More

    ಅಧಿವೇಶನದಲ್ಲಿ ಬೇಡಿಕೆ ಪ್ರಸ್ತಾಪ

    ದಾವಣಗೆರೆ : ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಬಗ್ಗೆ ವಿಧಾನ ಮಂಡಲದ ಬೆಳಗಾವಿ ಅಧಿವೇಶನದಲ್ಲಿ ಧ್ವನಿ ಎತ್ತಲಾಗುವುದು ಎಂದು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದರು.
     ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯಿಂದ ನಗರದ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ಸೋಮವಾರ, ಪ್ರಸಕ್ತ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ, ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದರು.
     ಏಳನೇ ವೇತನ ಆಯೋಗದ ವರದಿಯ ಜಾರಿ, ಹಳೆಯ ಪಿಂಚಣಿ ವ್ಯವಸ್ಥೆ ಅನುಷ್ಠಾನದ ಬಗ್ಗೆ ಕಾಂಗ್ರೆಸ್‌ನ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಲಾಗಿತ್ತು. ಮೊದಲ ಅಧಿವೇಶನದಲ್ಲಿ ಅದನ್ನು ಈಡೇರಿಸಲು ಆಗಿಲ್ಲ, ಮುಂಬರುವ ದಿನಗಳಲ್ಲಿ ಸರ್ಕಾರ ಸ್ಪಂದಿಸಲಿದೆ. ನಿಮ್ಮೊಂದಿಗೆ ನಾವಿದ್ದೇವೆ ಎಂದು ಭರವಸೆ ನೀಡಿದರು.
     ಸರ್ಕಾರಿ ನೌಕರರ ಸಂಘಟನೆ ಸರ್ವ ಜನಾಂಗದ ಶಾಂತಿಯ ತೋಟದಂತಿರಬೇಕು. ಸರ್ಕಾರಿ ಕಚೇರಿಗೆ ರೈತರು ಬಂದಾಗ ಅವರ ಕಷ್ಟಗಳಿಗೆ ನೌಕರರು ಸ್ಪಂದಿಸಬೇಕು ಎಂದು ತಿಳಿಸಿದರು.
     ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಈಗಾಗಲೇ 4 ಗ್ಯಾರಂಟಿಗಳನ್ನು ಈಡೇರಿಸಿದ್ದು 5ನೇ ಗ್ಯಾರಂಟಿಯನ್ನು ಜನವರಿಯಲ್ಲಿ ಜಾರಿಗೆ ತರಲಾಗುವುದು ಎಂದು ಹೇಳಿದರು.
     ಹರಿಹರ ಶಾಸಕ ಬಿ.ಪಿ. ಹರೀಶ್ ಮಾತನಾಡಿ, ಬಸವರಾಜ ಬೊಮ್ಮಾಯಿ ಸಿಎಂ ಇದ್ದಾಗ ಸರ್ಕಾರಿ ನೌಕರರ ಬೇಡಿಕೆಗಳಿಗೆ ಸ್ಪಂದಿಸಿದ್ದರು. ಸರ್ಕಾರಿ ನೌಕರರ ಪರವಾಗಿ ಸದನದ ಒಳಗೆ ಮತ್ತು ಹೊರಗೆ ನಾವು ಬೆಂಬಲ ನೀಡುತ್ತೇವೆ ಎಂದು ತಿಳಿಸಿದರು.
     ಕೋವಿಡ್ ಸಂದರ್ಭದಲ್ಲಿ ಸರ್ಕಾರಿ ನೌಕರರು ವಿಶೇಷವಾಗಿ ಆರೋಗ್ಯ ಇಲಾಖೆಯವರು ಉತ್ತಮ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು. ನಾವೆಲ್ಲರೂ ಸೇರಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸೋಣ ಎಂದು ಹೇಳಿದರು.
     ಸಂಘದ ಜಿಲ್ಲಾಧ್ಯಕ್ಷ ವೀರೇಶ ಎಸ್. ಒಡೇನಪುರ ಪ್ರಾಸ್ತಾವಿಕ ಮಾತನಾಡಿ, 7ನೇ ವೇತನ ಆಯೋಗದ ವರದಿ ಜಾರಿಗೊಳಿಸಬೇಕು. ಹೊಸ ಪಿಂಚಣಿ ವ್ಯವಸ್ಥೆಯನ್ನು ತೆಗೆದು ಹಳೆಯ ಪಿಂಚಣಿ ಪದ್ಧತಿಯನ್ನು ಜಾರಿಗೆ ತರಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಗಳಾಗಿವೆ. ಸರ್ಕಾರ ಆದಷ್ಟು ಶೀಘ್ರ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
     ಸಂಘದ ಹೋರಾಟದ ಫಲವಾಗಿ 2019 ರಿಂದ ಇಲ್ಲಿಯ ವರೆಗೆ ಸರ್ಕಾರದಿಂದ ಹಲವು ಆದೇಶಗಳಾಗಿವೆ. ಮುಂಬರುವ ದಿನಗಳಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡೋಣ. ಆಡಳಿತದಲ್ಲಿ ಕನ್ನಡವನ್ನು ಬಳಸೋಣ ಎಂದು ತಿಳಿಸಿದರು.
     ಚನ್ನಗಿರಿ ಶಾಸಕ ಬಸವರಾಜು ಶಿವಗಂಗಾ, ಹೊನ್ನಾಳಿ ಶಾಸಕ ಡಿ.ಜಿ. ಶಾಂತನಗೌಡ ಮಾತನಾಡಿದರು. ಸಂಘಟನೆಯ ಮುಖಂಡರಾದ ಮಲ್ಲಿಕಾರ್ಜುನ ಬಳ್ಳಾರಿ, ಬಿ. ಪಾಲಾಕ್ಷಿ, ಎಂ.ವಿ. ರುದ್ರಪ್ಪ, ಎಸ್. ಬಸವರಾಜ, ಡಾ. ನಲ್ಕುದುರೆ ಸದಾನಂದ, ಗುರುಮೂರ್ತಿ, ತಿಪ್ಪೇಸ್ವಾಮಿ, ಮಂಜಮ್ಮ, ಪ್ರಮಿಳಾ, ಎಚ್. ಬಸವರಾಜ, ಮಹೇಶ, ಎ.ಕೆ. ಭೂಮೇಶ್ ಇದ್ದರು.
     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts