More

    ವಕೀಲರು ಸಾಮಾಜಿಕ ಶಿಲ್ಪಿಗಳು  

    ದಾವಣಗೆರೆ : ವಕೀಲರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಆಶಯ ಎತ್ತಿ ಹಿಡಿಯುವ ಮೂಲಕ ಸಾಮಾಜಿಕ ಶಿಲ್ಪಿಗಳಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಹೇಳಿದರು.
     ನಗರದ ಜಿಲ್ಲಾ ವಕೀಲರ ಸಂಘದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ನೂತನ ವರ್ಷಾಚರಣೆ ಕಾರ್ಯಕ್ರಮದಲ್ಲಿ ಪ್ರಶಂಸನಾ ಪತ್ರ ನೀಡಿ ಮಾತನಾಡಿದರು.
     ವಕೀಲರ ಸಹಕಾರದಿಂದ ಸಮಾಜದಲ್ಲಿ ತುಳಿತಕ್ಕೆ ಒಳಗಾದ ಕೆಳಸ್ತರದ ಮತ್ತು ನ್ಯಾಯವಂಚಿತ ಜನರಿಗೆ ನ್ಯಾಯಾಂಗವು ಪರಿಣಾಮಕಾರಿಯಾಗಿ ನ್ಯಾಯ ವಿತರಣೆ ಮಾಡಲು ಸಾಧ್ಯವಾಗಿದೆ ಎಂದು ತಿಳಿಸಿದರು.
     ಕಳೆದ ಲೋಕ ಅದಾಲತ್‌ನಲ್ಲಿ ಅತಿ ಹೆಚ್ಚು ಪ್ರಕರಣ ಇತ್ಯರ್ಥಪಡಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯವು ಜಿಲ್ಲಾ ವಕೀಲರ ಸಂಘಕ್ಕೆ ಪ್ರಶಂಸನಾ ಪತ್ರ ನೀಡಿದ್ದು, ವಕೀಲರ ಸಹಕಾರದಿಂದ 2ನೇ ಬಾರಿ ಲಭಿಸಿರುವುದು ಹೆಮ್ಮೆಯ ವಿಚಾರ ಎಂದರು.
     ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿಜಯಾನಂದ, ನ್ಯಾಯ ವಿತರಣೆಯಲ್ಲಿ ವಕೀಲರ ಸಂಘದ ಸದಸ್ಯರು ನೀಡುತ್ತಿರುವ ಸಹಕಾರ ಶ್ಲಾಘನೀಯ. ನ್ಯಾಯಾಂಗವು ಇಂದು ಶಾಸಕಾಂಗ ಹಾಗೂ ಕಾರ್ಯಾಂಗದ ಕಾವಲಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಹೇಳಿದರು.
     ವಕೀಲರ ಸಂಘದ ಜಿಲ್ಲಾಧ್ಯಕ್ಷ ಎಲ್.ಎಚ್. ಅರುಣ್‌ಕುಮಾರ್ ಮಾತನಾಡಿ, ಕರ್ನಾಟಕ ಉಚ್ಛ ನ್ಯಾಯಾಲಯವು 2ನೇ ಬಾರಿಗೆ ಪ್ರಶಂಸನಾ ಪತ್ರ ನೀಡಿರುವುದು ಇಡೀ ವಕೀಲ ಸಮುದಾಯಕ್ಕೆ ಸಂದ ಗೌರವ ಎಂದು ಸಂತಸ ವ್ಯಕ್ತಪಡಿಸಿದರು.
     ಮಕ್ಕಳ ಸ್ನೇಹಿ ನ್ಯಾಯಾಲಯದ ನ್ಯಾಯಾಧೀಶ ಎನ್.ಶ್ರೀಪಾದ್, ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ದಶರಥ, 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಪ್ರವೀಣ್‌ಕುಮಾರ್, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಶಿವಪ್ಪ ಜಿ. ಸಲಗರೆ  ಇದ್ದರು.
     ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ್, ವಕೀಲರಾದ ಡಿ. ವಿಜಯಪ್ರಕಾಶ್, ಕೆ.ಎಂ. ಮಲ್ಲಿಕಾರ್ಜುನ, ಎನ್.ಎಂ. ಆಂಜನೇಯ, ಲೋಕಿಕೆರೆ ಸಿದ್ದಪ್ಪ ಮಾತನಾಡಿದರು. ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಜಿ.ಕೆ. ಬಸವರಾಜ್ ಗೋಪನಾಳು, ಕಾರ್ಯದರ್ಶಿ ಎಸ್. ಬಸವರಾಜ್, ಸಹ ಕಾರ್ಯದರ್ಶಿ ಎ.ಎಸ್. ಮಂಜುನಾಥ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts