾಳರಾದಂತಾಗಿದೆ.