ಸೆಂಟ್ರಲ್ ಜೈಲ್​ಗೆ ದರ್ಶನ್​ ಎಂಟ್ರಿ! 'ದಾಸ'ನಿಗೆ ಶುರುವಾಯ್ತು ಬಳ್ಳಾರಿ ಸೆರೆವಾಸ

ವಿಜಯವಾಣಿ (41)
Published on

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ನಟ ದರ್ಶನ್​ಗೆ ರಾಜ್ಯಾತಿಥ್ಯ ಕೊಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದ ಬೆನ್ನಲ್ಲೇ ದರ್ಶನ್​ ಮತ್ತು ಅವರ ಸಹಚರರನ್ನುಇತರೆ ಜಿಲ್ಲೆಗಳ ಜೈಲಿಗೆ ಸ್ಥಳಾಂತರ ಮಾಡಲಾಗುತ್ತಿದೆ. ಈ ಮಧ್ಯೆ ಆರೋಪಿ ದರ್ಶನ್​ರನ್ನು ಬಿಗಿಭದ್ರತೆಯಲ್ಲಿ ಪೊಲೀಸರು ಬಳ್ಳಾರಿ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ.

ಪೊಲೀಸ್ ವಾಹನದಲ್ಲಿ ಬಳ್ಳಾರಿ ಜೈಲಿಗೆ ಕರೆತಂದ ಪೊಲೀಸರು, ಜೈಲಿನ ಬ್ಯಾರೆಕ್​ವೊಳಗೆ ಆರೋಪಿ ದರ್ಶನ್​ರನ್ನು ಕರೆದೊಯ್ದಿದ್ದಾರೆ.

ಕಾರಾಗೃಹದ ಒಳ ಭಾಗದಲ್ಲಿ ಸೆಕ್ಯೂರಿಟಿ ಕೊಠಡಿಯಲ್ಲಿ ಸಹಿ ಮಾಡಿ ನಂತರ ದಾಸನ ಎಂಟ್ರಿಯಾಗಿದೆ. ದರ್ಶನ್ ತಂದಿದ್ದ ಎರಡು ಬ್ಯಾಗ್ ಪರಿಶೀಲನೆ ಮಾಡಿ ಒಳಗೆ ಕಳುಹಿಸಿದ್ದಾರೆ. ಕಪ್ಪು ಬಣ್ಣದ ಟಿ-ಶರ್ಟ್, ಕೂಲಿಂಗ್​ ಗ್ಲಾಸ್​ ಜತೆ ಹೊಸ ಲುಕ್​ನಲ್ಲಿ 'ಸಾರಥಿ' ಸೆಂಟ್ರಲ್ ಜೈಲ್​ಗೆ ಪ್ರವೇಶಿಸಿದ್ದಾರೆ.

ಏನಿದು ಪ್ರಕರಣ?

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಮತ್ತು ಗೆಳತಿ ಪವಿತ್ರಾ ಗೌಡ ಅರೆಸ್ಟ್​ ಆಗಿರುವ ಸುದ್ದಿ ರಾಜ್ಯದೆಲ್ಲೆಡೆ ಭಾರಿ ಚರ್ಚೆಯಾಗುತ್ತಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದಕ್ಕೆ ರೇಣುಕಸ್ವಾಮಿಯ ಕೊಲೆ ನಡೆದಿದೆ ಎನ್ನಲಾಗಿದೆ. ಇದರಲ್ಲಿ ದರ್ಶನ್​ ಕೈವಾಡ ಇದೆ. ದರ್ಶನ್​ ಸೂಚನೆ ಕೊಟ್ಟಿದ್ದಕ್ಕೆ ಹಲ್ಲೆ ಮಾಡಿದೆವು ಎಂದು ಬಂಧಿತ ಆರೋಪಿಗಳು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್​ರನ್ನು ಬಂಧಿಸಲಾಗಿದೆ. ಫೆಬ್ರವರಿ 27ರಿಂದ ದರ್ಶನ್​ ಗೆಳತಿ ಪವಿತ್ರಾ ಗೌಡಗೆ ರೇಣುಕಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್‌ ಬ್ಲಾಕ್‌ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್‌ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್​ಗೆ ಹೇಳಿದ್ದರು. ಈ ವಿಚಾರ ದರ್ಶನ್​ಗೆ ತಿಳಿದಿದೆ. ರೇಣುಕ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್​ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​, ಹಲ್ಲೆಯಿಂದ ರೇಣುಕಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.

ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ. ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್​ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net