More

    ರಾಜ್ಯದಲ್ಲಿ ಹಿಂದುಗಳ ವಿರೋಧಿ ಸರ್ಕಾರ

    ದಾವಣಗೆರೆ : ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವುದು ಬಹುಸಂಖ್ಯಾತ ಹಿಂದುಗಳ ವಿರೋಧಿ ಸರ್ಕಾರ ಎಂದು ವಿಧಾನ ಪರಿಷತ್ತಿನ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಹೇಳಿದರು.
     ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಲ್ಪಸಂಖ್ಯಾತರ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ.ಗಳನ್ನು ಘೋಷಣೆ ಮಾಡಿ, 1 ಸಾವಿರ ಕೋಟಿ ರೂ. ಬಿಡುಗಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಮಾಡಿದ್ದಾರೆ ಎಂದು ತಿಳಿಸಿದರು.
     ರಾಜ್ಯದಲ್ಲಿ ಕಿತ್ತು ತಿನ್ನುವ ಬರಗಾಲವಿದೆ. ವಿದ್ಯುತ್ ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ. 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಿಂದುಳಿದ ವರ್ಗಗಳ ಹಾಸ್ಟೆಲ್‌ಗಳಲ್ಲಿ ಸೌಲಭ್ಯ ಸಿಗುತ್ತಿಲ್ಲ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಗಳಿಗೆ ಒಂದು ಪೈಸೆ ಅನುದಾನ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
     ಗೋ ರಕ್ಷಕರನ್ನು, ಹೋರಾಟಗಾರರನ್ನು ಬಂಧಿಸಲಾಗುತ್ತಿದೆ. ಆದರೆ ಪಿಎಫ್‌ಐನಂಥ ಸಂಘಟನೆಗಳ ವಿರುದ್ಧದ ಪ್ರಕರಣಗಳನ್ನು ವಾಪಸ್ ಪಡೆಯಲಾಗುತ್ತಿದೆ. ರಾಮ ಜನ್ಮಭೂಮಿಗಾಗಿ ಹೋರಾಟ ಮಾಡಿದವರ ವಿರುದ್ಧದ ಹಳೆಯ ಪ್ರಕರಣಗಳನ್ನು ಈಗ ಹೊರ ತೆಗೆಯಲಾಗುತ್ತಿದೆ. ಇದರ ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕರೆ ನೀಡಿದ್ದಾರೆ. ಎಲ್ಲ ಜಿಲ್ಲೆಗಳಲ್ಲಿ ಕಾರ್ಯಕರ್ತರು ಪ್ರಬಲ ಪ್ರತಿಭಟನೆ ಮಾಡುವಂತೆ ಮನವಿ ಮಾಡಿದರು.
     ಭೀಕರ ಬರಗಾಲವಿರುವ ಈ ಸಂದರ್ಭದಲ್ಲಿ ರೈತರಿಗೆ ಪರಿಹಾರ ನೀಡುವುದು ಮುಖ್ಯವೋ, ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಣ ನೀಡುವುದು ಮುಖ್ಯವೋ ಎಂದು ಜನರ ಅಭಿಪ್ರಾಯ ಸಂಗ್ರಹ ಮಾಡಲಿ ಎಂದು ಸರ್ಕಾರಕ್ಕೆ ಸಲಹೆ ನೀಡಿದರು.
     ಸಿಎಂ ಸಿದ್ದರಾಮಯ್ಯ ಸಮಾಜ ಒಡೆಯುವ ಕೆಲಸ ಮಾಡಬಾರದು. ಇದೇ ಧೋರಣೆ ಮುಂದುವರಿಸಿದರೆ ಮುಂಬರುವ ಲೋಕಸಭಾ ಚುನಾವನೆಯಲ್ಲಿ ಜನರು ಪಾಠ ಕಲಿಸುತ್ತಾರೆ ಎಂದು ಹೇಳಿದರು.
     ಅಯೋಧ್ಯೆಯಲ್ಲಿ ಇರುವುದು ಬಿಜೆಪಿಯ ರಾಮನ ದೇಗುಲ ಎಂದು ಮಾಜಿ ಸಚಿವ ಎಚ್. ಆಂಜನೇಯ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿ, ನಮ್ಮ ದೇಶದಲ್ಲಿ ಶಿವ, ರಾಮ, ವಿಷ್ಣು ಇನ್ನಿತರ ದೇವಾನುದೇವತೆಗಳು ಇಬ್ಬಿಬ್ಬರು ಇಲ್ಲ, ಒಬ್ಬರೇ ಇರುವುದು. ಕಾಂಗ್ರೆಸ್‌ನ ರಾಮ ಬೇರೆ, ಬಿಜೆಪಿಯ ರಾಮ ಬೇರೆ ಎಂದು ಆಂಜನೇಯ ಅವರು ಯಾವ ಶಾಲೆಯಲ್ಲಿ ಓದಿರುವರೋ ಗೊತ್ತಿಲ್ಲ. ಅವರು ತಮ್ಮ ಹೆಸರಿಗೆ ತಕ್ಕಂತೆ ಮಾತನಾಡುವುದು ಒಳ್ಳೆಯದು ಎಂದು ಟಾಂಗ್ ಕೊಟ್ಟರು.
     ಬಿಜೆಪಿಯ ಮುಖಂಡರ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ವ್ಯಂಗ್ಯವಾಗಿ ಮಾತನಾಡಿರುವುದು ಅವರಿಗೆ ಶೋಭೆ ತರುವುದಿಲ್ಲ ಎಂದರು.
     ಶಾಸಕ ಬಸನಗೌಡ ಪಾಟೀಲ್ ಅವರ ಹೇಳಿಕೆಗಳನ್ನು ಪಕ್ಷದ ವರಿಷ್ಠರು ಗಮನಿಸುತ್ತಿದ್ದಾರೆ. ಎಲ್ಲವೂ ಸರಿಯಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
     ಮಹಾನಗರ ಪಾಲಿಕೆಯ ಉಪ ಮೇಯರ್ ಯಶೋದಾ, ಪ್ರತಿಪಕ್ಷ ನಾಯಕ ಕೆ. ಪ್ರಸನ್ನಕುಮಾರ್, ಸದಸ್ಯರಾದ ಎಸ್.ಟಿ. ವೀರೇಶ್, ಕೆ.ಎಂ. ಸುರೇಶ್, ಸೋಗಿ ಶಾಂತಕುಮಾರ್, ಶಿವಪ್ರಕಾಶ್, ಶಿವಾನಂದ, ಮುಖಂಡರಾದ ಶಿವರಾಜ ಪಾಟೀಲ್, ಎಚ್.ಎನ್. ಶಿವಕುಮಾರ್, ಶ್ರೀನಿವಾಸ ದಾಸಕರಿಯಪ್ಪ, ಧನಂಜಯ ಕಡ್ಲೇಬಾಳ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts