

ದಾವಣಗೆರೆ : ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಸರಳ ರೀತಿಯಲ್ಲಿ, ಮಾಲಿನ್ಯ ರಹಿತವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಮನವಿ ಮಾಡಿದ್ದಾರೆ. ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮತ್ತು ವಾಯು ಮಾಲಿನ್ಯ ಉಂಟು ಮಾಡಿ ಪರಿಸರಕ್ಕೆ ಹಾನಿಯಾಗುತ್ತದೆ. ಜನರ ಆರೋಗ್ಯವನ್ನು ಹದಗೆಡಿಸುತ್ತದೆ. ಪ್ರಾಣಿ-ಪಕ್ಷಿಗಳ ಕಲರವಕ್ಕೆ ಘಾಸಿ ಉಂಟುಮಾಡುತ್ತದೆ. ಪಟಾಕಿ ಬಾಕ್ಸೃ್ಗಳ ಮೇಲೆ ಕೌನ್ಸಿಲ್ ಆಫ್ ಸೈಂಟಿಫಿಕ್ ಆ್ಯಂಡ್ ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್ಐಆರ್) ಮತ್ತು ನ್ಯಾಷನಲ್ ಎನ್ವಿರಾನ್ಮೆಂಟಲ್ ಇಂಜಿನಿಯರಿಂಗ್ ರಿಸರ್ಚ್ ಇನ್ಸ್ಟಿಟ್ಯೂಟ್ (ಎನ್ಇಇಆರ್ಐ) ಇವರ ಲೋಗೋ ಹಾಗೂ ನೋಂದಾಯಿತ ಸಂಖ್ಯೆಯೊಂದಿಗೆ ಮುದ್ರಿತವಾಗಿರಬೇಕು. ಅಧಿಕೃತ ಮಾರಾಟಗಾರರು ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರದಿಂದ ನೀಡುವ ಪರವಾನಗಿಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳಗಳಲ್ಲಿ ಮಾತ್ರ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ಇಡಬೇಕು. ನಿಷೇಧಿತ ಪಟಾಕಿಗಳ ಮಾರಾಟ ಕಂಡುಬಂದಲ್ಲಿ ಅವುಗಳನ್ನು ವಶಪಡಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.