ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ, 2019-20ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ದೊರೆಯಿತು.
ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಕಬಡ್ಡಿ, ಬ್ಯಾಸ್ಕೆಟ್ಬಾಲ್, ಬಾಲ್ಬ್ಯಾಡ್ಮಿಂಟನ್, ಥ್ರೋಬಾಲ್, ಹ್ಯಾಂಡ್ಬಾಲ್, ಕುಸ್ತಿ, ಶಟಲ್ ಬ್ಯಾಡ್ಮಿಂಟನ್, ಟೇಬಲ್ ಟೆನಿಸ್, ಫುಟ್ಬಾಲ್, ಹಾಕಿ, ನೆಟ್ಬಾಲ್, ಟೆನಿಸ್ ಹಾಗೂ ಈಜು ಸ್ಪರ್ಧೆ ಆಯೋಜಿಸಲಾಗಿದೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಎಸ್.ಎ.ರವೀಂದ್ರನಾಥ್ ಮಾತನಾಡಿ, ಕ್ರೀಡಾಪಟುಗಳು ಉತ್ತಮ ತರಬೇತಿ ಪಡೆದು, ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕು ಎಂದರು.
ಕ್ರೀಡಾಕೂಟ ಉದ್ಘಾಟಿಸಿದ ಜಿಪಂ ಅಧ್ಯಕ್ಷೆ ಶೈಲಜಾ ಬಸವರಾಜ್ ಮಾತನಾಡಿ, ಕ್ರೀಡಾಪಟುಗಳು ಹಂತ ಹಂತವಾಗಿ ಉನ್ನತ ಮಟ್ಟಕ್ಕೆ ಏರಬೇಕು ಎಂದು ಹಾರೈಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಬಿ. ಶ್ರೀನಿವಾಸ್, ದೈಹಿಕ ಶಿಕ್ಷಣ ಶಿಕ್ಷಕರು, ಪುರುಷ ಹಾಗೂ ಮಹಿಳಾ ಕ್ರೀಡಾಪಟುಗಳು ಪಾಲ್ಗೊಂಡಿದ್ದರು.