More

  ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಯಶಸ್ವಿ

  ದಾವಣಗೆರೆ : ಗಣರಾಜ್ಯೋತ್ಸವದ 75ನೇ ವರ್ಷಾಚರಣೆ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಿರುವ ಸಂವಿಧಾನ ಜಾಗೃತಿ ಜಾಥಾ ಜಿಲ್ಲೆಯಲ್ಲಿ ಯಶಸ್ವಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಹೇಳಿದರು.
   ಇಲ್ಲಿನ ಆಫೀಸರ್ಸ್ ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿವಿಧ ಚಟುವಟಿಕೆಗಳ ಮೂಲಕ ಹೆಚ್ಚು ಜನರನ್ನು ತಲುಪಿ, ಸಂವಿಧಾನದ ಆಶಯ ಮತ್ತು ಮೌಲ್ಯಗಳ ಕುರಿತು ಅರಿವು ನೀಡಲಾಗಿದೆ ಎಂದು ತಿಳಿಸಿದರು.
   ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಜ. 26ರಂದು ಜಾಥಾಕ್ಕೆ ಚಾಲನೆ ನೀಡಿದ್ದರು. ಜಿಲ್ಲೆಯ 194 ಗ್ರಾಮ ಪಂಚಾಯಿತಿ, 7 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜಾಥಾ ಸಂಚರಿಸಿದ್ದು ಜನರಿಂದ ಅತ್ಯುತ್ತಮ ಸ್ಪಂದನೆ ಸಿಕ್ಕಿದೆ ಎಂದು ಹೇಳಿದರು.
   ಜಾಥಾ ವೇಳೆ ಸೈಕಲ್ ರ‌್ಯಾಲಿ, ಬೈಕ್ ರ‌್ಯಾಲಿ, ಕ್ಯಾಂಡಲ್ ಮಾರ್ಚಿಂಗ್, ಎತ್ತಿನಗಾಡಿ ಮೆರವಣಿಗೆ, ರಂಗೋಲಿ ಸ್ಪರ್ಧೆ ಸೇರಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಲಾಗಿತ್ತು. ಸರ್ಕಾರಿ ಸಮಾರಂಭ, ಸಭೆಗಳಲ್ಲಿ ಸಂವಿಧಾನದ ಬಗ್ಗೆ ಅರಿವು ಮೂಡಿಸಲು ಪ್ರಸ್ತಾವನೆ ಓದುವ ಮೂಲಕ ಪ್ರತಿಜ್ಞೆ ಮಾಡಲಾಗಿದೆ. ವಿದ್ಯಾರ್ಥಿಗಳು, ಸ್ವ ಸಹಾಯ ಸಂಘದ ಮಹಿಳೆಯರು, ರೈತರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಹಿರಿಯ ನಾಗರಿಕರು ಜಾಥಾದಲ್ಲಿ ಭಾಗವಹಿಸಿದ್ದಾರೆ ಎಂದರು.
   ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಟ್ವಿಟರ್, ಇನ್‌ಸ್ಟ್ರಾಗ್ರಾಂ, ಯೂಟ್ಯೂಬ್ ಮೂಲಕ ಪ್ರಚಾರ ಕೈಗೊಂಡಿದ್ದು ಒಟ್ಟು 36 ಲಕ್ಷ ಲೈಕ್‌ಗಳು ಬಂದಿವೆ. ಜಾಥಾ ಮಾರ್ಚ್ 7 ರಂದು ಬೆಂಗಳೂರಿನಲ್ಲಿ ಮುಕ್ತಾಯವಾಗಲಿದೆ ಎಂದು ತಿಳಿಸಿದರು.
   …
   
   (((ಬಾಕ್ಸ್)))
   ಖಾಸಗಿ ಕೊಳವೆಬಾವಿ ಬಾಡಿಗೆ
   ಮಳೆಯ ಕೊರತೆಯಿಂದ ಅಂತರ್ಜಲ ಮಟ್ಟ ಕುಸಿತವಾದ ಹಿನ್ನೆಲೆಯಲ್ಲಿ 19 ಗ್ರಾಮಗಳಲ್ಲಿ ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆಯಲಾಗಿದೆ ಎಂದು ಡಾ. ಎಂ.ವಿ. ವೆಂಕಟೇಶ್ ತಿಳಿಸಿದರು.
   ಕಳೆದ ಆಗಸ್ಟ್ ತಿಂಗಳಲ್ಲಿ ಶೇ. 90 ರಷ್ಟು ಮಳೆಯ ಕೊರತೆಯಾಗಿತ್ತು. 100 ವರ್ಷಗಳ ಇತಿಹಾಸದಲ್ಲಿ ಇದು ಅತ್ಯಂತ ಕಡಿಮೆ ಪ್ರಮಾಣವಾಗಿತ್ತು. ಅದರ ಪರಿಣಾಮವನ್ನು ಈಗ ಎದುರಿಸಬೇಕಾಗಿದೆ ಎಂದು ಹೇಳಿದರು.
   ಜಿಲ್ಲೆಯಲ್ಲಿ 126 ಗ್ರಾಮಗಳನ್ನು ಸಮಸ್ಯಾತ್ಮಕವೆಂದು ಗುರುತಿಸಲಾಗಿದೆ. ಎಲ್ಲಿಯಾದರೂ ಅಭಾವ ಸೃಷ್ಟಿಯಾದರೆ 24 ಗಂಟೆಯೊಳಗೆ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುವುದು. ತೀರಾ ಅನಿವಾರ್ಯವಾದರೆ ಟ್ಯಾಂಕರ್‌ಗಳ ಮೊರೆ ಹೋಗಲಾಗುವುದು ಎಂದು ತಿಳಿಸಿದರು.
   ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಪೂರೈಕೆಯಾಗುತ್ತಿರುವ ಗ್ರಾಮಗಳಿಗೆ ಸಮಸ್ಯೆ ಇಲ್ಲ. ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಹಾಗೂ ಕಾಲುವೆಗಳಿಗೆ ನೀರು ಬಿಡಲಾಗಿದೆ. ಕಾಲುವೆ ಮೂಲಕ ಸೂಳೆಕೆರೆಗೆ ನೀರು ಹರಿಸಲಾಗಿದೆ ಎಂದರು.
   ಅಚ್ಚುಕಟ್ಟಿನ ಕೊನೆಯ ಭಾಗದ ರೈತರಿಗೂ ನೀರು ತಲುಪಿಸುವ ಉದ್ದೇಶದಿಂದ, ನಾಲೆಗೆ ಅಕ್ರಮವಾಗಿ ಅಳವಡಿಸಲಾಗಿದ್ದ ಪಂಪ್‌ಸೆಟ್ಗಳ ತೆರವಿಗೆ ಕ್ರಮ ಕೈಗೊಳ್ಳಲಾಗಿದೆ. ಅಗತ್ಯ ಇರುವೆಡೆ 144ನೇ ಕಲಮಿನ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲು ತಹಸೀಲ್ದಾರರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
   ಮಾರ್ಚ್ 3ರಿಂದ ಪಲ್ಸ್ ಪೋಲಿಯೋ ಅಭಿಯಾನ ನಡೆಸಲಾಗುವುದು. 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು. ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ್ ಇದ್ದರು.
   …
   
   (((ಕೋಟ್)))
   ಸಂವಿಧಾನ ಜಾಗೃತಿ ಜಾಥಾ ಗ್ರಾಮಾಂತರ ಪ್ರದೇಶದಲ್ಲಿ ಪರಿಣಾಮಕಾರಿಯಾಗಿ ನಡೆದಿದೆ. 194 ಗ್ರಾಮ ಪಂಚಾಯಿತಿಗಳ ಕೇಂದ್ರ ಸ್ಥಾನಗಳಲ್ಲಿ ಅದ್ದೂರಿಯಾಗಿ ಸ್ವಾಗತಿಸಿ ಜಾಗೃತಿ ಮೂಡಿಸಲಾಗಿದೆ. ಬೇಸಿಗೆ ಹಿನ್ನೆಲೆಯಲ್ಲಿ ಈಗಾಗಲೇ 19 ಗ್ರಾಮಗಳಲ್ಲಿ ಖಾಸಗಿ ಬೋರ್‌ವೆಲ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸಮಸ್ಯೆಯಾಗಬಹುದಾದ 18 ಗ್ರಾಮಗಳಲ್ಲೂ ಅದೇ ವ್ಯವಸ್ಥೆ ಕೈಗೊಳ್ಳಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
    ಸುರೇಶ್ ಬಿ. ಇಟ್ನಾಳ್, ಜಿ.ಪಂ. ಸಿಇಒ
   …

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts