ವೈದ್ಯಾಧಿಕಾರಿಗಳ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧ

ದಾವಣಗೆರೆ: ಸರ್ಕಾರಿ ವೈದ್ಯಕೀಯ ಕಾಲೇಜುಗಳ ಬೋಧಕರಿಗೆ ಸಿಗುವ ಸೌಲಭ್ಯಗಳನ್ನು ಸರ್ಕಾರಿ ವೈದ್ಯಾಧಿಕಾರಿಗಳಿಗೆ ವಿಸ್ತರಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದಿಂದ ನಗರದ ಎಸ್.ಎಸ್. ಕನ್ವೆನ್‌ಷನ್ ಹಾಲ್‌ನಲ್ಲಿ ಶನಿವಾರ ಆಯೋಜಿಸಿದ್ದ, ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ರಾಜ್ಯಮಟ್ಟದ 29 ನೇ ಸಮ್ಮೇಳನ ‘ಸಂಕಲ್ಪ-2018’ ಉದ್ಘಾಟಿಸಿ ಮಾತನಾಡಿದರು.

ಮೂರ್ನಾಲ್ಕು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಗುತ್ತಿಗೆ ಆಧಾರದ ವೈದ್ಯರ ಸೇವೆಯನ್ನು ಕಾಯಂ ಮಾಡುವ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ. ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಲು ಸರ್ಕಾರದ ಮಟ್ಟದಲ್ಲಿ ತೀರ್ಮಾನ ಆಗಿದೆ ಎಂದು ತಿಳಿಸಿದರು.

ಜಿಲ್ಲಾಸ್ಪತ್ರೆಗಳು ಮತ್ತು ಮೇಲ್ದರ್ಜೆಯ ಆಸ್ಪತ್ರೆಗಳಲ್ಲಿ ಡಿ.ಎನ್.ಬಿ. ಕೋರ್ಸ್‌ನಲ್ಲಿ ಸೇವಾ ನಿರತ ವೈದ್ಯರಿಗೆ ಸೀಟುಗಳನ್ನು ಕಾಯ್ದಿರಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಮುಂದಿನ ವಾರ ದೆಹಲಿಗೆ ತೆರಳಿ ಈ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ್ ಮಾತನಾಡಿ, ರಾಜ್ಯದ ಆರೋಗ್ಯ ಇಲಾಖೆ ಮಾಡಿದ ಸಾಧನೆಗೆ ಕೇಂದ್ರ ಸರ್ಕಾರ ಈ ವರ್ಷ ಕರ್ನಾಟಕಕ್ಕೆ 3 ಬಹುಮಾನ ನೀಡಿದೆ. ಐ.ಪಿ.ಡಿ. ಸೇವೆಯಲ್ಲಿ 2ನೇ ಸ್ಥಾನ, ಶಿಶುಮರಣ ಪ್ರಮಾಣದಲ್ಲಿ 3ನೇ ಸ್ಥಾನ, ಹೊರ ರೋಗಿಗಳ ಸೇವೆಯಲ್ಲಿ 3ನೇ ಸ್ಥಾನದಲ್ಲಿದೆ ಎಂದು ವಿವರಿಸಿದರು.

ದೇಶದ ಇತರ ರಾಜ್ಯಗಳಿಗೆ ಹೋಲಿಸಿದಾಗ ಕರ್ನಾಟಕದಲ್ಲಿ ಎಚ್1ಎನ್1 ಪ್ರಕರಣಗಳು ಕಡಿಮೆ ಇವೆ. ಆರೋಗ್ಯ ಇಲಾಖೆ ತೀಕ್ಷ್ಣವಾಗಿ ಗಮನ ಹರಿಸಿ ಅಗತ್ಯ ಕ್ರಮ ಕೈಗೊಂಡಿದೆ ಎಂದು ಹೇಳಿದರು.