ದಾವಣಗೆರೆ : ಸವಿತಾ ಸಮಾಜವು ಸಂಘಟಿತವಾಗಿ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಬೆಳೆಯಬೇಕು ಎಂದು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದರು. ಜಿಲ್ಲಾಡಳಿತ ಭವನದಲ್ಲಿ ಬುಧವಾರ, ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ಸವಿತಾ ಮಹರ್ಷಿ ಜಯಂತಿ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಸವಿತಾ ಸಮಾಜದ ಪ್ರತಿಯೊಬ್ಬರೂ ಸುಶಿಕ್ಷಿತರಾಗಬೇಕು. ಆಗ ಮಾತ್ರ ಶ್ರೀಮಂತ, ಬಡವ, ಮೇಲು, ಕೀಳು ಎಂಬ ಮನೋಭಾವನೆ ದೂರವಾಗುತ್ತದೆ. ನಾವೆಲ್ಲರೂ ಒಗ್ಗಟ್ಟಾಗಿ ಇರಬೇಕು. ಸಮಾಜದಲ್ಲಿ ಇರುವ ತೊಡಕುಗಳನ್ನು ಬಿಡಿಸಿಕೊಂಡು ನಡೆದರೆ ಮಾತ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ತಿಳಿಸಿದರು. ವೃತ್ತಿ ಬದುಕಿಗೆ ಅನುಕೂಲವಾಗಲು ಪರಿಕರಗಳ ಕಿಟ್ ನೀಡಬೇಕು. ಪಾಲಿಕೆಯಲ್ಲಿರುವ ಮಳಿಗೆಗಳನ್ನು ಇವರಿಗೆ ಕಡಿಮೆ ಬಾಡಿಗೆಗೆ ನೀಡಬೇಕು ಎಂದರು. ಹೊಂಡದ ವೃತ್ತದಲ್ಲಿರುವ ಸಮುದಾಯ ಭವನದ ಕಟ್ಟಡವನ್ನು ಪೂರ್ಣಗೊಳಿಸಲು ಸಚಿವರೊಂದಿಗೆ ಮಾತನಾಡಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಸವಿತಾ ಮಹರ್ಷಿಗಳು ಸಮಾಜಕ್ಕೆ ದಾರಿದೀಪವಾಗಿದ್ದಾರೆ. ಇಂತಹ ಮಹಾತ್ಮರ ಜಯಂತಿ ಆಚರಿಸುವ ಮೂಲಕ ಅವರ ಆದರ್ಶಗಳ ಹಾದಿಯಲ್ಲಿ ನಡೆಯಬೇಕು ಎಂದು ಹೇಳಿದರು. ಸವಿತಾ ಮಹರ್ಷಿ ಜಯಂತಿ ಆಚರಣೆಯಿಂದ ಸಮುದಾಯದ ಜನರನ್ನು ಸಂಘಟಿಸಲು ಸಹಾಯವಾಗುತ್ತದೆ. ಕಡಿಮೆ ಜನಸಂಖ್ಯೆ ಹೊಂದಿರುವ ಸವಿತಾ ಸಮಾಜದವರು ಮುಖ್ಯವಾಹಿನಿಗೆ ಬರಬೇಕು ಎಂದು ತಿಳಿಸಿದರು. ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಮಹಾನಗರ ಪಾಲಿಕೆ ಮೇಯರ್ ಕೆ. ಚಮನ್ ಸಾಬ್, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ತಹಸೀಲ್ದಾರ್ ಡಾ.ಎಂ.ಬಿ. ಅಶ್ವಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಸಂಘದ ಜಿಲ್ಲಾಧ್ಯಕ್ಷ ಬಾಲರಾಜ್, ವಕೀಲ ರಂಗಸ್ವಾಮಿ ಹಾಗೂ ಸಮಾಜದ ಮುಖಂಡರು ಭಾಗವಹಿಸಿದ್ದರು.
