More

    ವ್ಯಸನಮುಕ್ತ ಸಮಾಜ ನಿರ್ಮಾಣ ಎಲ್ಲರ ಹೊಣೆ

    ದಾವಣಗೆರೆ : ದೇಶದಲ್ಲಿ ಶೇ. 22ರಷ್ಟು ಯುವ ಜನತೆ ತಂಬಾಕು ವ್ಯಸನಿಗಳಾಗಿದ್ದು, ವಿವಿಧ ಚಟಗಳಿಗೆ ದಾಸರಾಗಿದ್ದಾರೆ. ವ್ಯಸನಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಹೇಳಿದರು.
     ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ವಕೀಲರ ಸಂಘ, ಎನ್.ಪಿ.ಸಿ. ಘಟಕ, ಕರುಣಾ ಜೀವ ಕಲ್ಯಾಣ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಬುಧವಾರ, ಚಿಗಟೇರಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ತಂಬಾಕು ರಹಿತ ದಿನದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
     ತಂಬಾಕು ಬೆಳೆಯುವ ರೈತರಿಗೆ ಪರ್ಯಾಯ ಬೆಳೆ ಬೆಳೆಯಲು ಪ್ರೋತ್ಸಾಹ ನೀಡಬೇಕು, ಉತ್ಪಾದನೆಗೆ ಸಹಕಾರ ಕೊಡಬೇಕು. ಮಾರುಕಟ್ಟೆ ಕುರಿತಂತೆ ಅವರಿಗೆ ಮಾರ್ಗದರ್ಶನ ನೀಡಬೇಕು. ತಂಬಾಕು ಬೆಳೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಹೇಳಿದರು.
     ವಿಶ್ವ ಆರೋಗ್ಯ ಸಂಸ್ಥೆಯು 1987ರಿಂದ ವಿಶ್ವ ತಂಬಾಕು ರಹಿತ ದಿನವನ್ನು ಆಚರಿಸುತ್ತ ಬರುತ್ತಿದೆ. ಈ ವರ್ಷದ ಘೋಷ ವಾಕ್ಯ ‘ನಮಗೆ ಆಹಾರ ಬೇಕು, ತಂಬಾಕು ಬೇಡ’ ಎನ್ನುವುದಾಗಿದೆ. ತಂಬಾಕಿನಿಂದ ಆಗುವ ದುಷ್ಪರಿಣಾಮಗಳು, ಸಾವು ನೋವುಗಳು ಮತ್ತು ವಿವಿಧ ಅಸಾಂಕ್ರಾಮಿಕ ರೋಗಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕಿದೆ ಎಂದು ತಿಳಿಸಿದರು.
     ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ.ಜಿ.ಡಿ.ರಾಘವನ್ ಮಾತನಾಡಿ, ರಾಜ್ಯದಲ್ಲಿ ಶೇ. 51.7ರಷ್ಟು ತಂಬಾಕು ವ್ಯಸನಿಗಳಿದ್ದು ಶೇ. 63.9 ರಷ್ಟು ಹೊಗೆರಹಿತ ತಂಬಾಕು ಬಳಕೆದಾರರಿದ್ದಾರೆ. ಇವರಿಗೆ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸಿ ಅದನ್ನು ತ್ಯಜಿಸುವಂತೆ ಇಲಾಖೆ ಜಾಗೃತಿ ಮೂಡಿಸುತ್ತಾ ಬರುತ್ತಿದೆ ಎಂದರು.
     ರಾಜ್ಯದಲ್ಲಿ ತಂಬಾಕು ವ್ಯಸನಗಳಿಗೆ ಆಪ್ತ ಸಮಾಲೋಚನೆ ಮಾಡುವ ಮೂಲಕ ಅವರ ಮನಸ್ಥಿತಿಯನ್ನು ಬಲಪಡಿಸಿ, ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕು. ತಂಬಾಕು ಬಳಕೆಯನ್ನು ಕಡಿಮೆ ಮಾಡಿ ಪೌಷ್ಟಿಕ ಆಹಾರಗಳ ಬಳಕೆಯನ್ನು ಹೆಚ್ಚಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವುದೇ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
     ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗರಾಜ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಎಂ. ಕರೆಣ್ಣವರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣ್ ಕುಮಾರ್, ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ಎಸ್.ಸುಭಾಷ್ ಚಂದ್ರ, ಕರುಣಾ ಜೀವ ಕಲ್ಯಾಣ ಟ್ರಸ್ಟ್‌ನ ಶಿವನಕೆರೆ ಬಸವಲಿಂಗಪ್ಪ ಇದ್ದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts