More

    ಗಣರಾಜ್ಯೋತ್ಸವ ಸರಳ ಆಚರಣೆಗೆ ನಿರ್ಧಾರ

    ದಾವಣಗೆರೆ: ಜಿಲ್ಲಾ ಕೇಂದ್ರದಲ್ಲಿ ಜ. 26 ರಂದು 73 ನೇ ಗಣರಾಜ್ಯೋತ್ಸವವನ್ನು ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲು ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ನಿರ್ಧರಿಸಲಾಯಿತು. ಜಿಪಂ ಸಿಇಒ ಡಾ. ವಿಜಯ ಮಹಾಂತೇಶ್ ದಾನಮ್ಮನವರ್ ಮಾತನಾಡಿ, ಎಲ್ಲ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸಮಾರಂಭದಲ್ಲಿ ಭಾಗವಹಿಸುವುದು ಕಡ್ಡಾಯ ಎಂದು ಹೇಳಿದರು.

    ಅಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಲಿದೆ. ಎಲ್ಲ್ಲ ಇಲಾಖಾ ಮುಖ್ಯಸ್ಥರು ತಮ್ಮ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿ 8.30ರ ಒಳಗಾಗಿ ಕ್ರೀಡಾಂಗಣದಲ್ಲಿ ಹಾಜರಿರಬೇಕು ಎಂದು ಸೂಚಿಸಿದರು. ಸಮಾರಂಭದಲ್ಲಿ ಶಾಲಾ ಮಕ್ಕಳು,ಸಾರ್ವಜನಿಕರು ಪಾಲ್ಗೊಳ್ಳುತ್ತಿಲ್ಲ. ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಧರಿಸಿ ಪರಸ್ಪರ ಅಂತರ ಕಾಯ್ದುಕೊಳ್ಳಬೇಕು. ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ, ಪಥ ಸಂಚಲನದಲ್ಲಿ ಪೊಲೀಸ್, ಅರಣ್ಯ, ಅಗ್ನಿಶಾಮಕ, ಗೃಹರಕ್ಷಕ ದಳದ ತಂಡಗಳು ಪಾಲ್ಗೊಳ್ಳಲಿವೆ ಎಂದರು.

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಸಾಧಾರಣ ಸಾಧಕ ಮಕ್ಕಳಿಗೆ ಹಾಗೂ ಕೃಷಿ ಇಲಾಖೆಯಿಂದ ಪ್ರಗತಿಪರ ರೈತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಪ್ಲಾಸ್ಟಿಕ್ ಧ್ವಜ, ಹೂಗುಚ್ಛಗಳನ್ನು ಬಳಸುವಂತಿಲ್ಲ. ಇಲಾಖೆಗಳಲ್ಲಿ ಧ್ವಜ ಸಂಹಿತೆ ಕಾಪಾಡಬೇಕು. ಸರ್ಕಾರಿ ಕಚೇರಿ ಕಟ್ಟಡಗಳು, ನಗರದ ಪ್ರಮುಖ ವೃತ್ತಗಳಿಗೆ ದೀಪಾಲಂಕಾರ ಮಾಡಿಸಬೇಕು ಎಂದು ಹೇಳಿದರು.

    ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಮಾತನಾಡಿ, ಧ್ವಜ ಸಂಹಿತೆ ಕುರಿತಂತೆ ಜ. 24 ರಂದು ದಾವಣಗೆರೆಯ ಡಿ.ಆರ್. ಕಚೇರಿ ಆವರಣದಲ್ಲಿ ಸೇವಾದಳದಿಂದ ಎಲ್ಲ ಇಲಾಖೆಗಳಿಗೆ ತರಬೇತಿ ಏರ್ಪಡಿಸಲಾಗಿದ್ದು, ಆಸಕ್ತ ಸಿಬ್ಬಂದಿ ಭಾಗವಹಿಸಬಹುದು ಎಂದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮಗೊಂಡ ಬಸರಗಿ, ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ್, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಸಮಾಜ ಕಲ್ಯಾಣಾಧಿಕಾರಿ ರೇಷ್ಮಾ ಕೌಸರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಜಿ. ನಜ್ಮಾ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts