More

    ಯೋಜನೆ ದುರ್ಬಳಕೆಯಾದರೆ ಕ್ರಮ

    ದಾವಣಗೆರೆ : ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಯೋಜನೆಗೆ ಮೀಸಲಿರಿಸಿದ ಅನುದಾನವನ್ನು ಇಲಾಖೆಗಳು ಸಮರ್ಪಕ ಬಳಕೆ ಮಾಡಬೇಕು. ಅನ್ಯ ಉದ್ದೇಶಕ್ಕೆ ಬಳಕೆ ಮಾಡಿದಲ್ಲಿ ಅಂತಹ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಎಚ್ಚರಿಸಿದರು.
     ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಅನುಸೂಚಿತ ಜಾತಿ ಹಾಗೂ ಬುಡಕಟ್ಟು ಯೋಜನೆಯಡಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
     ಪ್ರಸಕ್ತ ಸಾಲಿನಲ್ಲಿ ಇಲಾಖಾವಾರು ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗಿದ್ದು, ಜಿಲ್ಲಾ ಮಟ್ಟದಲ್ಲಿ ಭೌತಿಕ ಮತ್ತು ಆರ್ಥಿಕ ಸಾಧನೆ ಮಾಡಬೇಕು ಹಾಗೂ ನಿಗದಿಪಡಿಸಿದ ಅನುದಾನ ನಿಗದಿತ ಅವಧಿಯಲ್ಲಿ ಅರ್ಹ ಫಲಾನುಭವಗಳಿಗೆ ತಲುಪಿಸಬೇಕು ಎಂದು ತಿಳಿಸಿದರು.
     ಆಯಾ ತಿಂಗಳು ನಿಗದಿಪಡಿಸಿದ ಗುರಿಗಿಂತ ಹೆಚ್ಚು ಸಾಧನೆ ಮಾಡಬೇಕು. ತ್ವರಿತ ಆರ್ಥಿಕ ಹಾಗೂ ಭೌತಿಕ ಪ್ರಗತಿ ಸಾಧನೆ ಮತ್ತು ಸೌಲಭ್ಯ ಕಲ್ಪಿಸುವುದು ಮಾತ್ರವಲ್ಲದೆ ಅದರಿಂದಾದ ಆರ್ಥಿಕ ಅಭಿವೃದ್ಧಿ ಪರಿಶೀಲಿಸಬೇಕು. ಎಸ್.ಸಿ.ಪಿ. ಹಾಗೂ ಟಿ.ಎಸ್.ಪಿ ಯೋಜನೆಗಳಡಿ ನಿರ್ಮಾಣವಾದ ರಸ್ತೆಗಳು 30 ವರ್ಷ ಬಾಳಿಕೆ ಬರುವಂತಾಗಬೇಕು. ಈ ಅವಧಿಯೊಳಗೆ ಕಳಪೆ ಕಾಮಗಾರಿ ಸಾಬೀತಾದರೆ ಅಂತಹ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
     ಜಗಳೂರು ತಾಲೂಕಿನಲ್ಲಿ ಹೆಚ್ಚಾಗಿ ಸ್ಮಶಾನಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದು, ಜಾಗ  ಖರೀದಿ ಮಾಡಲು ಕ್ರಮ ಕೈಗೊಳ್ಳಬೇಕು. ಸಾಂತ್ವನ ಕೇಂದ್ರಗಳಲ್ಲಿ ಶೋಷಣೆಗೆ ಒಳಪಟ್ಟ ಮಹಿಳೆಯರು ಮಾನಸಿಕ, ಆರ್ಥಿಕವಾಗಿ ಸಬಲರಾಗುವ ನಿಟ್ಟಿನಲ್ಲಿ ವಿವಿಧ ಉತ್ಪನ್ನ ಚಟುವಟಿಕೆ ಕೈಗೊಳ್ಳಬೇಕು, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಅರ್ಜಿ ಸಲ್ಲಿಸುವಿಕೆಯಲ್ಲಿನ ತಾಂತ್ರಿಕ ಸಮಸ್ಯೆ ಬಗೆಹರಿಸಿ ಸೌಲಭ್ಯ ಒದಗಿಸಬೇಕು ಮತ್ತು ಸಖಿ ಕೇಂದ್ರಗಳಿಗೆ ಅಧಿಕಾರಿಗಳು 15 ದಿನಗಳಿಗೊಮ್ಮೆ ಕಡ್ಡಾಯ ಭೇಟಿ ನೀಡಬೇಕು ಎಂದು ಸೂಚಿಸಿದರು.
     ಜಿಪಂ ಉಪ ಕಾರ್ಯದರ್ಶಿ ಕೃಷ್ಣ ನಾಯ್ಕ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಪಿ. ರಮೇಶ್, ಡಿ.ಡಿ.ಪಿ.ಐ ಕೊಟ್ರೇಶ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್. ಷಣ್ಮುಖಪ್ಪ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೆ.ನಾಗರಾಜ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಗಾಯಿತ್ರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts