More

    ಮಹಿಳಾ ಸಬಲೀಕರಣಕ್ಕೆ ಕಾಂಗ್ರೆಸ್ ಆದ್ಯತೆ

    ದಾವಣಗೆರೆ : ಕಾಂಗ್ರೆಸ್ ಪಕ್ಷ ಮೊದಲ ಬಾರಿಗೆ ಮಹಿಳೆಯರಿಗೆ ಎಲ್ಲ ಕ್ಷೇತ್ರದಲ್ಲೂ ಹೆಚ್ಚಿನ ಅವಕಾಶ ಕಲ್ಪಿಸಿ ಅವರ ಸಬಲೀಕರಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
     ನವೋದಯ ಚಾರಿಟಬಲ್ ಟ್ರಸ್ಟ್ ವತಿಯಿಂದ ನಗರದ ಹದಡಿ ರಸ್ತೆಯಲ್ಲಿರುವ ಶಾಮನೂರು ಪಾರ್ವತಮ್ಮ ಶಿವಶಂಕರಪ್ಪ ಸಮುದಾಯ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬೆಂಬಲ ಸೂಚಿಸುವ ಕಾರ್ಯಕ್ರಮದಲ್ಲಿ ಮಾತನಾಡಿ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಶೇ. 50 ರಷ್ಟು ಮಹಿಳೆಯರಿಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.
     ಕಾಂಗ್ರೆಸ್ ಪಕ್ಷ ಮಹಿಳಾ ಸಬಲೀಕರಣಕ್ಕೆ ಅನೇಕ ಕಾರ‌್ಯಕ್ರಮಗಳನ್ನು ರೂಪಿಸುತ್ತಾ ಬಂದಿದ್ದು, ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಮಹಿಳೆಯರಿಗೆ ನೀಡಿದ ಆಶ್ವಾಸನೆಯನ್ನು ಈಡೇರಿಸಿದೆ. ಗೃಹಲಕ್ಷ್ಮೀ, ಶಕ್ತಿ ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೊಳಿಸಲಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಸುಮಾರು 1117 ಕೋಟಿಯಷ್ಟು ಹಣವನ್ನು ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.
     ಮತ್ತೆ ಕೇಂದ್ರದಲ್ಲಿ ನಿಮ್ಮ ಸಹಕಾರದಿಂದ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮೀ ಯೋಜನೆ ಮೂಲಕ ವಾರ್ಷಿಕ 1 ಲಕ್ಷ, ಕೇಂದ್ರ ಸರ್ಕಾರದ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಮೀಸಲು ಸೇರಿ 5 ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ಹೇಳಿದರು.
     ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮಾತನಾಡಿ ಕಾಂಗ್ರೆಸ್ ಪಕ್ಷ ಮಹಿಳೆಯರ ಸಬಲೀಕರಣಕ್ಕೆ ಒತ್ತು ನೀಡಿದ್ದು, ಇಂದು ರಾಜ್ಯದಲ್ಲಿ 6 ಜನ ಮಹಿಳೆಯರಿಗೆ ಅಭ್ಯರ್ಥಿಯನ್ನಾಗಿಸಿದೆ ಎಂದು ತಿಳಿಸಿದರು.
     ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ 6 ಮಹಿಳೆಯರು ಗೆಲುವು ಸಾಧಿಸಿ ರಾಜ್ಯದ ಮಹಿಳೆಯರ ಧ್ವನಿಯಾಗಿ ಕೆಲಸ ಮಾಡುವರು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
     ಡಿಸಿಸಿ ಬ್ಯಾಂಕ್ ನಿರ್ದೇಶಕ ಜೆ.ಆರ್. ಷಣ್ಮುಖಪ್ಪ ಮಾತನಾಡಿ, ಪ್ರಭಾ ಮಲ್ಲಿಕಾರ್ಜುನ್‌ಗೆ ಬೆಂಬಲ ಸೂಚಿಸಿ ಸುಮಾರು 6-7 ಸಾವಿರ ಜನ ಸೇರಿದ್ದಾರೆ. ಈ ಬಾರಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ಅಭಿಪ್ರಾಯಪಟ್ಟರು.
     ಮಹಿಳಾ ಅಭಿವೃದ್ಧಿ, ದಾವಣಗೆರೆ ಅಭಿವೃದ್ಧಿಗೆ ಪ್ರಭಾ ಮಲ್ಲಿಕಾರ್ಜುನ್ ಬೇಕಿದ್ದು, ಈ ಬಾರಿ ಅವರನ್ನು ಗೆಲ್ಲಿಸುವ ಮೂಲಕ ತ್ರಿಬಲ್ ಇಂಜಿನ್ ಸರ್ಕಾರ ರಚಿಸುತ್ತೇವೆ. ಎಸ್.ಎಸ್. ಮಲ್ಲಿಕಾರ್ಜುನ್ ಅವರ ಅಭಿವೃದ್ಧಿ ಕೆಲಸಗಳು ಕೈ ಹಿಡಿಯಲಿದ್ದು, ಜನತೆ ಕಾಂಗ್ರೆಸ್‌ಗೆ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.
     ಕಿರುವಾಡಿ ಗಿರಿಜಮ್ಮ ಅಧ್ಯಕ್ಷತೆ ವಹಿಸಿದ್ದರು. ಚಿಕ್ಕಮಗಳೂರು ಶಾಸಕ ಡಿ.ಸಿ.ತಮ್ಮಣ್ಣ, ಕಾಂಗ್ರೆಸ್ ನಾಯಕರಾದ ಅಣಬೇರು ರಾಜಣ್ಣ, ಐಗೂರು ಚಂದ್ರಶೇಖರ್, ಕಲಪನಹಳ್ಳಿ ಸೋಮಶೇಖರಪ್ಪ, ಸಿಬ್ಬಂದಿ ವೀಣಾ, ಮಮತಾ, ರೇಣುಕಾ, ಬಸಮ್ಮ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts